ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡುವ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ತರಬೇಕೆಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
2019ರಲ್ಲಿ, ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ರದ್ದುಗೊಳಿಸಿತು. ಅಲ್ಲದೆ, ಜಮ್ಮು ಮತ್ತು ಕಾಶ್ಮೀರವನ್ನು ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತು. ಕಾಶ್ಮೀರದ ಪರಿಸ್ಥಿತಿ ಸುಧಾರಿಸಿದ ನಂತರ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿತ್ತು.
ಈ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಪತ್ರವೊಂದನ್ನು ಬರೆದಿದ್ದಾರೆ. ಅದರಲ್ಲಿ, ‘ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡಲು ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಕಾನೂನಿಗೆ ತಿದ್ದುಪಡಿ ತರಬೇಕು’ ಎಂದು ಪ್ರಧಾನಿ ಮೋದಿಯನ್ನು ಒತ್ತಾಯಿಸಿದ್ದಾರೆ.
‘ಹಲವಾರು ಸಭೆಗಳಲ್ಲಿ ಮತ್ತು ಖಾಸಗಿಯಾಗಿ, ಕಾಶ್ಮೀರಕ್ಕೆ ರಾಜ್ಯತ್ವ ನೀಡಲು ಸರ್ಕಾರ ಬದ್ಧವಾಗಿದೆ ಎಂದು ನೀವು ಭರವಸೆ ನೀಡಿದ್ದೀರಿ. ಕಳೆದ ಮೇ 19, 2024 ರಂದು ಭುವನೇಶ್ವರದಲ್ಲಿ ನೀಡಿದ ಸಂದರ್ಶನದಲ್ಲಿ, ಕಾಶ್ಮೀರಕ್ಕೆ ರಾಜ್ಯತ್ವ ನೀಡುವ ನಮ್ಮ ಭರವಸೆಯಲ್ಲಿ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ನೀವು ಹೇಳಿದ್ದೀರಿ. ಸೆಪ್ಟೆಂಬರ್ 19, 2024 ರಂದು ಶ್ರೀನಗರದಲ್ಲಿ ಮಾತನಾಡುತ್ತಾ, ನಾವು ಸಂಸತ್ತಿನಲ್ಲಿ ರಾಜ್ಯತ್ವ ನೀಡುವ ಬಗ್ಗೆ ಚರ್ಚಿಸಿದ್ದೇವೆ ಎಂದು ನೀವು ಹೇಳಿದ್ದೀರಿ. ರಾಜ್ಯವೊಂದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸಿದ್ದು ಇದೇ ಮೊದಲು’ ವ್ಯಂಗ್ಯವಾಡಿದ್ದಾರೆ.
‘ಕಳೆದ ಐದು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದ ಜನರು ರಾಜ್ಯ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಅದು ಅವರ ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಹಕ್ಕು’ ಎಂದು ರಾಹುಲ್ ಪತ್ರದಲ್ಲಿ ತಿಳಿಸಿದ್ದಾರೆ.