ಒಂದು ದೇಶ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ!
ನವದೆಹಲಿ: ಒಂದು ದೇಶ ಒಂದು ಚುನಾವಣೆ ಪ್ರಕ್ರಿಯೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ.
ಲೋಕಸಭೆ ಮತ್ತು ರಾಜ್ಯ ಸಭೆಗಳಿಗೆ ಹಲವಾರು ವರ್ಷಗಳ ಅಂತರದಲ್ಲಿ ಚುನಾವಣೆಗಳು ನಡೆಯುತ್ತವೆ. ಇದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಧಕ್ಕೆಯಾಗುತ್ತದೆ. ಇದರ ಬೆನ್ನಲ್ಲೇ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಪಕ್ಷಾತೀತವಾಗಿ ಬೆಂಬಲ ಮತ್ತು ವಿರೋಧ ವ್ಯಕ್ತವಾಗಿದೆ.
ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ಸೇರಿದಂತೆ 5 ರಾಜ್ಯಗಳ ವಿಧಾನಸಭೆಗಳಿಗೆ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಮುಂದಿನ ವರ್ಷ ಲೋಕಸಭೆಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇದೇ 18 ರಿಂದ 22 ರವರೆಗೆ ವಿಶೇಷ ಸಂಸತ್ ಅಧಿವೇಶನ ಕರೆದಿದೆ.
ಇದಕ್ಕೆ ಕಾರಣ ಏನೆಂಬುದನ್ನು ಪ್ರಕಟಿಸದಿದ್ದರೂ, ಒಂದು ದೇಶ ಒಂದು ಚುನಾವಣೆ ಎಂಬ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ದೆಹಲಿ ಮೂಲಗಳು ತಿಳಿಸಿವೆ.
ಈ ಹಿನ್ನಲೆಯಲ್ಲಿ, ಒಂದು ದೇಶ ಒಂದು ಚುನಾವಣೆ ಪ್ರಕ್ರಿಯೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ. ಸಮಿತಿ ನೀಡುವ ಮಾಹಿತಿ ಆಧರಿಸಿ ಕೇಂದ್ರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.