ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರು ಗೈರು: ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ!
ನವದೆಹಲಿ: (ಪಿಟಿಐ) ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ರಾಮ ಮಂದಿರ ಉದ್ಘಾಟನೆ “ಆರ್‌ಎಸ್‌ಎಸ್-ಬಿಜೆಪಿ ಕಾರ್ಯಕ್ರಮ” ಎಂದಿರುವ ಕಾಂಗ್ರೆಸ್, ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಅಯೋಧ್ಯೆ ಮಂದಿರವನ್ನು ರಾಜಕೀಯ ಯೋಜನೆಯಾಗಿ ಬಳಸಿಕೊಳ್ಳುತ್ತಿದೆ ಎಂದು ಬುಧವಾರ ಹೇಳಿದೆ.
ಲೋಕಸಭೆ ಚುನಾವಣಾ ಲಾಭಕ್ಕಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಅಯೋಧ್ಯೆಯ ಅಪೂರ್ಣ ದೇವಾಲಯವನ್ನು ಉದ್ಘಾಟನೆ ಮಾಡಲಾಗುತ್ತಿದೆ. ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.
ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿತ್ತು.
ಜನವರಿ 22 ರಂದು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.