ಬಿಬಿಎಂಪಿ ಅಗ್ನಿ ದುರಂತ: ಗಾಯಗೊಂಡ ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ನಿಧನ; ಮುಖ್ಯಮಂತ್ರಿ ಸಂತಾಪ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಿ.ಎಂ.ಶಿವಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಬಿಬಿಎಂಪಿಯ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 45 ವರ್ಷದ ಶಿವಕುಮಾರ್ ಅವರು ಸೇರಿದಂತೆ 9 ನೌಕರರು ಗಾಯಗೊಂಡಿದ್ದರು.ಶೇ. 25 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಶಿವಕುಮಾರ್ ಅವರನ್ನು ಕಳೆದ ಕೆಲ ದಿನಗಳ ಹಿಂದೆ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಶಿವಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅಪೊಲೋ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಮೃತರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ.ಶಿವಕುಮಾರ್ ಅವರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.
ಬಿಬಿಎಂಪಿ ಮುಖ್ಯ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಅವರು ಮೈಸೂರು ಜಿಲ್ಲೆಯ ನಂಜನಗೂಡು ಮೂಲದವರಾಗಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.