ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಿಜೆಪಿ ನಾಯಕರ ರಾಜಕೀಯ ಪ್ರೇರಿತ ಹೇಳಿಕೆ ಬೇಡ: ಸಿದ್ದರಾಮಯ್ಯ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ?
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.
ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ನಾಯಕರು ಈ ಬಗ್ಗೆ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ? ಎಂದು ಪ್ರಶ್ನಿಸಿದ್ದಾರೆ.
2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು? ಇದು ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಎನ್.ಐ.ಎ, RAW ಗಳ ವೈಫಲ್ಯವಲ್ಲವೇ? ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಹಾಗೂ ಹಿಂದೊಮ್ಮೆ ಬಿಜೆಪಿ ಕಚೇರಿ ಮುಂದೆಯೇ ಬಾಂಬ್ ಸ್ಫೋಟವಾಗಿತ್ತು. ಆಗ ಬಿಜೆಪಿಯೇ ಅಧಿಕಾರದಲ್ಲಿದ್ದರು. ಅವರಂತೆಯೇ ಇದನ್ನು ನಾವು ರಾಜಕೀಯ ದೃಷ್ಟಿಯಿಂದ ನೋಡಿದೆವಾ? ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.