ಇನ್ನು ಮುಂದೆ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿ ಪ್ರದಾನ ಸಮಾರಂಭದಲ್ಲಿ ಕಪ್ಪು ಬಟ್ಟೆ ಧರಿಸಬಾರದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ನವದೆಹಲಿ: ಕಲೆ, ವಿಜ್ಞಾನ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪದವಿ ಪ್ರದಾನ ಸಮಾರಂಭಕ್ಕೆ ವಿದ್ಯಾರ್ಥಿಗಳು ಕಪ್ಪು ಗೌನ್ ಮತ್ತು ಕಪ್ಪು ಟೋಪಿ ಧರಿಸುವುದು ವಾಡಿಕೆ.
ಈ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ತನ್ನ ನಿಯಂತ್ರಣದಲ್ಲಿರುವ ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಇನ್ನು ಮುಂದೆ ಪದವಿ ಸಮಾರಂಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಕಪ್ಪು ಬಟ್ಟೆ ಧರಿಸುವ ಅಗತ್ಯವಿಲ್ಲ ಎಂದು ಆದೇಶ ಹೊರಡಿಸಿದೆ.
ಪದವಿ ಪ್ರದಾನ ಸಮಾರಂಭದಲ್ಲಿ ಕಪ್ಪು ಬಟ್ಟೆ ಧರಿಸುವುದು ಐರೋಪ್ಯ ರಾಷ್ಟ್ರಗಳಲ್ಲಿ ಆರಂಭವಾದ ಸಂಸ್ಕೃತಿಯಾಗಿದ್ದು, ಬ್ರಿಟಿಷರು ತಮ್ಮ ವಸಾಹತುಶಾಹಿ ರಾಷ್ಟ್ರಗಳಲ್ಲಿ ಈ ಪದ್ಧತಿಯನ್ನು ಜಾರಿಗೆ ತಂದಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಆದ್ದರಿಂದ, ಈ ವಸಾಹತು ಪದ್ಧತಿಯನ್ನು ಬದಲಾಯಿಸಬೇಕು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇನ್ನು ಮುಂದೆ ಪದವಿ ಪ್ರದಾನ ಸಮಾರಂಭದಲ್ಲಿ ಕಪ್ಪುಬಣ್ಣದ ಬದಲು ಸಾಂಪ್ರದಾಯಿಕ ಭಾರತೀಯ ಬಟ್ಟೆಗಳನ್ನು ಧರಿಸಬಹುದೆಂದು ಹಾಗೂ ವೈದ್ಯಕೀಯ ಸಂಸ್ಥೆಗಳು ನೆಲೆಗೊಂಡಿರುವ ರಾಜ್ಯದ ಸಂಪ್ರದಾಯದ ಪ್ರಕಾರ, ಪದವಿ ಸಮಾರಂಭದ ಉಡುಪನ್ನು ನಿರ್ಧರಿಸಿಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.