ಮೇಕೆದಾಟು ಅಣೆಕಟ್ಟು ಸಮಸ್ಯೆ, ಲೋಕಸಭಾ ಚುನಾವಣೆಗೆ ಡಿಎಂಕೆಯಿಂದ ಹೆಚ್ಚುವರಿ ಸ್ಥಾನಗಳನ್ನು ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ, ತಮಿಳುನಾಡು ಕಾಂಗ್ರೆಸ್ ಉಸ್ತುವಾರಿಯಾಗಿರುವ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ರಹಸ್ಯ ಸಭೆ ನಡೆಸಿರುವುದು ಬಹಿರಂಗವಾಗಿದೆ.
ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಹಾಗೂ ಕರ್ನಾಟಕ ರಾಜ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮೊನ್ನೆ ಮತ್ತು ನಿನ್ನೆ ಅಳಗಿರಿ ಅವರು ಸಚಿವರ ನಿವಾಸದಲ್ಲಿ ಗೌಪ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಮೇಕೆದಾಟು ಅಣೆಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಪಕ್ಷವನ್ನು ಮೈತ್ರಿಯಿಂದ ಹೊರತೆಗೆಯಿರಿ ಎಂದು, ಬಿಜೆಪಿ ವರಿಷ್ಟರು ಡಿಎಂಕೆ ಮೇಲೆ ಒತ್ತಡ ಹೇರುತ್ತಿದ್ದಾರೆ. ಡಿಎಂಕೆ-ಕಾಂಗ್ರೆಸ್ ಮೈತ್ರಿ ಮುಂದುವರಿಯಬೇಕಾದರೆ ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರ ತಮಿಳುನಾಡಿನ ವಿರುದ್ಧ ನಿಲುವು ತಳೆಯಬಾರದು.
ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಜೂನ್ ಮತ್ತು ಜುಲೈನಲ್ಲಿ ತಮಿಳುನಾಡಿಗೆ ಹರಿಸಬೇಕಾದ ಕಾವೇರಿ ನೀರನ್ನು ಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಬೇಕು. ತಮಿಳುನಾಡಿನ ಜನತೆಯ ಹಿತಕ್ಕೆ ವಿರುದ್ಧವಾಗಿ, ಕರ್ನಾಟಕ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ, ತಮಿಳುನಾಡು ಕಾಂಗ್ರೆಸ್ ತಲೆಬಾಗುವುದಿಲ್ಲ. ಅಗತ್ಯಬಿದ್ದರೆ ವಿರುದ್ಧ ನಿಲುವು ತೆಗೆದುಕೊಳ್ಳಬೇಕಾಗುತ್ತದೆ.
ಆಗ ಮಾತ್ರ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ಡಿಎಂಕೆ ವಿರುದ್ಧ ಕಣಕ್ಕಿಳಿದರೆ ಕ್ಷೇತ್ರಗಳನ್ನು ಕಡಿಮೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ಹೆಜ್ಜೆಯನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ಜಾಣ್ಮೆಯಿಂದ ನಿಭಾಯಿಸಬೇಕೆಂದು ಅಳಗಿರಿ ದಿನೇಶ್ ಗುಂಡೂರಾವ್ ಅವರನ್ನು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.