ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ರಾಮೇಶ್ವರಂ ಕೆಫೆ Archives » Dynamic Leader
November 21, 2024
Home Posts tagged ರಾಮೇಶ್ವರಂ ಕೆಫೆ
ರಾಜಕೀಯ

ಚೆನ್ನೈ: ಬೆಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಹಿಳಾ ಖಾತೆ ರಾಜ್ಯ ಸಚಿವೆ ಶೋಬಾ ಕರಂದ್ಲಾಜೆ ಅವರಿಗೆ ಮಧ್ಯಂತರ ಪರಿಹಾರ ನೀಡಲು ಚೆನ್ನೈ ಹೈಕೋರ್ಟ್ ನಿರಾಕರಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಘಟನೆಯನ್ನು ಪ್ರಸ್ತಾಪಿಸಿ, ತಮಿಳುನಾಡಿನಲ್ಲಿ ತರಬೇತಿ ಪಡೆದವರು ಇಲ್ಲಿ ಬಾಂಬ್ ಇಡುತ್ತಿದ್ದಾರೆ ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ತೀವ್ರವಾಗಿ ಟೀಕಿಸಲಾಯಿತು. ಇದಾದ ಬಳಿಕ ಶೋಭಾ ಕರಂದ್ಲಾಜೆ ಸಾಮಾಜಿಕ ಜಾಲತಾಣದಲ್ಲಿ ವಿಷಾದ ವ್ಯಕ್ತಪಡಿಸಿದರು. ಈ ಸಂಬಂಧ ಡಿಎಂಕೆ ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇಲೆ 4 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಶೋಬಾ ಕರಂದ್ಲಾಜೆ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿಯಲ್ಲಿ ರಾಜಕೀಯ ಉದ್ದೇಶದಿಂದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನಾನು ತಮಿಳರ ಮಾನಹಾನಿ ಮಾಡಿಲ್ಲ. ನನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕು. ಅಲ್ಲಿಯವರೆಗೆ ಪ್ರಕರಣದ ತನಿಖೆಯನ್ನು ನಿಷೇಧಿಸಿ ಆದೇಶಿಸಬೇಕು ಎಂದು ಹೇಳಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಬಾಂಬ್ ಇಟ್ಟಿರುವ ವ್ಯಕ್ತಿ ತಮಿಳುನಾಡಿನಲ್ಲಿ ತರಬೇತಿ ಪಡೆದಿರುವುದು ಮೊದಲೇ ಗೊತ್ತಿದ್ದರೆ ಜವಾಬ್ದಾರಿಯುತ ನಾಗರಿಕನಾಗಿ ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು ಎಂದು ಹೇಳಿ ಪ್ರಕರಣದ ವಿಚಾರಣೆಯನ್ನು ನಾಳೆ ಮರುದಿನಕ್ಕೆ (ಜು.12) ಮುಂದೂಡಿದೆ.

ರಾಜಕೀಯ

ನವದೆಹಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಚುನಾವಣಾಧಿಕಾರಿಗೆ ಭಾರತ ಚುನಾವಣಾ ಆಯೋಗ ಸೂಚಿಸಿದೆ.

ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ತಮಿಳರನ್ನು ಉಲ್ಲೇಖಿಸಿ, ತಮಿಳರು ಮತ್ತು ಕನ್ನಡಿಗರ ನಡುವೆ ಗಲಭೆ ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ವಿರುದ್ಧ ಡಿಎಂಕೆ ಪರವಾಗಿ ಭಾರತ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಚುನಾವಣಾಧಿಕಾರಿಗೆ ಭಾರತ ಚುನಾವಣಾ ಆಯೋಗ ಆದೇಶಿಸಿದೆ.

ದೇಶ

ಬೆಂಗಳೂರು : ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಿದೆ. ಸದ್ಯ ರಾಜ್ಯ ಪೊಲೀಸ್‌ ಇಲಾಖೆಯ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ. ಈಗ ಎನ್‌ಐಎ ಪ್ರಕರಣದ ವಿಚಾರಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದೆ. ಪ್ರಕರಣದಲ್ಲಿ ಇನ್ನು ಯಾವುದೇ ಆರೋಪಿಯನ್ನು ಬಂಧಿಸಿಲ್ಲ.

ಮಾರ್ಚ್‌ 1 ರಂದು ವೈಟ್‌ಫೀಲ್ಡ್‌ನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್‌ನಲ್ಲಿ ಮಧ್ಯಾಹ್ನ ಬಾಂಬ್‌ ಸ್ಫೋಟವಾಗಿತ್ತು. ಘಟನೆಯಲ್ಲಿ 9 ಜನ ಗಾಯಗೊಂಡಿದ್ದರು. ಮೊದಲು ಸಿಲಿಂಡರ್‌ ಸ್ಫೋಟ ಎನ್ನಲಾಗಿತ್ತು. ಆದರೆ, ಬಳಿಕ ಅದು ಸುಧಾರಿತ ಐಇಡಿ ಬಳಸಿ ಮಾಡಿರುವ ಸ್ಫೋಟ ಎಂದು ದೃಢವಾಯಿತು. ಗ್ರಾಹಕನ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಬಾಂಬ್‌ ಇರುವ ಬ್ಯಾಗ್‌ ಅನ್ನು ಹೋಟೆಲ್‌ನಲ್ಲಿಯೆ ಬಿಟ್ಟು ಹೋಗಿದ್ದ. ಅದು ಬಳಿಕ ಸ್ಫೋಟಗೊಂಡಿತ್ತು.

ಸ್ಫೋಟದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು, ಬಿಜೆಪಿ ನಾಯಕರು ಎನ್‌ಐಎ ತನಿಖೆಗೆ ಆಗ್ರಹಿಸಿದ್ದರು. ಅದರಂತೆ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ತನಿಖೆಯನ್ನು ಈಗ ಎನ್‌ಐಎಗೆ ವಹಿಸಿದೆ. ಈಗಾಗಲೇ ಎನ್‌ಐಎ ಅಧಿಕಾರಿಗಳು ಪ್ರಕರಣದ ವಿಚಾರವಾಗಿ ಸಿಸಿಬಿ ಪೊಲೀಸರಿಗೆ ಸಹಾಯ ಮಾಡುತ್ತಿದ್ದರು. ಈಗ ಪೂರ್ತಿ ಪ್ರಕರಣವನ್ನು ಅವರೇ ತನಿಖೆ ನಡೆಸಲಿದ್ದಾರೆ.

ರಾಜ್ಯ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ?

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.

ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ನಾಯಕರು ಈ ಬಗ್ಗೆ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ? ಎಂದು ಪ್ರಶ್ನಿಸಿದ್ದಾರೆ.

2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು? ಇದು ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಎನ್.ಐ.ಎ, RAW ಗಳ ವೈಫಲ್ಯವಲ್ಲವೇ? ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಹಾಗೂ ಹಿಂದೊಮ್ಮೆ ಬಿಜೆಪಿ ಕಚೇರಿ ಮುಂದೆಯೇ ಬಾಂಬ್ ಸ್ಫೋಟವಾಗಿತ್ತು. ಆಗ ಬಿಜೆಪಿಯೇ ಅಧಿಕಾರದಲ್ಲಿದ್ದರು. ಅವರಂತೆಯೇ ಇದನ್ನು ನಾವು ರಾಜಕೀಯ ದೃಷ್ಟಿಯಿಂದ ನೋಡಿದೆವಾ? ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶ

ಹೈದರಾಬಾದ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಅಖಿಲ ಭಾರತ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಹೈದರಾಬಾದ್‌ನ ರಾಮೇಶ್ವರಂ ಕೆಫೆಗೆ ಭೇಟಿ ನೀಡಿದರು. ಶುಕ್ರವಾರ ಬೆಂಗಳೂರಿನ ರಾಮೇಶ್ವರಂ ಕೆಫೆ ಶಾಖೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ಸಾಂತ್ವನ ಹೇಳುವ ಪ್ರಯತ್ನವಾಗಿ ಅವರು ಅಲ್ಲಿಗೆ ಭೇಟಿ ನೀಡಿದ್ದರು.

ಸ್ಫೋಟವನ್ನು ಖಂಡಿಸಿರುವ ಅಸಾದುದ್ದೀನ್ ಓವೈಸಿ, ‘ಈ ಸ್ಫೋಟವು ಹೇಡಿತನ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿ ಎಂದು ಹೇಳಿದ್ದಾರೆ. ಕೆಫೆಗೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮಸ್ಥಳ ರಾಮೇಶ್ವರಂ ಹೆಸರನ್ನು ಇಡಲಾಗಿದೆ ಎಂದು ಅವರು ಸ್ಮರಿಸಿದರು.

“ಹೈದರಾಬಾದ್‌ನ ರಾಮೇಶ್ವರಂ ಕೆಫೆಗೆ ಒಗ್ಗಟ್ಟನ್ನು ಪ್ರದರ್ಶಿಸಿದ್ದೇವೆ. ಆಹಾರವು ರುಚಿಯಾಗಿತ್ತು ಮತ್ತು ಕೆಫೆಗೆ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮಸ್ಥಳದ ಹೆಸರನ್ನು ಇಡಲಾಗಿದೆ ಎಂಬುದನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯವಾಗಿದೆ. ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿಯಾಗಿದೆ” ಎಂದು ಹೇಳಿದ್ದಾರೆ. ಮತ್ತು ಅವರು ಕೆಫೆಗೆ ಭೇಟಿ ನೀಡಿದ ಕೆಲವು ಫೋಟೋಗಳನ್ನು ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಹಂಚಿಕೊಂಡಿದ್ದಾರೆ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಬೆಂಗಳೂರಿನ ಜನಪ್ರಿಯ ‘ರಾಮೇಶ್ವರಂ ಕೆಫೆ’ಯಲ್ಲಿ ನೆನ್ನೆ ನಡೆದ ಬಾಂಬ್ ಸ್ಫೋಟದ ಶಂಕಿತ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು  ಇಂದು ಬಿಡುಗಡೆಗೊಳಿಸಿದ್ದಾರೆ.

ಬೆಂಗಳೂರಿನ ‘ವೈಟ್ ಫೀಲ್ಡ್’ ಪ್ರದೇಶದಲ್ಲಿರುವ ‘ರಾಮೇಶ್ವರಂ ಕೆಫೆ’ಯಲ್ಲಿ ನಿನ್ನೆ ಮಧ್ಯಾಹ್ನ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ 3 ಮಹಿಳೆಯರು ಸೇರಿದಂತೆ 10 ಮಂದಿ ಗಾಯಗೊಂಡಿದ್ದರು. ಮಾಹಿತಿ ತಿಳಿದ ಡಿಜಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಅಲ್ಲದೆ ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನೂ ಪರಿಶೀಲಿಸಲಾಯಿತು. ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು 4 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ, ಪೊಲೀಸರು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಇಂದು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಸ್ಫೋಟಕ್ಕೆ ಕಾರಣವಾದ ಶಂಕಿತ ವ್ಯಕ್ತಿಯ ಫೋಟೋವನ್ನು ಸೇರಿಸಲಾಗಿದೆ.  ಮುಖಕ್ಕೆ ಮಾಸ್ಕ್ ಹಾಕಿಕೊಂಡು, ಕನ್ನಡಕ, ಟೋಪಿ ಹಾಕಿಕೊಂಡು ತಿರುಗಾಡುತ್ತಿರುವ ಮತ್ತು ಸ್ಫೋಟಕ್ಕೂ ಮುನ್ನ ಹೊಟೇಲ್‌ಗೆ ತೆರಳುವ ವೇಳೆ ಬ್ಯಾಗ್‌ ಇಟ್ಟು ಅಲ್ಲಿಂದ ತೆರಳುವ ದೃಶ್ಯಗಳು ಅದರಲ್ಲಿ ದಾಖಲಾಗಿರುತ್ತವೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಏತನ್ಮಧ್ಯೆ, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ದೃಢೀಕರಿಸದ ವರದಿಗಳು ರಾರಾಜಿಸುತ್ತಿವೆ. ಆದರೆ, ಪೊಲೀಸರು ಇದನ್ನು ಖಚಿತಪಡಿಸಿಲ್ಲ.