ಪ್ರಜಾಪ್ರಭುತ್ವಕ್ಕೆ ಬೆದರಿಕೆಯೊಡ್ಡುವ ಹಾಗೂ ಸಮಾಜದ ಸ್ವಾಸ್ಥ್ಯ ಕದಡುವ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ಅನುಮೋದನೆ!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆ ನಡೆಸಿ, ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್, ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಉಪಸ್ಥಿತರಿದ್ದರು.
ಪ್ರಜಾಪ್ರಭುತ್ವಕ್ಕೆ ಬೆದರಿಕೆಯೊಡ್ಡುವ ಹಾಗೂ ಸಮಾಜದ ಸ್ವಾಸ್ಥ್ಯ ಕದಡುವ ಸುಳ್ಳು ಸುದ್ದಿಗಳ ನಿಯಂತ್ರಣ ಮಾಡಬೇಕಿದ್ದು, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸಲಾಗುವುದು. ಸುಳ್ಳು ಸುದ್ದಿಗಳು ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಲಾಯಿತು.