‘ಇಂಡಿಯಾ’ ಮೈತ್ರಿಕೂಟದ ನಾಯಕರಾಗಿ ಮಲ್ಲಿಖಾರ್ಜುನ ಖರ್ಗೆ ಆಯ್ಕೆ?
ನವದೆಹಲಿ: ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಟ್ಟಾಗಿ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಿವೆ.
ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಸಂಯುಕ್ತ ಜನತಾ ದಳ, ಸಮಾಜವಾದಿ ಪಕ್ಷ ಮತ್ತು ಇತರ ಪ್ರಮುಖ ವಿರೋಧ ಪಕ್ಷಗಳಾದ ‘ಇಂಡಿಯಾ’ ಮೈತ್ರಿಕೂಟ ಇದುವರೆಗೆ ಮೂರು ಬಾರಿ ಸಭೆ ನಡೆಸಿದೆ. ಈ ಸಭೆಯಲ್ಲಿ ಮೈತ್ರಿಕೂಟದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.
ಆದಾಗ್ಯೂ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂಬುದು ಅಧಿಕೃತವಾಗಿ ಘೋಷಣೆಯಾಗಿಲ್ಲ. ಏತನ್ಮಧ್ಯೆ, ‘ಇಂಡಿಯಾ’ ಮೈತ್ರಿಕೂಟದ ಸಂಯೋಜಕರನ್ನಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಬೇಕು ಮತ್ತು ಜನವರಿ ಅಂತ್ಯದೊಳಗೆ ಸೀಟು ಹಂಚಿಕೆ ಬಗ್ಗೆ ಚರ್ಚಿಸಬೇಕು ಎಂದು ಒತ್ತಾಯಿಸಲಾಯಿತು.
ಈ ಹಿನ್ನಲೆಯಲ್ಲಿ, ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ‘ಇಂಡಿಯಾ’ ಮೈತ್ರಿಕೂಟದ ಪಕ್ಷದ ನಾಯಕರ ಸಮಾಲೋಚನೆ ಸಭೆ ನಡೆಯಿತು.
ಕಾಂಗ್ರೆಸ್ ಪರವಾಗಿ ಮಲ್ಲಿಕಾರ್ಜುನ ಖರ್ಗೆ, ಡಿ.ಎಂ.ಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಸೇರಿದಂತೆ 14 ಪಕ್ಷಗಳ ಮುಖಂಡರುಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಮಮತಾ ಬ್ಯಾನರ್ಜಿ ಈ ಸಭೆಯಲ್ಲಿ ಭಾಗವಹಿಸಲಿಲ್ಲ. ಕ್ಷೇತ್ರ ಹಂಚಿಕೆ ಕುರಿತು ಇಂದಿನ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.
ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ನಿತೀಶ್ ಕುಮಾರ್ ಅವರು ಅಧ್ಯಕ್ಷರ ಸ್ಥಾನಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಖರ್ಗೆ ಅವರ ಹೆಸರನ್ನು ಅಧ್ಯಕ್ಷರ ಸ್ಥಾನಕ್ಕೆ ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ.
ಮೈತ್ರಿಕೂಟದ ಸಂಯೋಜಕರಾಗಿ ನಿತೀಶ್ ಕುಮಾರ್ ಅವರನ್ನು ನೇಮಿಸಲು ನಿರ್ಧರಿಸಿದ್ದಾರೆ. ಎಲ್ಲಾ ಸಮ್ಮಿಶ್ರ ಪಕ್ಷಗಳು ಒಮ್ಮತದ ಬೆಂಬಲ ನೀಡಿದರೆ ಈ ಜವಾಬ್ದಾರಿಯನ್ನು ನಿತೀಶ್ ಕುಮಾರ್ ವಹಿಸಿಕೊಳ್ಳುವುದಾಗಿ ಹೇಳಿದ್ದಾರೆ.
ಮೈತ್ರಿಕೂಟದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸದ ಉದ್ಧವ್ ಠಾಕ್ರೆಯವರು ಅದರ ಸಂಬಂಧ ವಿವರಣೆ ನೀಡಿದ್ದಾರೆ: “ಈ ವಿಷಯದಲ್ಲಿ ಯಾವುದೇ ತಪ್ಪು ತಿಳುವಳಿಕೆ ಇರಬಾರದು. ನಾನು ನಿಗದಿತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಬೇಕಾಗಿದ್ದರಿಂದ, ಸಮಾಲೋಚನಾ ಸಭೆಗೆ ಹಾಜರಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಸಭೆಗೆ ಹಾಜರಾಗುವುದು ಕಷ್ಟವಾಗಿರುತ್ತದೆ. ಸಭೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಈಗಾಗಲೇ ತಿಳಿಸಿದ್ದೇನೆ” ಎಂದು ಹೇಳಿದರು.
‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಸದ್ಯಕ್ಕೆ ಅಗತ್ಯವಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ. “ಚುನಾವಣೆಯಲ್ಲಿ ಮತ ಕೇಳಲು ಯಾರನ್ನಾದರೂ ಪ್ರಧಾನಿ ಅಭ್ಯರ್ಥಿಯನ್ನಾಗಿ ಸೂಚಿಸುವ ಅಗತ್ಯವಿಲ್ಲ. ಚುನಾವಣೆ ನಂತರ ನಾಯಕನನ್ನು ಆಯ್ಕೆ ಮಾಡೋಣ. 1977ರ ಚುನಾವಣೆಯ ಸಮಯದಲ್ಲಿ, ವಿರೋಧ ಪಕ್ಷಗಳು ಮೊರಾರ್ಜಿ ದೇಸಾಯಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಸೂಚಿಸಲಿಲ್ಲ. ವಿರೋಧ ಪಕ್ಷಗಳು ಗೆದ್ದ ನಂತರ ಅವರು ಪ್ರಧಾನಿಯಾಗಿ ಆಯ್ಕೆಯಾದರು” ಎಂದು ಹೇಳಿದರು.