ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಬಸವರಾಜ ಬೊಮ್ಮಾಯಿ Archives » Dynamic Leader
November 23, 2024
Home Posts tagged ಬಸವರಾಜ ಬೊಮ್ಮಾಯಿ
ರಾಜಕೀಯ

ಬೆಂಗಳೂರು: ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ. ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು; ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ.

ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ?

2024ರ ಲೋಕಸಭೆ ಗೆಲುವಿಗೆ ಕಾವೇರಿ ಹಿತವನ್ನು ನೆರೆರಾಜ್ಯಕ್ಕೆ ಅಡವಿಟ್ಟಿದೆ ಹಸ್ತಪಕ್ಷ ಸರಕಾರ! ತಮಿಳುನಾಡಿಗೆ ಬೆದರಿ ಶರಣಾಗಿದೆ!! ಕಾವೇರಿ ಜಲನಿರ್ವಹಣಾ ಪ್ರಾಧಿಕಾರದ ಸಭೆಯಿಂದಲೇ ಹೊರನಡೆದ, ರಾಜ್ಯದ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ ರಾಜ್ಯದೆದುರು ದೈನೇಸಿಯಾಗಿ ಮಂಡಿಯೂರಿದ್ದು ಕನ್ನಡಿಗರ ಸ್ವಾಭಿಮಾನಕ್ಕೆ ಕೊಟ್ಟ ಕೊಡಲಿಪೆಟ್ಟು.

1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡ ಅವರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸೆಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ.

ಸಂಕಷ್ಟ ಸ್ಥಿತಿಯ ಬಗ್ಗೆ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಡಲಿಲ್ಲ ಯಾಕೆ? ಕಾನೂನು ತಜ್ಞರ ಜತೆ ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ.

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಯವರು ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ?

ಇದನ್ನೂ ಓದಿ: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹ!

ತಾಕತ್ತಿದ್ದರೆ ಕೋರ್ಟಿಗೆ ಹೋಗಿ ಎಂದು ರೈತರಿಗೆ ಉಪ ಮುಖ್ಯಮಂತ್ರಿಗಳು ಹೇಳಿರುವುದು ದರ್ಪ, ದುರಹಂಕಾರದ ಪರಾಕಾಷ್ಠೆ. ನಿತ್ಯವೂ ಸಾವಿರಾರು ಕ್ಯೂಸೆಕ್ ಕಾವೇರಿ ನೀರು ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ. ಇನ್ನೂ 10 ಟಿಎಂಸಿ ಬಿಡುತ್ತೇವೆ ಎಂದು ಅವರು ಹೇಳಿರುವುದು ಸರಿಯಲ್ಲ?

ಕನ್ನಡಿಗರು ಕೊಟ್ಟ ಪೆನ್ ಈಗ ಗನ್ ರೂಪ ತಳೆದಿದೆಯಾ ಹೇಗೆ? ಕನ್ನಡಿಗರನ್ನು ಕೇಳಿಕೇಳಿ ಪಡೆದುಕೊಂಡ ಪೆನ್ ಈಗ ಪೆಚ್ಚಗೆ, ತೆಪ್ಪಗೆ ಮಲಗಿದೆಯಾ? ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವೇ ರಾಜ್ಯದ ಜಲ ಸಂಕಷ್ಟದ ಬಗ್ಗೆ ಸಭೆಯಲ್ಲೇ ಅಂಕಿ-ಅಂಶ ಸಮೇತ ಹೇಳಿದೆ. ಪಾಪ ಜಲ ಸಂಪನ್ಮೂಲ ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ? ಎಂದು ಕಿಡಿಕಾರಿದ್ದಾರೆ.

ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ,ನಂಬಿಕೆ ದ್ರೋಹದ ಪ್ರತೀಕ.ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ.ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ.ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು.

ರಾಜಕೀಯ

ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

“ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ.

ಇದನ್ನೂ ಓದಿ: ಹುಟ್ಟಿನಿಂದ ಮನುಷ್ಯರು ಎಲ್ಲರೂ ಸಮಾನರು; ಜನರ ನಡುವೆ ತಾರತಮ್ಯ ಮಾಡುವುದು ಅವಮಾನಕರ! – ನಟ ಕಮಲಹಾಸನ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿರುವುದು, ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ.

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು” ಎಂದು ಹೇಳಿದ್ದಾರೆ.