ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಛೇರಿಗೆ ಮುತ್ತಿಗೆ: ಮೊಹಮ್ಮದ್ ನಲಪಾಡ್ ಅರೆಷ್ಟ್!
ಅನ್ನ ಭಾಗ್ಯ ಯೋಜನೆಗೆ ಅಕ್ಕಿ ನೀಡದ ಕೇಂದ್ರ ಸರ್ಕಾರ ಹಾಗೂ ರಾಜ್ಯಕ್ಕೆ ಅಕ್ಕಿ ಕೊಡಿಸುವಲ್ಲಿ ವಿಫಲರಾದ ಕರ್ನಾಟಕ ಬಿಜೆಪಿ ಸಂಸದರ ವಿರುದ್ಧ, ಬಿಜೆಪಿ ಕಚೇರಿ ಮುಂದೆ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಲಪಾಡ್ ಅವರ ನೇತೃತ್ವದಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.
ಸ್ಯಾಂಕಿ ಟ್ಯಾಂಕ್, ವರನಟ ಡಾ.ರಾಜ್‌ಕುಮಾರ್ ಪುತ್ಥಳಿಯಿಂದ ಬಿಜೆಪಿ ಕಾರ್ಯಾಲಯದವರಗೆ ನಡಿಗೆ ಮೂಲಕ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ನೂರಾರು ಕರ್ನಾಟಕ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
“ಹಸಿವು ಮುಕ್ತ ಕರ್ನಾಟಕಕ್ಕೆ ನಮ್ಮ ಸರ್ಕಾರದ ‘ಅನ್ನ ಭಾಗ್ಯ’ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ. 25 ಬಿಜೆಪಿ ಸಂಸದರು ರಾಜ್ಯಕ್ಕೆ ಅಕ್ಕಿ ಕೊಡಿಸುವ ಪ್ರಯತ್ನ ಮಾಡುತ್ತಿಲ್ಲ. ಬಿಜೆಪಿಗೆ ಮತ ನೀಡದಿದ್ದರೆ, ಕೇಂದ್ರದಿಂದ ರಾಜ್ಯಕ್ಕೆ ಬರುವ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಚುನಾವಣಾ ಪೂರ್ವದಲ್ಲಿ ಜಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದರು. ಈಗ ಅಕ್ಕಿ ಕೊಡುತ್ತಿಲ್ಲ. ರಾಜ್ಯಕ್ಕೆ ಕೇಂದ್ರ ಮಲತಾಯಿ ಧೋರಣೆ ಮಾಡುತ್ತಿದೆ” ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಪ್ರತಿಭಟನಾ ವೇಳೆ ಬಿಜೆಪಿ ಕೇಂದ್ರ ಕಛೇರಿಗೆ ನುಗ್ಗಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯುವಲ್ಲಿ ಪೊಲೀಸರು ಹರಸಾಹಸ ಪಡುವಂತಾಯಿತು. ಬ್ಯಾರಿಕೇಡ್ ಮೇಲೆ ಏರಿ ಪ್ರತಿಭಟಿಸಿದ ಮೊಹಮ್ಮದ್ ನಲಪಾಡ್ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ.