ಭಾರತದಲ್ಲಿ ಜಾರಿಗೊಂಡ ಸಿಎಎ: ಪೌರತ್ವ ಪಡೆದ 14 ಮಂದಿ.!
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ, ಸಿಎಎ ಅಡಿಯಲ್ಲಿ ಮೊದಲ ಹಂತದಲ್ಲಿ 14 ಜನರಿಗೆ ಪೌರತ್ವ ನೀಡಲಾಗಿದೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಸಿಎಎ ಎಂದು ಕರೆಯಲ್ಪಡುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2019ರಲ್ಲಿ ಪರಿಚಯಿಸಲಾಯಿತು. ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಿ, ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಲಾಯಿತು. ಇದು ಕಳೆದ ಮಾರ್ಚ್ 11 ರಂದು ಜಾರಿಗೆ ಬಂದಿದೆ.
ಇದು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳದಿಂದ ಡಿಸೆಂಬರ್ 31, 2014 ಕ್ಕಿಂತ ಮೊದಲು ಭಾರತದಲ್ಲಿ ಆಶ್ರಯ ಪಡೆದಿರುವ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ಅಲ್ಪಸಂಖ್ಯಾತರಿಗೆ ಪೌರತ್ವ ಪಡೆಯಲು ದಾರಿ ಮಾಡಿಕೊಡುತ್ತದೆ.
ಈ ಹಿನ್ನೆಲೆಯಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆಯಡಿ ಮೊದಲ ಹಂತದಲ್ಲಿ 14 ಮಂದಿಗೆ ಪೌರತ್ವ ನೀಡಲಾಗಿದೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ. ನೆರೆಯ ದೇಶಗಳಿಂದ ಭಾರತಕ್ಕೆ ವಲಸೆ ಬಂದಿರುವ ಸಿಖ್ ಮತ್ತು ಹಿಂದೂಗಳು ಸೇರಿದಂತೆ 14 ಮಂದಿ ಪೌರತ್ವ ಪಡೆದಿದ್ದಾರೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು 14 ಜನರಿಗೆ ಭಾರತೀಯ ಪೌರತ್ವವನ್ನು ನೀಡಿದರು.