ಮುಂಬೈ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ “ಇಂಡಿಯಾ” ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದೆ. ದೇಶದ 18ನೇ ಸಂಸದೀಯ ಲೋಕಸಭೆ ಚುನಾವಣೆಯ ದಿನಾಂಕಗಳು ಪ್ರಕಟಗೊಂಡಿದ್ದು, ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆಯುತ್ತದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳಾದ “ಇಂಡಿಯಾ” ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಈ ಹಿನ್ನಲೆಯಲ್ಲಿ, ಮಹಾರಾಷ್ಟ್ರದಲ್ಲಿ “ಇಂಡಿಯಾ” ಮೈತ್ರಿ ಪಕ್ಷಗಳ ನಡೆವೆ ಸೀಟು ಹಂಚಿಕೆ ಅಂತಿಮಗೊಂಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲ್ ಜಂಟಿಯಾಗಿ ಸೀಟು ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು 17 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಪ್ರಕಟಣೆ ಹೊರಡಿಸಿದೆ.
“ಇಂಡಿಯಾ” ಮೈತ್ರಿಕೂಟದ ಒಪ್ಪಂದದ ನಂತರ ಶರದ್ ಪವಾರ್ ಅವರ ಎನ್‌ಸಿಪಿ ಮಹಾರಾಷ್ಟ್ರದ 10 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ರಾಜ್ಯದ 21 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಏತನ್ಮಧ್ಯೆ, ದೆಹಲಿ, ಉತ್ತರ ಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ “ಇಂಡಿಯಾ” ಮೈತ್ರಿಕೂಟದ ನಡುವೆ ಸೀಟು ಹಂಚಿಕೆ ಈಗಾಗಲೇ ಪೂರ್ಣಗೊಂಡಿದೆ ಎಂಬುದು ಗಮನಾರ್ಹ.