ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ! » Dynamic Leader
October 31, 2024
ರಾಜಕೀಯ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ!

ಬೆಂಗಳೂರು: ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಸಭಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.  ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಶಾಸಕರೆಲ್ಲರೂ ಸಹಮತ ಸೂಚಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದರು.

ಕೇವಲ 25 ನಿಮಿಷ ಸಭೆ ನಡೆಸಲಾಯಿತು. ಇಂದು ನಡೆದ ಸಿಎಲ್‌ಪಿ ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ಸುಶೀಲ್ ಕುಮಾರ್​ ಶಿಂಧೆ, ಜಿತೇಂದ್ರ ಸಿಂಗ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌  ಹಾಗೂ ನೂತನವಾಗಿ ಆಯ್ಕೆಯಾಗಿದ್ದ ಶಾಸಕರು ಭಾಗಿಯಾಗಿದ್ದರು. ಶಾಸಕರು ಬಂದ ಇಂದಿರಾಗಾಂಧಿ ಸಭಾಂಗಣದ ದ್ವಾರದಿಂದ ಸಿದ್ದರಾಮಯ್ಯ ಪ್ರವೇಶ ಮಾಡಿದರು. ಡಿಕೆಶಿ ಆಗಮನಕ್ಕೆ ಪೊಲೀಸರು ಬ್ಯಾರಿಗೇಡ್ ಹಾಕಿ ಪ್ರತ್ಯೇಕ ವ್ಯವಸ್ಥೆ ಮಾಡಿದ್ದರು.

“ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ನನ್ನನ್ನು ಆಯ್ಕೆ ಮಾಡಿದ ಶಾಸಕ ಮಿತ್ರರೆಲ್ಲರಿಗೂ ತುಂಬುಹೃದಯದ ಕೃತಜ್ಞತೆಗಳು. ನನ್ನ ಪ್ರಕಾರ ಪ್ರತಿಯೊಬ್ಬ ಶಾಸಕರು ಕೂಡಾ ನಾಯಕರು. ಈ ಸಾಮೂಹಿಕ ನಾಯಕತ್ವದ ಮೂಲಕವೇ ನವಕರ್ನಾಟಕವನ್ನು ಕಟ್ಟೋಣ. ರಾಜ್ಯದ ಜನತೆಯ ನಿರೀಕ್ಷೆಗಳನ್ನು ಸಾಕಾರಗೊಳಿಸೋಣ” ಎಂದು ಸಭೆಯ ನಂತರ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.  

ನಾಳೆ ಬೆಳಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಅವರು ಸಂಭಾವ್ಯ ಸಚಿವರ ಪಟ್ಟಿ ಜತೆ ದೆಹಲಿಗೆ ತೆರಳಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ಪಡೆದು ನಂತರ ಸಂಪುಟ ರಚನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Related Posts