ರಾಯ್‌ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಸ್ಪರ್ಧೆ: ಕಾಂಗ್ರೆಸ್ ಘೋಷಣೆ
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಉತ್ತರಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ.
ಈ ಕುರಿತು ಕಾಂಗ್ರೆಸ್ ಪಕ್ಷದ ಎಕ್ಸ್ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ, ”ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದ ಅಭ್ಯರ್ಥಿಯಾಗಿ ಮತ್ತು ಅಮೇಥಿ ಕ್ಷೇತ್ರಕ್ಕೆ ಕಿಶೋರಿ ಲಾಲ್ ಶರ್ಮಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ” ಎಂದು ಹೇಳಿದೆ.
ಉತ್ತರಪ್ರದೇಶದಲ್ಲಿ ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಕ್ಷೇತ್ರಗಳಾಗಿವೆ. ನೆಹರೂ-ಗಾಂಧಿ ಕುಟುಂಬ ಇಲ್ಲಿ ನಿರಂತರವಾಗಿ ಪೈಪೋಟಿ ನಡೆಸುತ್ತಿದೆ.
ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು 2004 ರಿಂದ 3 ಬಾರಿ ಅಮೇಥಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಎದುರು ಸೋತಿದ್ದರು. ಆದರೂ ಕೇರಳದ ವಯನಾಡಿನಲ್ಲಿ 2ನೇ ಸ್ಥಾನಕ್ಕೆ ಸ್ಪರ್ಧಿಸಿ ಗೆದ್ದಿದ್ದರು.
ಅದೇ ರೀತಿ, ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಮಾಜಿ ನಾಯಕಿ ಹಾಗೂ ರಾಹುಲ್ ಅವರ ತಾಯಿ ಸೋನಿಯಾ ಗಾಂಧಿ ಅವರು 2004 ರಿಂದ ಸತತ 5 ಬಾರಿ ಉತ್ತರಪ್ರದೇಶದ ರಾಯ್ ಬರೇಲಿಯನ್ನು ಗೆದ್ದಿದ್ದರು. ಈ ಬಾರಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ.
ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂದು ಈಗಾಗಲೇ ಹೇಳಲಾಗಿದ್ದರೂ, ಇದೀಗ ರಾಯ್‌ಬರೇಲಿ ಕ್ಷೇತ್ರದ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರನ್ನು ಘೋಷಿಸಲಾಗಿದೆ. ಮೇ 20 ರಂದು ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ಐದನೇ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಯ್‌ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.