ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
November 2023 » Page 7 of 7 » Dynamic Leader
October 23, 2024
Home 2023 November (Page 7)
ದೇಶ ರಾಜಕೀಯ

ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ. ಈ ಹಿನ್ನಲೆಯಲ್ಲಿ, ‘ಕೇಜ್ರಿವಾಲ್ ಅವರನ್ನು ಬಂಧಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಅವರನ್ನು ಬಂಧಿಸಿದರೆ ದೆಹಲಿ ಸರಕಾರ ಜೈಲಿನಿಂದಲೇ ಕಾರ್ಯನಿರ್ವಹಿಸಲಿದೆ’ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಆಡಳಿತ ನಡೆಸುತ್ತಿದೆ. ಕಳೆದ 2021-2022ರ ಹಣಕಾಸು ವರ್ಷದಲ್ಲಿ, ಮದ್ಯ ಮಾರಾಟದ ನೀತಿಯನ್ನು ತಿದ್ದುಪಡಿ ಮಾಡಲಾಯಿತು. ಇದು ಖಾಸಗಿ ಕಂಪನಿಗಳು ಹಾಗೂ ಸಗಟು ವ್ಯಾಪಾರಿಗಳಿಗೆ ಅನುಕೂಲವಾಗಿದ್ದು, ಈ ಮೂಲಕ ಹಲವು ಕೋಟಿ ರೂ.ಗಳ ವಂಚನೆ ನಡೆದಿದೆ ಎಂಬ ದೂರುಗಳು ಕೇಳಿಬಂದವು.

ಇದಕ್ಕೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿದರು. ಇದರಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತು. ಈ ಪ್ರಕರಣದಲ್ಲಿ, ಅಬಕಾರಿ ಇಲಾಖೆ ಉಸ್ತುವಾರಿ ವಹಿಸಿಕೊಂಡಿದ್ದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಯಿತು. ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ.

ಇತ್ತೀಚೆಗಷ್ಟೇ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ‘ಈ ವಿಷಯದಲ್ಲಿ ವಂಚನೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಹೀಗಾಗಿ ಜಾಮೀನು ನೀಡಲು ಸಾಧ್ಯವಿಲ್ಲ’ ಎಂದು ಆದೇಶ ಹೊರಡಿಸಿತು. ಈ ಹಿನ್ನಲೆಯಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಆಮ್ ಆದ್ಮಿ ಪಕ್ಷದ ಮುಖ್ಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶ್ನಾಲಯ ಸಮನ್ಸ್ ಜಾರಿಮಾಡಿದೆ.

ಇದರ ಪ್ರಕಾರ ಅರವಿಂದ್ ಕೇಜ್ರಿವಾಲ್ ಇಂದು ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಹಾಜರಾಗಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಅಧಿಕಾರಿಗಳು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಮೊದಲ ಬಾರಿಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ.

ಈ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ತನಿಖೆಯ ನಂತರ ಅವರನ್ನು ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಸರ್ಕಾರವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇದರ ಬಗ್ಗೆ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯ ಸಚಿವ ಸೌರಭ್ ಭಾರದ್ವಾಜ್ ನಿನ್ನೆ ಹೇಳಿಕೆ ನೀಡಿದ್ದಾರೆ:

‘ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದರೆ, ಸರ್ಕಾರವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ಪಕ್ಷದ ಹಿರಿಯ ನಾಯಕರು ಒಟ್ಟಾಗಿ ನಿರ್ಧರಿಸುತ್ತಾರೆ. ಪಕ್ಷದ ಎಲ್ಲಾ ನಾಯಕರು ಜೈಲಿನಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಹಾಗೆ ಎಲ್ಲರನ್ನೂ ಜೈಲಿಗೆ ಹಾಕಿದರೆ ಜೈಲಿನಿಂದಲೇ ಆಡಳಿತ ನಡೆಸುತ್ತೇವೆ.

ಈ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳನ್ನು ನಿಲ್ಲಿಸಬೇಕೆಂದು ಬಿಜೆಪಿ ಬಯಸುತ್ತಿದೆ. ಆದರೆ, ಅದು ಸಾಧ್ಯವಿಲ್ಲ; ಜೈಲಿನಲ್ಲಿದ್ದರೂ ಜನರ ಸೇವೆ ಮಾಡುತ್ತೇವೆ’ ಎಂದು ಅವರು ಹೇಳಿದರು. ಪಕ್ಷದ ಸಂಸದ ರಾಘವ್ ಚಂದಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ತನಿಖೆಯ ನಂತರ ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ.

ದೇಶ

ಉತ್ತರ ಪ್ರದೇಶ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ನಡೆಯುತ್ತಿದೆ. ಇಲ್ಲಿ ನಡೆಯುತ್ತಿರುವ ಆಘಾತಕಾರಿ ಘಟನೆಗಳು ಅವರ ಆಡಳಿತದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲ ಎಂಬುದನ್ನು ತೋರಿಸುತ್ತದೆ.

ಪ್ರತಿದಿನ ರಾಜ್ಯದ ಎಲ್ಲಾದರೊಂದು ಮೂಲೆಯಲ್ಲಿ ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ ಎಂದು ಅಂಕಿಅಂಶಗಳು ತೋರಿಸುತ್ತವೆ. ಸೆಪ್ಟೆಂಬರ್ 27 ರಂದು 5 ಜನರ ಗುಂಪು ಯುವತಿಯನ್ನು ಅಪಹರಿಸಿ ಮನೆಯೊಂದರಲ್ಲಿ ಇಟ್ಟುಕೊಂಡು 20 ದಿನಗಳಿಗೂ ಹೆಚ್ಚು ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ನಂತರ ಆ ಯುವತಿ ಸ್ಥಳೀಯ ಮಹಿಳೆಯರ ಸಹಾಯದಿಂದ ತಪ್ಪಿಸಿಕೊಂಡು ಮನೆಗೆ ಬಂದು ನಡೆದ ಘಟನೆಯನ್ನು ವಿವರಿಸಿದ್ದಾಳೆ. ಇದರಿಂದ ಗಾಬರಿಗೊಂಡ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು 7 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆದರೆ ಆರೋಪಿಗಳು ತಲೆಮರೆಸಿಕೊಂಡಿರುವುದರಿಂದ ಅವರನ್ನು ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸುತ್ತಿದ್ದಾರೆ. ಈ ಕ್ರೂರ ಘಟನೆಯ ಕೆಲವು ದಿನಗಳ ನಂತರ, ನೆನ್ನೆ ಮರುದಿನ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಉದ್ಯೋಗಿಯೇ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

ಅದೇ ರೀತಿ ಮನೆಯಲ್ಲಿ ಒಬ್ಬಳೇ ಇದ್ದ ಮಹಿಳೆಯ ಮೇಲೆ ಡೆಲಿವರಿ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೀಗೆ ಮಹಿಳೆಯರ ಮೇಲೆ ದಿನನಿತ್ಯ ಲೈಂಗಿಕ ದೌರ್ಜನ್ಯಗಳು ನಡೆಯುತ್ತಲೇ ಇವೆ. ಇದನ್ನು ತಡೆಯಲು ಉತ್ತರಪ್ರದೇಶದ ಯೋಗಿ ಸರಕಾರಕ್ಕೆ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಾಮಾಜಿಕ ಕಾರ್ಯಕರ್ತರು ಟೀಕಿಸುತ್ತಿದ್ದಾರೆ.

ದೇಶ

ಮುಂಬೈ: ಜೆಟ್ ಏರ್ವೇಸ್ ಅಧ್ಯಕ್ಷ ನರೇಶ್ ಗೋಯಲ್, ರೂ.848 ಕೋಟಿ ಬ್ಯಾಂಕ್ ಸಾಲ ಪಡೆದಿದ್ದರು. ಅದರಲ್ಲಿ ರೂ.538 ಕೋಟಿ ಬಾಕಿ ಸಾಲವನ್ನು ಮರುಪಾವತಿ ಮಾಡದೆ ವಂಚಸಿದ್ದ ಪ್ರಕರಣವನ್ನು ಜಾರಿ ನಿರ್ದೇಶನಾಲಯ ದಾಖಲಿಸಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನರೇಶ್ ಗೋಯಲ್ ಕುಟುಂಬಕ್ಕೆ ಸೇರಿದ ಲಂಡನ್ ಮತ್ತು ದುಬೈನಲ್ಲಿರುವ 17 ಬಂಗಲೆಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಸ್ಥಗಿತಗೊಳಿಸಿದೆ.

ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದ ವರದಿಯ ಪ್ರಕಾರ, ಲಂಡನ್, ದುಬೈ ಮತ್ತು ಭಾರತದ ವಿವಿಧ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜೆಟ್ ಏರ್‌ವೇಸ್ ಮತ್ತು ಅದರ ಸಂಸ್ಥಾಪಕ ನರೇಶ್ ಗೋಯಲ್, ಅವರ ಪತ್ನಿ ಅನಿತಾ ಗೋಯಲ್ ಮತ್ತು ಪುತ್ರ ನಿವಾನ್ ಗೋಯಲ್ ಮುಂತಾದವರ ಜೆಟ್ ಏರ್ ಪ್ರೈವೇಟ್ ಲಿಮಿಟೆಡ್ ಮತ್ತು ಜೆಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ವಿವಿಧ ವ್ಯಕ್ತಿಗಳು ಮತ್ತು ಕಂಪನಿಗಳ ಹೆಸರಿನಲ್ಲಿದ್ದ 17 ಫ್ಲಾಟ್‌ಗಳು ಹಾಗೂ ಬಂಗಲೆಗಳು ಮತ್ತು ಸಂಕೀರ್ಣಗಳನ್ನು ಮುಚ್ಚಲಾಗಿದೆ.

ವಿಮಾನಯಾನ ಸಂಸ್ಥೆಗೆ ನೀಡಲಾಗಿದ್ದ ಸಾಲವನ್ನು ವಂಚನೆ ಮಾಡಿದ ಆರೋಪದಲ್ಲಿ ಸೆಪ್ಟೆಂಬರ್‌ನಲ್ಲಿ ಬಂಧನಕ್ಕೊಳಗಾಗಿದ್ದ ನರೇಶ್ ಗೋಯಲ್ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಆರೋಪಪಟ್ಟಿ ಸಲ್ಲಿಸಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ನವೆಂಬರ್ 2022ರಲ್ಲಿ ಕೆನರಾ ಬ್ಯಾಂಕ್ ಸಲ್ಲಿಸಿದ ದೂರಿನ ಮೇರೆಗೆ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ, ವಿಮಾನಯಾನ ಸಂಸ್ಥೆಯ ಕಾರ್ಯಾಚಟುವಟಿಕೆಗೆ ನೀಡಿದ ಸಾಲದ ಮೊತ್ತವನ್ನು ವೈಯಕ್ತಿಕ ವೆಚ್ಚಗಳಿಗೆ ಬಳಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯವು ಪ್ರಕರಣವನ್ನು ದಾಖಲಿಸಿದೆ. 2011-2019ರ ಅವಧಿಯಲ್ಲಿ ಬಾಹ್ಯ ಲೆಕ್ಕ ಪರಿಶೋಧನಾ ಸಂಸ್ಥೆಯು ನಡೆಸಿದ ಫೋರೆನ್ಸಿಕ್ ಆಡಿಟ್ ಅನ್ನು ಆಧರಿಸಿ ಬ್ಯಾಂಕ್ ದೂರು ದಾಖಲಾಗಿದೆ.

ಕೆನರಾ ಬ್ಯಾಂಕ್ ಸಾಲವನ್ನು 2019ರಲ್ಲಿ ಅನುತ್ಪಾದಕ ಆಸ್ತಿ (NPA) ಎಂದು ಘೋಷಿಸಲಾಗಿದ್ದು, 538 ಕೋಟಿ ಸಾಲದ ಮೊತ್ತದ ವಾಪಸಾತಿ ಮತ್ತು ವಂಚನೆ ಮಾಡಿದ ಆದಾಯವು ಅಪರಾಧದ ಆದಾಯವಲ್ಲದೆ ಬೇರೇನೂ ಅಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳುತ್ತದೆ. ಬ್ಯಾಂಕ್‌ಗಳ ಒಕ್ಕೂಟವು ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ಗೆ ಅದರ ಕಾರ್ಯಾಚರಣೆಯ ಕೆಲಸಕ್ಕಾಗಿಯೇ ಸಾಲಗಳನ್ನು ನೀಡಿತು ಎಂಬುದು ಗಮನಾರ್ಹ.

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ರಾಜ್ಯೋತ್ಸವದ ಶುಭ ಕೋರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

“ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು” ಎಂದರು.

“ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು. ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ” ಎಂದು ಹೇಳಿದರು.

“ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ; ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ. ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ. ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು” ಎಂದು ಹೇಳಿದರು.  

ರಾಜ್ಯ

ಬೆಂಗಳೂರು: ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಹೇಳಿದ್ದಾರೆ.

“ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ” ಎಂದು ಹೇಳಿದ್ದಾರೆ.

“1973ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸಿದ್ದಾರೆ.

ದೇಶ

ಕೋಲ್ಕತ್ತಾ: ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಮೋದಿ ಮತ್ತು ಅದಾನಿ ವಿರುದ್ಧ ಪ್ರಬಲವಾಗಿ ವಾದ ಮಂಡಿಸುತ್ತಿರುವವರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಪ್ರಮುಖರು. ಇವರು, ಸಂಸತ್ತಿನಲ್ಲಿ ಅದಾನಿಯ ಕುರಿತು ಪ್ರಶ್ನಿಸಲು ಉದ್ಯಮಿ ಹಿರಾನಂದಾನಿಯಿಂದ ಹಣ ಮತ್ತು ಉಡುಗೊರೆಗಳನ್ನು ಲಂಚವಾಗಿ ಪಡೆದರು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ.

ಅಲ್ಲದೆ, ಹಿರಾನಂದಾನಿ ಮತ್ತು ಅವರ ರಿಯಲ್ ಎಸ್ಟೇಟ್ ಕಂಪನಿ ತಮ್ಮ ಸ್ವಂತ ಲಾಭಕ್ಕಾಗಿ ಬಳಸಿಕೊಳ್ಳಲು ಲೋಕಸಭೆಯ ವೆಬ್‌ಸೈಟ್ ಮತ್ತು ತಮ್ಮ ಲಾಗಿನ್ ಐಡಿಯನ್ನು ಮಹುವಾ ಮೊಯಿತ್ರಾ ನೀಡಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದಾರೆ. ಈ ಬಗ್ಗೆ ನಿಶಿಕಾಂತ್ ದುಬೆ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಪತ್ರ ಬರೆದ ನಂತರ, ಈ ವಿಚಾರದಲ್ಲಿ ಕ್ರಮ ಕೈಗೊಂಡಿರುವ ಸಂಸದೀಯ ನೈತಿಕ ಸಮಿತಿ, ನವೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಮಹುವಾ ಮೊಯಿತ್ರಾ ಅವರಿಗೆ ಆದೇಶ ಮಾಡಿತು.

ಈ ಹಿನ್ನಲೆಯಲ್ಲಿ, ನನ್ನನ್ನು ಸಂಸತ್ತಿನಿಂದ ಹೊರಹಾಕಲು ಬಯಸುವವರು ನನ್ನ ತಲೆ ಕೂದಲನ್ನೂ ಮುಟ್ಟಲಾಗದು ಎಂದು ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಹೇಳಿದ್ದಾರೆ. ಸಂಸತ್ತಿನಲ್ಲಿ ಅದಾನಿಯ ಕುರಿತು ಪ್ರಶ್ನಿಸಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಲಂಚವಾಗಿ ಉಡುಗೊರೆ ಪಡೆದಿರುವ ಆರೋಪಕ್ಕೆ ಮೇಲಿನಂತೆ ಮಹುವಾ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ.