ದೆಹಲಿಯಲ್ಲಿ ‘ಇಂಡಿಯಾ’ ಮೈತ್ರಿಕೂಟದ 4ನೇ ಸಮಾಲೋಚನಾ ಸಭೆ!
‘ಇಂಡಿಯಾ’ ಮೈತ್ರಿಕೂಟದ ಮೊದಲ ಮೂರು ಸಮಾಲೋಚನಾ ಸಭೆಗಳು ಕ್ರಮವಾಗಿ ಪಾಟ್ನಾ, ಬೆಂಗಳೂರು ಮತ್ತು ಮುಂಬೈನಲ್ಲಿ ನಡೆದವು.
ನವದೆಹಲಿ,
2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಜಂಟಿಯಾಗಿ ‘ಇಂಡಿಯಾ’ ಮೈತ್ರಿಕೂಟ ರಚಿಸಿದ್ದವು. ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಯುನೈಟೆಡ್ ಜನತಾ ದಳ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳನ್ನು ಒಳಗೊಂಡಿರುವ ‘ಇಂಡಿಯಾ’ ಮೈತ್ರಿಕೂಟದ ಮೊದಲ ಮೂರು ಸಮಾಲೋಚನಾ ಸಭೆಗಳು ಕ್ರಮವಾಗಿ ಪಾಟ್ನಾ, ಬೆಂಗಳೂರು ಮತ್ತು ಮುಂಬೈನಲ್ಲಿ ನಡೆದವು.
ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಮಿಜೋರಾಂ ಎಂಬ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ‘ಇಂಡಿಯಾ’ ಮೈತ್ರಿಕೂಟದ ನಾಲ್ಕನೇ ಸಭೆ ನಡೆಯಲಿದೆ ಎಂದು ಘೋಷಿಸಲಾಯಿತು. ಆದರೆ ಮೈತ್ರಿ ಪಕ್ಷಗಳ ಪ್ರಮುಖ ನಾಯಕರಾದ ಮಮತಾ ಬ್ಯಾನರ್ಜಿ, ಎಂ.ಕೆ.ಸ್ಟಾಲಿನ್, ನಿತೀಶ್ ಕುಮಾರ್ ಮತ್ತು ಅಖಿಲೇಶ್ ಯಾದವ್ ಸಭೆಗೆ ಹಾಜರಾಗಲು ಸಾಧ್ಯವಾಗದ ಕಾರಣ ಸಭೆಯನ್ನು ರದ್ದುಗೊಳಿಸಲಾಯಿತು.
ಇದರ ಬೆನ್ನಲ್ಲೇ ಡಿಸೆಂಬರ್ 19 ರಂದು ಮಧ್ಯಾಹ್ನ 3 ಗಂಟೆಗೆ ‘ಇಂಡಿಯಾ’ ಮೈತ್ರಿಕೂಟದ 4ನೇ ಸಭೆ ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದರು.
ಈ ಹಿನ್ನಲೆಯಲ್ಲಿ, ‘ಇಂಡಿಯಾ’ ಮೈತ್ರಿಕೂಟದ 4ನೇ ಸಭೆ ದೆಹಲಿಯಲ್ಲಿ ಆರಂಭವಾಗಿದೆ. ಈ ಸಭೆಯಲ್ಲಿ ಸೋನಿಯಾ ಗಾಂಧಿ, ಎಂ.ಕೆ.ಸ್ಟಾಲಿನ್, ರಾಹುಲ್ ಗಾಂಧಿ, ಟಿ.ಆರ್.ಬಾಲು. ಸೀತಾರಾಮ್ ಯೆಚೂರಿ, ಶರದ್ ಪವಾರ್, ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್. ಮೆಹಬೂಬ ಮುಫ್ತಿ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಉದ್ಧವ್ ಠಾಕ್ರೆ ಮುಂತಾದ ನಾಯಕರು ಭಾಗವಹಿಸಿದ್ದಾರೆ.
‘ಇಂಡಿಯಾ’ ಮೈತ್ರಿಕೂಟದ ನಾಯಕರ ಸಭೆಯಲ್ಲಿ ಸಂಸತ್ತಿನ ಚುನಾವಣಾ ಕಾರ್ಯತಂತ್ರ ಮತ್ತು ಕ್ಷೇತ್ರಗಳ ಹಂಚಿಕೆ ಕುರಿತು ಚರ್ಚೆ ನಡೆಯಲಿದೆ ಎಂದು ದೆಹಲಿಯ ಮೂಲಗಳು ತಿಳಿಸಿವೆ.