ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಿದ್ದರಾಮಯ್ಯ Archives » Page 2 of 13 » Dynamic Leader
October 21, 2024
Home Posts tagged ಸಿದ್ದರಾಮಯ್ಯ (Page 2)
ರಾಜಕೀಯ

ಮೈಸೂರು: ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ ಮತ್ತು ಅಧಿಕಾರ ದುರ್ಬಳಕೆ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

“ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ. ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ದೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ” ಎಂದು ಹೇಳಿದರು.

“ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ.

ಜೆಡಿಎಸ್ ನ ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ‘ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು’ ಎಂದು ದೇವೇಗೌಡರು ಹೇಳಿದ್ದರು. ‘ನರೇಂದ್ರ ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ’ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ” ಎಂದು ಕಿಡಿಕಾರಿದರು.

“ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ.

ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ.

ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಲುಗಾಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

“ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ.

ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ವಿಶೇಷ ತನಿಖಾ ದಳ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ಎಸ್‌ಐಟಿ ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ ಎಸ್‌ಐಟಿ ಯವರು ತನಿಖೆ ನಡೆಸಿದ್ದಾರೆ. ಆದರೂ, ಇಡಿಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು.

ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ” ಎಂದರು.

“ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು? ಸುಪ್ರೀಂಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ?

ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ”? ಎಂದು ಆಕ್ರೋಶ ವ್ಯಕ್ತಪಡಿಸಿದರು.

“15 ಬಜೆಟ್ ಮಂಡಿಸಿದ್ದೇನೆ. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ, ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ” ಎಂದು ಸವಾಲೆಸದರು.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮದ್ರೋಹ ಅಲ್ಲವೇ?” ಎಂದು ಕಿಡಿಕಾರಿದರು.  

“ಮುಡಾ ವಿಚಾರದಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನಿದೆ?

ನಮ್ಮ ಜಮೀನು ಅಕ್ರಮವಾಗಿ ವಶಕ್ಕೆ ಪಡೆದು ಸೈಟು, ಪಾರ್ಕ್, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮುಡಾ. ತಪ್ಪು ಒಪ್ಪಿಕೊಂಡು ನಂತರ ನನ್ನ ಕುಟುಂಬಕ್ಕೆ ಬದಲಿ ನಿವೇಶನ ನೀಡಿದ್ದಾರೆ. ನನ್ನ ಪತ್ನಿ ಬದಲಿ ಜಮೀನು ಕೊಡಿ ಎಂದು ಅರ್ಜಿ ಹಾಕಿದ್ದರೇ ವಿನಃ ಯಾವುದೇ ನಿರ್ಧಿಷ್ಟ ಜಾಗದಲ್ಲಿ ನಿವೇಶನ ಕೊಡಿ ಎಂದು ಕೇಳಿರಲಿಲ್ಲ.

ನಿವೇಶನ ಕೊಟ್ಟವರು ಜಿಜೆಪಿ ಸರ್ಕಾರದವರು. ಈಗ ಹಗರಣ ನಡೆದಿದೆ ಎನ್ನುತ್ತಿರುವವರು ಅವರೇ. ಇದರಲ್ಲೇ ಅವರ ಉದ್ದೇಶ ಏನಿದೆ ಎಂಬುದನ್ನು ರಾಜ್ಯದ ಜನ ಅರ್ಥಮಾಡಿಕೊಳ್ಳಬೇಕು” ಎಂದು ಮನವಿ ಮಾಡಿದರು.

ಬೆಂಗಳೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

“ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ರವರೆಗೆ ಏರ್ಪಡಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ” ಎಂದು ಹೇಳಿದರು.

“ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ. ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ” ಎಂದು ಹೇಳಿದರು.

“ಯಾವುದೇ ಜಾತಿ, ಧರ್ಮ, ಭಾಷೆ, ಪ್ರದೇಶಗಳಿಗೆ ಸೇರಿದ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರು ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ” ಎಂದು ಹೇಳಿದರು.

ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ.

 

ರಾಜಕೀಯ

ಮೈಸೂರು: ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಹೇಳಿದರು.

“ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ” ಎಂದು ಹೇಳಿದರು.

“ಮುಡಾ ಅಕ್ರಮವಾಗಿ ನಮ್ಮ ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ 2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ” ಎಂದು ಹೇಳಿದರು.

“ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ” ಎಂದು ಕಿಡಿಕಾರಿದರು.

“ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ” ಎಂದು ಹೇಳಿದರು.

“ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ” ಎಂದು ಗುಡುಗಿದರು.

ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

ರಾಜಕೀಯ

ಮೈಸೂರು: “ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಬಿಜೆಪಿ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಅಪಾದಿಸಿದರು.

“ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಕಿಡಿಕಾರಿದರು.

“ನಿನ್ನೆ ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ನಾನು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ” ಎಂದು ಹೇಳಿದರು.

“ಕೆ.ಜೆ.ಅಬ್ರಹಾಂ ಅವರ ಇತಿಹಾಸ ನೋಡಿದರೆ ಅವರೊಬ್ಬ ಬ್ಲಾಕ್ ಮೇಲರ್ ಎಂದು ಗೊತ್ತಾಗುತ್ತದೆ. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ.

ಅಬ್ರಹಾಂ ಅವರು ಜುಲೈ 26 ರಂದು ಬೆಳಿಗ್ಗೆ 11.30ಕ್ಕೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರ ಬೆಂಬಲದಿಂದ ಆಯ್ಕೆಯಾದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರವಾಗಿ ನಿರ್ಧಾರ ಮಾಡಿದ್ದಾರೆ. ಅಂದೇ ನೋಟೀಸು ನೀಡಿದ್ದಾರೆ” ಎಂದು ಕಿಡಿಕಾರಿದರು.

“ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2.00 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ನನ್ನ ತಪ್ಪು ಏನೂ ಇಲ್ಲದೆ ಇದ್ದರೂ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

“ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿಮಂಡಲದವರು; ನಾವು ಸಲಹೆ ನೀಡಿಲ್ಲ. ಮುಖ್ಯ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ. ಮೂಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ; ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ. ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟೀಸು ನೀಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ನನ್ನ ತಪ್ಪು ಏನೂ ಇಲ್ಲದೆ ಇದ್ದರೂ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ” ಎಂದು ಹೇಳಿದರು.

“ರಾಜ್ಯಪಾಲರ ನೋಟೀಸಿನಿಂದ ಆರ್.ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು? ಕಾನೂನಿನ ರೀತ್ಯಾ ಅವರು ನೋಟೀಸು ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ” ಎಂದು ಪುನರುಚ್ಚಿಸಿದರು.

“ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ನಮ್ಮ ಅಭ್ಯಂತರವಿಲ್ಲ. ಕೇಂದ್ರ ಸಚಿವರು ಹಾಗೂ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದರು. ಮಳೆ ಹೆಚ್ಚಾಗಿದೆ, ಜಲಾಶಯಗಳು ತುಂಬಿ ಪ್ರವಾಹ ಬಂದಿದೆ ಅದರ ಕಡೆಗೆ ಗಮನ ನೀಡಬೇಕೆಂದು ಹೇಳಿದರು. ಈಗ ಅದು ಮರೆತುಹೋಯಿತೇ? ಹಾಗಾದರೆ ಅವರು ಈಗ ಸ್ವ ಇಚ್ಛೆಯಿಂದ ಮಾಡುತ್ತಿಲ್ಲ ಎಂದಾಯಿತು” ಎಂದು ಲೇವಡಿ ಮಾಡಿದರು.

“ಮಳೆಯಿಂದ ಮನೆ ಬಿದ್ದಿರುವುದು, ರಸ್ತೆ ಹಾಳಾಗಿರುವುದು, ಸೇತುವೆಗಳು, ವಿದ್ಯುತ್ ಕಂಬಗಳು ಬಿದ್ದಿರುವುದ್ದರ ಬಗ್ಗೆ ವರದಿ ತರಿಸಲಾಗುತ್ತಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಎಷ್ಟು ಕೊಡಬೇಕೋ ಅಷ್ಟು ಪರಿಹಾರ ನೀಡಿ ಮನೆಯನ್ನೂ ಕಟ್ಟಿಕೊಡಲಾಗುವುದು” ಎಂದು ಮಳೆ ಸಂತ್ರಸ್ತರಿಗೆ ಭರವಸೆ ನೀಡಿದರು.

ರಾಜ್ಯ

ಬೆಂಗಳೂರು: ರಾಜ್ಯದ ಒಳಗೆ ಮತ್ತು ನೆರೆಯ ರಾಜ್ಯಗಳಲ್ಲಿಯೂ ಅತಿಯಾದ ಮಳೆ ಸುರಿಯುತ್ತಿದ್ದು, ರಾಜ್ಯದ ಯಾವುದೇ ಮೂಲೆಯಲ್ಲಿ ಸಮಸ್ಯೆ ತಲೆದೋರಿದರೂ ಅದನ್ನು ಎದುರಿಸಲು ಸಕಲ ತಯಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನೂ ನೀಡಲಾಗಿದೆ. ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಸಿದ್ಧರಿರುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಬಗ್ಗೆ ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ ಎಂದಿದ್ದಾರೆ.

ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡುವಂತೆಯೂ ಸೂಚಿಸಿದ್ದಾರೆ.

ರಾಜ್ಯ ಶಿಕ್ಷಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು” ಎಂದು ಹೇಳಿದರು.

“ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ” ಎಂದು ಹೇಳಿದರು.

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಉದ್ಯೋಗ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಂಡಿರುವ ಮುಖ್ಯಮಂತ್ರಿ ಅವರನ್ನು ಅಭಿನಂದಿಸಿ, ಸಮಸ್ತ ಕನ್ನಡಿಗರ ಪರವಾಗಿ ಅವರನ್ನು ಇಂದು ವಿಧಾನಸೌಧ ಕಛೇರಿಯಲ್ಲಿ ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರವೇ ರಾಜ್ಯ ಉಪಾಧ್ಯಕ್ಷರಾದ ಅಶ್ವಿನಿ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಅಬ್ಬಿಗೆರೆ ವಿನೋದ್ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಿಧಾನಸೌಧದಲ್ಲಿ ಭೇಟಿಯಾಗಿ ಅಭಿನoದನೆ ಸಲ್ಲಿಸಿದರು.

ಆಗಸ್ಟ್‌ 1 ರಿಂದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ನಿರ್ಧರಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ ವರದಿ ಜಾರಿ ಕುರಿತು ಸಂಪುಟ ಒಪ್ಪಿಗೆ ಸೂಚಿಸಿತ್ತು.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನoದನೆ ಸಲ್ಲಿಸಿದರು. ಉಪಮುಖ್ಯಮಂತ್ರಿಗಳಾದ  ಡಿ.ಕೆ.ಶಿವಕುಮಾರ್ ಹಾಗೂ ಸಂಘದ ಪದಾಧಿಕಾರಿಗಳು ಈ ವೇಳೆ ಹಾಜರಿದ್ದರು.

ರಾಜ್ಯ

ಬೆಂಗಳೂರು: “ಸರಣಿ ಭ್ರಷ್ಟಾಚಾರದ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕರ್ಮಕಾಂಡ ಅಗೆದಷ್ಟು ಆಳವಾಗಿದೆ; ಬಗೆದಷ್ಟು ಹೊರಬರುತ್ತಿದೆ” ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

“ಸಹಕಾರ ಇಲಾಖೆಯ ಅಪೆಕ್ಸ್ ಬ್ಯಾಂಕ್ ಗಳಲ್ಲಿ ಬಹುಕೋಟಿ ರೂಪಾಯಿ ಮೊತ್ತದ ಬೃಹತ್ ಹಗರಣ ಬೆಳಕಿಗೆ ಬಂದಿದ್ದು, ಹಗರಣದ ತನಿಖೆ ನಡೆಸುವಂತೆ ಮಾನ್ಯ ಹೈಕೋರ್ಟ್ ತಾಕೀತು ಮಾಡಿದೆ” ಎಂದು ಹೇಳಿರುವ ಆರ್.ಅಶೋಕ್,

“ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ತಮ್ಮ ಸರ್ಕಾರದಲ್ಲಿ ಹಣಗರಣವಿಲ್ಲದ ಇಲಾಖೆ ಇಲ್ಲ ಎಂಬ ನಾಚಿಕೆಗೇಡು ಪರಿಸ್ಥಿತಿ ಇದೆ. ಇನ್ನಾದರೂ ರಾಜೀನಾಮೆ ಕೊಟ್ಟು ಕರ್ನಾಟಕದ ಮರ್ಯಾದೆ ಉಳಿಸಿ” ಎಂದು ಕಿಡಿಕಾರಿದ್ದಾರೆ.

ರಾಜ್ಯ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಸುಮನಹಳ್ಳಿ ಸರ್ಕಲ್ ಸಮೀಪದ ನಿರಾಶ್ರಿತರ ಪರಿಹಾರ ಕೇಂದ್ರದ ಬಳಿ ನೂತನವಾಗಿ ನಿರ್ಮಿಸಿದ ಡಾ.ಬಾಬು ಜಗಜೀವನ ರಾಮ್ ಭವನ ಹಾಗೂ ಸಂಶೋಧನಾ ಸಂಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ಈ ಉದ್ಘಾಟನಾ ಸಮಾರಂಭಕ್ಕೆ “ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ, ನಾವು ನೀವು ಎಲ್ಲರೂ ಜೊತೆಗೂಡಿ ಹಸಿರು ಕ್ರಾಂತಿಯ ಹರಿಕಾರ, ಕಾರ್ಮಿಕ ವರ್ಗದ ಹಿತಚಿಂತಕ, ರಾಷ್ಟ್ರದ ಹೆಮ್ಮೆಯ ಉಪಪ್ರಧಾನಿಯಾಗಿದ್ದ ಬಾಬು ಜಗಜೀವನ ರಾಮ್ ಅವರನ್ನು ಈ ಮೂಲಕ ಸ್ಮರಿಸಿ, ಗೌರವಿಸೋಣ” ಎಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಆಹ್ವಾನ ನೀಡಿದ್ದಾರೆ.

ಬೆಳಿಗ್ಗೆ 11 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭವನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉಪಸ್ಥಿತರಿರುತ್ತಾರೆ. ಲೋಕಸಭೆಯ ಮಾಜಿ ಸ್ಪೀಕರ್ ಶ್ರೀಮತಿ ಮೀರಾಕುಮಾರ್ ಅವರು ಗೌರವಾನ್ವಿತ ಆಹ್ವಾನಿತರಾಗಿ ಭಾಗವಹಿಸಲಿರುವ ಈ ಕಾರ್ಯಕ್ರಮಕ್ಕೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.