ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮೀರ್ ಸಾಧಿಕ್ Archives » Dynamic Leader
October 31, 2024
Home Posts tagged ಮೀರ್ ಸಾಧಿಕ್
ರಾಜಕೀಯ

ಬೆಂಗಳೂರು: ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್‌ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮೀಷನ್ ಎತ್ತಲು ಹೊರಟಿದ್ದೀರಿ. ಇಲ್ಲ ಎಂದಾದರೆ ವಿದ್ಯುತ್‌ ಕ್ಷಾಮದ ವಾಸ್ತವತೆ ಬಗ್ಗೆ ‘ಶ್ವೇತಪತ್ರ’ ಹೊರಡಿಸಿ. ಈ ಬಗ್ಗೆ ನಿಮ್ಮ ಮೌನ ಏಕೆ? ಎಂದು ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

“ವೆಸ್ಟ್ ಎಂಡ್ ನಲ್ಲಿ ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ? 5 ವರ್ಷ ಸರಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಭಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ. ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಎರಡೇ; 1. ವೆಸ್ಟ್‌ ಎಂಡ್‌, 2. ಬಿಜೆಪಿ ಬಿ ಟೀಂ” ಎಂದು ಕಿಡಿಕಾರಿದ್ದಾರೆ.

“ಡೋಂಗೀ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ. I.N.D.I.A. ಕೂಟದ ಸಭೆಯನ್ನು ಇದೇ ವೆಸ್ಟ್ ಎಂಡ್ ಬದಲಿಗೆ, ತಮ್ಮ ಸುತ್ತ ಕೆನೆಪದರ, ಒಳಪದರ, ತೆಳುಪದರದಂತೆ ತಲೆ ಎತ್ತಿರುವ ʼಪರ್ಸಂಟೇಜ್ ಪಟಾಲಂʼ ಏಳುಸುತ್ತಿನ ಕೋಟೆಯ ವಠಾರದಲ್ಲಿಯೇ ನಡೆಸಬೇಕಿತ್ತು. ಏಕೆ ನಡೆಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

“ಆಧುನಿಕ ಭಾರತದ ಈಸ್ಟ್‌ ಇಂಡಿಯಾ ಕಂಪನಿ ಕಾಂಗ್ರೆಸ್‌ಗೆ ಕರ್ನಾಟಕ ಪೊಗದಸ್ತು ಹುಲ್ಲುಗಾವಲು. ಸಿದ್ದಪುರುಷ @ಶೋಕಿಪುರುಷನೇ ಈ ಹುಲ್ಲುಗಾವಲಿನ ಮೇಟಿ. ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ! ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್‌ ಮ್ಯಾಚ್‌ ನೋಡುತ್ತಿದ್ದ!!!” ಎಂದು ಕಟುವಾಗಿ ಟೀಕಿಸಿದ್ದಾರೆ.

“5 ತಿಂಗಳಿಂದ ವಿದ್ಯುತ್ ಉತ್ಪಾದನೆ ಅಲಕ್ಷಿಸಿದ್ದೇಕೆ? ಹಾಹಾಕಾರ ಎದ್ದ ಮೇಲೆ ಅದು ಮಾಡಿದ್ದೇವೆ, ಇದು ಮಾಡಿದ್ದೇವೆ ಎಂದರೆ ಲೋಡ್ ಶೆಡ್ಡಿಂಗ್ ಏಕೆ ಬಂತು? 2013-2018ರಲ್ಲಿ 12,000 ಮೆ.ವ್ಯಾ. ಉತ್ಪಾದಿಸಿದ್ದೇವೆ ಎಂದು ನೀವೇ ಹೇಳಿದ್ದೀರಿ, ಸರಿ. ಈಗ ಮಳೆ ಕಡಿಮೆಯಾಗಿ ಜಲವಿದ್ಯುತ್‌ ಉತ್ಪಾದನೆ ಕುಸಿದಿದೆ, ನನಗೂ ಗೊತ್ತಿದೆ.

ಇದನ್ನೂ ಓದಿ: ಜೆಡಿ(ಎಸ್)ನ ಕೇರಳ ಘಟಕವು ಎಲ್‌ಡಿಎಫ್‌ನ ಅವಿಭಾಜ್ಯ ಅಂಗವಾಗಿ ಮುಂದುವರಿಯಲಿದೆ: ಹೆಚ್.ಡಿ.ಕುಮಾರಸ್ವಾಮಿ

ಅದರಲ್ಲಿ 3,000 ಮೆ.ವ್ಯಾ. ಇಲ್ಲ ಎಂದರೂ ಸಾರ್ವಜನಿಕ & ಖಾಸಗಿ ವಲಯ ಸೇರಿ ಒಟ್ಟು 29,000 ಮೆ.ವ್ಯಾ. ವಿದ್ಯುತ್‌ ಉತ್ಪಾದನೆ ಆಗಲೇಬೇಕಿತ್ತು. ಆಗಿಲ್ಲವೇಕೆ? ಏಕಾಎಕಿ ಉತ್ಪಾದನೆ ನಿಲ್ಲಿಸಿದ್ದೇಕೆ? ಜಲವಿದ್ಯುತ್‌ ಕೈಕೊಡುತ್ತದೆ ಎಂದು ಗೊತ್ತಿದ್ದರೂ ಕಲ್ಲಿದ್ದಲ ಸಂಗ್ರಹ ಇಟ್ಟುಕೊಳ್ಳಲಿಲ್ಲವಲ್ಲ, ಏಕೆ?

ಜಲ ವಿದ್ಯುತ್‌ ಹೊರತುಪಡಿಸಿ ಇತರೆ ಮೂಲಗಳ ವಿದ್ಯುತ್‌ ಉತ್ಪಾದನೆಗೂ ಖೋತಾ ಬೀಳಲಿಕ್ಕೆ ಪ್ರಕೃತಿ ಕಾರಣವೋ? ಅಥವಾ ನಿಮ್ಮ ʼಕೈ ಚಳಕʼವೇ ಕಾರಣವೋ? ಸತ್ಯ ಹೇಳಿದರೆ ನನ್ನ ಕಡೆಗೇ ಬೊಟ್ಟು ಮಾಡುತ್ತೀರಿ, ನಿಮ್ಮ ಸಚಿವರನ್ನು ….. ….. ಗಳಂತೆ ನನ್ನ ಮೇಲೆ ಛೂ ಬಿಡುತ್ತೀರಿ. ಎಷ್ಟು ದಿನ ನೆಪಗಳ ನಾಜೂಕತನ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮತ್ತೆ ಮತ್ತೆ ನಾನು ಹೇಳುತ್ತೇನೆ, ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್‌ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮೀಷನ್ ಎತ್ತಲು ಹೊರಟಿದ್ದೀರಿ. ಇಲ್ಲ ಎಂದಾದರೆ ವಿದ್ಯುತ್‌ ಕ್ಷಾಮದ ವಾಸ್ತವತೆ ಬಗ್ಗೆ ‘ಶ್ವೇತಪತ್ರ’ ಹೊರಡಿಸಿ. ಈ ಬಗ್ಗೆ ನಿಮ್ಮ ಮೌನ ಏಕೆ?” ಎಂದು ಆರೋಪಿಸಿದ್ದಾರೆ.

“ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ ನಂತರ ಇಂ’ಧನ’ ಇಲಾಖೆಯಲ್ಲೂ ನೀವು ನಗದೀಕರಣಕ್ಕೆ ನಾಂದಿ ಹಾಡಿದ್ದೀರಿ. ಖರೀದಿ ಖುಷಿಯಲ್ಲಿ ಪರ್ಸಂಟೇಜ್ ಪಟಾಲಂ ಸಂಭ್ರಮಿಸುತ್ತಿದೆ” ಎಂದು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.