ಪ್ರತಿಪಕ್ಷಗಳ ನಾಯಕರ ಸಭೆ ಬೆಂಗಳೂರಿಗೆ ಸ್ಥಳಾಂತರ: ಪ್ರತಿಪಕ್ಷ ನಾಯಕರ ಸಭೆಯಿಂದ ಪ್ರಧಾನಿ ಮೋದಿ ಅಸ್ತವ್ಯಸ್ತರಾಗಿ ಕಾಣುತ್ತಿದ್ದಾರೆ!
ಮುಂಬೈ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯ ಬೇಕಿದ್ದ ವಿಪಕ್ಷ ನಾಯಕರ ಸಭೆಯನ್ನು, ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ಶಿಮ್ಲಾದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ, ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಆಡಳಿತಾರೂಢ ಬಿಜೆಪಿ ವಿರುದ್ಧ ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಿ, ಆಡಳಿತ ಪಕ್ಷದ ವಿರುದ್ಧ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಜೂನ್ 23 ರಂದು ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಸಭೆ ಕರೆಯಲಾಗಿತ್ತು.
ಆ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಂ.ಕೆ.ಸ್ಟಾಲಿನ್, ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್, ಅರವಿಂದ್ ಕೇಜ್ರಿವಾಲ್, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್ ಸೇರಿದಂತೆ 16 ವಿರೋಧ ಪಕ್ಷಗಳ ಮುಖಂಡರುಗಳು ಭಾಗವಹಿಸಿದ್ದರು. ಈ ಸಭೆಯ ಕೊನೆಯಲ್ಲಿ, ಮುಂದಿನ ಸಭೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯಲಿದೆ ಎಂದು ಘೋಷಿಸಲಾಗಿತ್ತು.
ಈ ಹಿನ್ನಲೆಯಲ್ಲಿ, ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್, “ಪಾಟ್ನಾದಲ್ಲಿ ನಡೆದ ಪ್ರತಿಪಕ್ಷ ನಾಯಕರ ಸಭೆಯಿಂದ ಪ್ರಧಾನಿ ಮೋದಿ ಅಸ್ತವ್ಯಸ್ತರಾಗಿ ಕಾಣುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಮುಂದಿನ ಸಭೆ ಜುಲೈ 13 ಮತ್ತು 14 ರಂದು ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿದೆ” ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶ ಶಿಮ್ಲಾದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ, ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗುತ್ತಿದೆ.