ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ಒಂದೇ ಹಂತದಲ್ಲಿ ನಡೆದಿತ್ತು. ಮೇ 13 ರಂದು ಮತ ಎಣಿಕೆ ನಡೆಯಿತು. ಇದರಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಸೋಲಿಸಿ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ವಶಪಡಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿತು. ಈ ಬಾರಿಯ ಚುನಾವಣೆಯಲ್ಲಿ ಮೋದಿ ಕರ್ನಾಟಕದಲ್ಲಿ ಹಲವು ಬಾರಿ ಪ್ರಚಾರ ಮಾಡಿದರೂ ಬಿಜೆಪಿ ಗೆದ್ದಿದ್ದು ಕೇವಲ 66 ಸ್ಥಾನಗಳು ಮಾತ್ರ. ಹಲವು ಕ್ಷೇತ್ರಗಳಲ್ಲಿ ಠೇವಣಿಯನ್ನು ಕಳೆದುಕೊಂಡಿತು. ಮತ್ತು ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿಯಿತು.
ಕಾಂಗ್ರೆಸ್ ಪಕ್ಷದ ಗೆಲುವಿನ ನಂತರ ಕರ್ನಾಟಕದ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ನಂತರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದರು. ಅವರು ಸೋನಿಯಾ ಗಾಂಧಿಯವರೊಂದಿಗೂ ಸಮಾಲೋಚನೆ ನಡೆಸಿದರು. ನಂತರ ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರು ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿ ಎಂದು ಘೋಷಿಸಿದರು.

ಮುಂದುವರಿದು, ಇಂದು ಬೆಂಗಳೂರಿನ ಕಂಠೀರವ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇವರೊಂದಿಗೆ ಎಂ.ಬಿ.ಪಾಟೀಲ್, ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಕೆ.ಹೆಚ್.ಮುನಿಯಪ್ಪ, ಬಿ.ಝಡ್.ಜಮೀರ್ ಅಹಮದ್ ಖಾನ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೋಳಿ ಮುಂತಾದ 8 ಜನ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಮಾರಂಭದಲ್ಲಿ ಎಐಸಿಸಿ ಅಧ್ಯಕರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ ಹಾಗೂ ಮೆಗಬೂಬ ಮುಫ್ತಿ, ಕಮ್ಯುನಿಸ್ಟ್ ಪಕ್ಷದ ಸೀತಾರಾಂ ಯೆಚೂರಿ, ಡಿ.ರಾಜಾ, ವಿಡುದಲೈ ಚಿರುತ್ತೈಗಳ್ ನಾಯಾಕ ಸಂಸದ ತೊಲ್ ತಿರುಮಾವಳವನ್ ಹಾಗೂ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮುಂತಾದವರು ಭಾಗವಹಿಸಿದ್ದರು.

 
  
 

 
  
 










 
 
