ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮ: ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ಧಾರ ಸಾಧ್ಯವಿಲ್ಲ!
“ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಬರೀ ಅಂಬಾನಿ – ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ಧಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ. ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ, ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡೀ ದೇಶ ಪರಿತಪಿಸುವಂತಾಗಿದೆ. ಈ ಕಾರಣಕ್ಕೆ ನಾವು ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ.
ದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ? ಅಂಬಾನಿ – ಅದಾನಿಯವರ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ? ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು? ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ? ಎಂದು ಪ್ರಶ್ನಿಸಿದರೆ ಹೇಗೆ?” ಎಂದು ಪ್ರಶ್ನಿಸಿದರು.
ಮಾಜಿ ಸಚಿವರಾದ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್ ಸೇರಿ ಹಲವರು ಉಪಸ್ಥಿತರಿದ್ದರು.