ಮದ್ಯ ನೀತಿ ಹಗರಣ ಪ್ರಕರಣ: ಕೇಜ್ರಿವಾಲ್ ಬಂಧನವಾದರೆ ದೆಹಲಿ ಸರಕಾರ ಜೈಲಿನಿಂದಲೇ ಕಾರ್ಯನಿರ್ವಹಿಸಲಿದೆ!
ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ. ಈ ಹಿನ್ನಲೆಯಲ್ಲಿ, ‘ಕೇಜ್ರಿವಾಲ್ ಅವರನ್ನು ಬಂಧಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಅವರನ್ನು ಬಂಧಿಸಿದರೆ ದೆಹಲಿ ಸರಕಾರ ಜೈಲಿನಿಂದಲೇ ಕಾರ್ಯನಿರ್ವಹಿಸಲಿದೆ’ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಆಡಳಿತ ನಡೆಸುತ್ತಿದೆ. ಕಳೆದ 2021-2022ರ ಹಣಕಾಸು ವರ್ಷದಲ್ಲಿ, ಮದ್ಯ ಮಾರಾಟದ ನೀತಿಯನ್ನು ತಿದ್ದುಪಡಿ ಮಾಡಲಾಯಿತು. ಇದು ಖಾಸಗಿ ಕಂಪನಿಗಳು ಹಾಗೂ ಸಗಟು ವ್ಯಾಪಾರಿಗಳಿಗೆ ಅನುಕೂಲವಾಗಿದ್ದು, ಈ ಮೂಲಕ ಹಲವು ಕೋಟಿ ರೂ.ಗಳ ವಂಚನೆ ನಡೆದಿದೆ ಎಂಬ ದೂರುಗಳು ಕೇಳಿಬಂದವು.
ಇದಕ್ಕೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿದರು. ಇದರಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತು. ಈ ಪ್ರಕರಣದಲ್ಲಿ, ಅಬಕಾರಿ ಇಲಾಖೆ ಉಸ್ತುವಾರಿ ವಹಿಸಿಕೊಂಡಿದ್ದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಯಿತು. ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ.
ಇತ್ತೀಚೆಗಷ್ಟೇ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ‘ಈ ವಿಷಯದಲ್ಲಿ ವಂಚನೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಹೀಗಾಗಿ ಜಾಮೀನು ನೀಡಲು ಸಾಧ್ಯವಿಲ್ಲ’ ಎಂದು ಆದೇಶ ಹೊರಡಿಸಿತು. ಈ ಹಿನ್ನಲೆಯಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಆಮ್ ಆದ್ಮಿ ಪಕ್ಷದ ಮುಖ್ಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶ್ನಾಲಯ ಸಮನ್ಸ್ ಜಾರಿಮಾಡಿದೆ.
ಇದರ ಪ್ರಕಾರ ಅರವಿಂದ್ ಕೇಜ್ರಿವಾಲ್ ಇಂದು ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಹಾಜರಾಗಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಅಧಿಕಾರಿಗಳು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಮೊದಲ ಬಾರಿಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ.
ಈ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ತನಿಖೆಯ ನಂತರ ಅವರನ್ನು ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಸರ್ಕಾರವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇದರ ಬಗ್ಗೆ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯ ಸಚಿವ ಸೌರಭ್ ಭಾರದ್ವಾಜ್ ನಿನ್ನೆ ಹೇಳಿಕೆ ನೀಡಿದ್ದಾರೆ:
‘ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದರೆ, ಸರ್ಕಾರವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ಪಕ್ಷದ ಹಿರಿಯ ನಾಯಕರು ಒಟ್ಟಾಗಿ ನಿರ್ಧರಿಸುತ್ತಾರೆ. ಪಕ್ಷದ ಎಲ್ಲಾ ನಾಯಕರು ಜೈಲಿನಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಹಾಗೆ ಎಲ್ಲರನ್ನೂ ಜೈಲಿಗೆ ಹಾಕಿದರೆ ಜೈಲಿನಿಂದಲೇ ಆಡಳಿತ ನಡೆಸುತ್ತೇವೆ.
ಈ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳನ್ನು ನಿಲ್ಲಿಸಬೇಕೆಂದು ಬಿಜೆಪಿ ಬಯಸುತ್ತಿದೆ. ಆದರೆ, ಅದು ಸಾಧ್ಯವಿಲ್ಲ; ಜೈಲಿನಲ್ಲಿದ್ದರೂ ಜನರ ಸೇವೆ ಮಾಡುತ್ತೇವೆ’ ಎಂದು ಅವರು ಹೇಳಿದರು. ಪಕ್ಷದ ಸಂಸದ ರಾಘವ್ ಚಂದಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ತನಿಖೆಯ ನಂತರ ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ.