ರಾಜ್ಯಾದ್ಯಂತ ಏಕಕಾಲದಲ್ಲಿ 25 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ!
ಬೆಂಗಳೂರು: ರಾಜ್ಯದ ಸುಮಾರು 25 ಕಡೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ನಿವಾಸ ಮತ್ತು ಕಚೇರಿಯಲ್ಲಿ ಶೋಧ ನಡೆಸಿದ್ದಾರೆ. ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಅವರ ಮನೆ ಮೇಲೆ ದಾಳಿ ಮಾಡಲಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಅವರ ಮಂಗಳೂರಿನ ವೆಲೆನ್ಸಿಯಾದ ಮನೆ ಹಾಗೂ ಕಚೇರಿಯ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೃಷ್ಣವೇಣಿ 2 ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದರು. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ಡೈರಕ್ಟರ್ ತಿಪ್ಪೇಸ್ವಾಮಿ, ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಎಸ್ಪಿ ಮಹೇಶ್ ಮನೆ ಮೇಲೆ ದಾಳಿ ಮಾಡಲಾಗಿದೆ. ಈ ನಾಲ್ವರು ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್ ಕೊಟ್ಟಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.