ನವದೆಹಲಿ: ಪ್ರಿಯಾಂಕಾ ಗಾಂಧಿಯಿಂದ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಬಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ವಯನಾಡು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ 4,10,931 ಮತಗಳ ಅಂತರದಿಂದ ಗೆಲುವು ಸಾಧಿಸಿದ ಪ್ರಿಯಾಂಕಾ ಅವರು ಇಂದು (ನವೆಂಬರ್ 28) ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, “ಪ್ರಿಯಾಂಕಾ ಗಾಂಧಿ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ತುಂಬಿದ್ದಾರೆ; ನಮಗೂ ಹೊಸ ಶಕ್ತಿ ಬಂದಿದೆ.
ಪ್ರಿಯಾಂಕಾ ಜನರ ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎತ್ತಲಿದ್ದಾರೆ. ಅದರಲ್ಲೂ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಧ್ವನಿ ನೀಡಲಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮತ್ತು ಸಾರ್ವಜನಿಕರಿಗೆ, ವಿಶೇಷವಾಗಿ ಮಹಿಳೆಯರಿಗೆ ಪ್ರಯೋಜನವನ್ನು ನೀಡುತ್ತದೆ” ಎಂದು ಹೇಳಿದರು.
ಮಗಳು ಪ್ರಿಯಾಂಕಾ ಮೊದಲ ಬಾರಿಗೆ ಸಂಸದೆಯಾಗಿ ಅಧಿಕಾರ ಸ್ವೀಕರಿಸಿದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, “ನಮ್ಮೆಲ್ಲರಿಗೂ ತುಂಬಾ ಸಂತೋಷ ಮತ್ತು ಹೆಮ್ಮೆ ಇದೆ” ಎಂದು ಹೇಳಿದರು.