ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಜಿಜೆಪಿ Archives » Dynamic Leader
October 16, 2024
Home Posts tagged ಜಿಜೆಪಿ
ರಾಜಕೀಯ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಸಂಸತ್ತಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಹೇಳಿದರು.

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು, ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ, ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ನಮ್ಮ ನಾಡಿಗೆ ಪ್ರವಾಹ ಬಂದಾಗ ನರೇಂದ್ರ ಮೋದಿ ಬರಲಿಲ್ಲ; ಬರಗಾಲ ಬಂದಾಗಲೂ ಮೋದಿ ಬರಲಿಲ್ಲ. ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ; ಚುನಾವಣೆ ಬಂತು ನೋಡಿ – ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ ಎಂದು ವ್ಯಂಗ್ಯವಾಡಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ.

ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ. ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್ ನವರು, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದು ಪುನರುಚ್ಚಿಸಿದರು.

ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಬೇಕು. ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ ಎಂದು ಸವಾಲೆಸದರು.

ಪಶು ಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್,‌ ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಮತ್ತು ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರುಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರು ಹಾಗೂ ಬ್ಲಾಕ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಅನ್ನ ಭಾಗ್ಯ ಯೋಜನೆಗೆ ಅಕ್ಕಿ ನೀಡದ ಕೇಂದ್ರ ಸರ್ಕಾರ ಹಾಗೂ ರಾಜ್ಯಕ್ಕೆ ಅಕ್ಕಿ ಕೊಡಿಸುವಲ್ಲಿ ವಿಫಲರಾದ ಕರ್ನಾಟಕ ಬಿಜೆಪಿ ಸಂಸದರ ವಿರುದ್ಧ, ಬಿಜೆಪಿ ಕಚೇರಿ ಮುಂದೆ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಲಪಾಡ್ ಅವರ ನೇತೃತ್ವದಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.

ಸ್ಯಾಂಕಿ ಟ್ಯಾಂಕ್, ವರನಟ ಡಾ.ರಾಜ್‌ಕುಮಾರ್ ಪುತ್ಥಳಿಯಿಂದ ಬಿಜೆಪಿ ಕಾರ್ಯಾಲಯದವರಗೆ ನಡಿಗೆ ಮೂಲಕ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ನೂರಾರು ಕರ್ನಾಟಕ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

“ಹಸಿವು ಮುಕ್ತ ಕರ್ನಾಟಕಕ್ಕೆ ನಮ್ಮ ಸರ್ಕಾರದ ‘ಅನ್ನ ಭಾಗ್ಯ’ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ. 25 ಬಿಜೆಪಿ ಸಂಸದರು ರಾಜ್ಯಕ್ಕೆ ಅಕ್ಕಿ ಕೊಡಿಸುವ ಪ್ರಯತ್ನ ಮಾಡುತ್ತಿಲ್ಲ. ಬಿಜೆಪಿಗೆ ಮತ ನೀಡದಿದ್ದರೆ, ಕೇಂದ್ರದಿಂದ ರಾಜ್ಯಕ್ಕೆ ಬರುವ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಚುನಾವಣಾ ಪೂರ್ವದಲ್ಲಿ ಜಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದರು. ಈಗ ಅಕ್ಕಿ ಕೊಡುತ್ತಿಲ್ಲ. ರಾಜ್ಯಕ್ಕೆ ಕೇಂದ್ರ ಮಲತಾಯಿ ಧೋರಣೆ ಮಾಡುತ್ತಿದೆ” ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಪ್ರತಿಭಟನಾ ವೇಳೆ ಬಿಜೆಪಿ ಕೇಂದ್ರ ಕಛೇರಿಗೆ ನುಗ್ಗಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯುವಲ್ಲಿ ಪೊಲೀಸರು ಹರಸಾಹಸ ಪಡುವಂತಾಯಿತು. ಬ್ಯಾರಿಕೇಡ್ ಮೇಲೆ ಏರಿ ಪ್ರತಿಭಟಿಸಿದ ಮೊಹಮ್ಮದ್ ನಲಪಾಡ್ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ.