ಜಂಟಿ ಮತ್ತು ಬಜೆಟ್ ಅಧಿವೇಶನದ ಪ್ರಯುಕ್ತ ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ!
ಬೆಂಗಳೂರು: ಜುಲೈ 3 ರಿಂದ 14 ರವರೆಗೆ ವಿಧಾನಸೌಧದಲ್ಲಿ ಜಂಟಿ ಮತ್ತು ಬಜೆಟ್ ಅಧಿವೇಶನ ನಡೆಯಲಿದೆ. ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತವೆ.
ಇದರಿಂದ ಅಧಿವೇಶನದ ಕಾರ್ಯ-ಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಗಳು ಇರುವುದರಿಂದ ಮತ್ತು ವಿಶೇಷ ಅಧಿವೇಶನದ ಕಲಾಪಗಳು ಸುಗುಮವಾಗಿ ನಡೆಯುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಐಪಿಎಸ್ ಅವರು ಈ ಕೆಳಕಂಡಂತೆ ಆದೇಶವನ್ನು ಹೊರಡಿಸಿದ್ದಾರೆ.
ದಂಡ ಪ್ರಕ್ರಿಯಾ ಸಂಹಿತೆ ಕಲಂ 144ನೇ ಪ್ರಕರಣದ ಅನ್ವಯ ದಿನಾಂಕ: 03.07.2023 ರಿಂದ ದಿನಾಂಕ: 14.07.2023 ರವರೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ (ಅನುಮತಿ ಪಡೆದು ಫ್ರೀಡಂ ಪಾರ್ಕ್ ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ) ಈ ಕೆಳಕಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
- ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು ನಿಷೇಧಿಸಿದೆ.
- ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ.
- ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನು ಉಂಟುಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
- ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
- ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷನೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.