ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ತುರ್ತು ಪರಿಹಾರ Archives » Dynamic Leader
November 22, 2024
Home Posts tagged ತುರ್ತು ಪರಿಹಾರ
ರಾಜ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್‌.ಡಿ.ಆರ್‌.ಎಫ್. ನಿಂದ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.

ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಬರದಿಂದ ಸಂಕಷ್ಟದಲ್ಲಿರು ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಕೋರಲಾಗಿದೆ.