ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
CAA Archives » Dynamic Leader
November 21, 2024
Home Posts tagged CAA
ದೇಶ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ, ಸಿಎಎ ಅಡಿಯಲ್ಲಿ ಮೊದಲ ಹಂತದಲ್ಲಿ 14 ಜನರಿಗೆ ಪೌರತ್ವ ನೀಡಲಾಗಿದೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಸಿಎಎ ಎಂದು ಕರೆಯಲ್ಪಡುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2019ರಲ್ಲಿ ಪರಿಚಯಿಸಲಾಯಿತು. ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಿ, ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಲಾಯಿತು. ಇದು ಕಳೆದ ಮಾರ್ಚ್ 11 ರಂದು ಜಾರಿಗೆ ಬಂದಿದೆ.

ಇದು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳದಿಂದ ಡಿಸೆಂಬರ್ 31, 2014 ಕ್ಕಿಂತ ಮೊದಲು ಭಾರತದಲ್ಲಿ ಆಶ್ರಯ ಪಡೆದಿರುವ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ಅಲ್ಪಸಂಖ್ಯಾತರಿಗೆ ಪೌರತ್ವ ಪಡೆಯಲು ದಾರಿ ಮಾಡಿಕೊಡುತ್ತದೆ.

ಈ ಹಿನ್ನೆಲೆಯಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆಯಡಿ ಮೊದಲ ಹಂತದಲ್ಲಿ 14 ಮಂದಿಗೆ ಪೌರತ್ವ ನೀಡಲಾಗಿದೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ. ನೆರೆಯ ದೇಶಗಳಿಂದ ಭಾರತಕ್ಕೆ ವಲಸೆ ಬಂದಿರುವ ಸಿಖ್ ಮತ್ತು ಹಿಂದೂಗಳು ಸೇರಿದಂತೆ 14 ಮಂದಿ ಪೌರತ್ವ ಪಡೆದಿದ್ದಾರೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು 14 ಜನರಿಗೆ ಭಾರತೀಯ ಪೌರತ್ವವನ್ನು ನೀಡಿದರು.

ದೇಶ

ಮಲಪ್ಪುರಂ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್‌ ಪಕ್ಷ ಆಯೋಜಿಸಿದ್ದ 4ನೇ ಸಾರ್ವಜನಿಕ ಪ್ರತಿಭಟನಾ ಸಭೆ ಕೇರಳದ ಮಲಪ್ಪುರಂನಲ್ಲಿ ನಡೆಯಿತು. ಇದರಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್. ‘‘ದೇಶದ ಇತಿಹಾಸ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಮುಸ್ಲಿಂ ಆಡಳಿತಗಾರರು, ಗಣ್ಯರು ಮತ್ತು ಅಧಿಕಾರಿಗಳು ಮಹತ್ವದ ಪಾತ್ರ ವಹಿಸಿದ್ದಾರೆ.

ಇಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಕೆಲವು ಸಂಘಪರಿವಾರದ ಮುಖಂಡರು ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವಂತೆ ಎದುರು ಕುಳಿತವರನ್ನು ಕೇಳಿಕೊಂಡರು. ಆದರೆ ಆ ಘೋಷಣೆಯನ್ನು ರೂಪಿಸಿದವರ ಹೆಸರು ಅಜೀಮುಲ್ಲಾ ಖಾನ್ ಎಂದು ಸಂಘಪರಿವಾರಕ್ಕೆ ಗೊತ್ತಿದೆಯೋ ಇಲ್ಲವೋ ಗೊತ್ತಿಲ್ಲ.

ಈ ಘೋಷಣೆಯ ಸೃಷ್ಟಿಕರ್ತ ಮುಸ್ಲಿಂ ಆಗಿರುವುದರಿಂದ ಅವರು ಅದನ್ನು ಬಳಸುವುದನ್ನು ನಿಲ್ಲಿಸುತ್ತಾರೆಯೇ ಎಂದು ನನಗೆ ತಿಳಿದಿಲ್ಲ. ಅದೇ ರೀತಿ ‘ಜೈ ಹಿಂದ್’ ಘೋಷಣೆಯನ್ನು ಎತ್ತಿದವರು ಅಬಿದ್ ಹಸನ್ ಎಂಬ ಮುಸ್ಲಿಂ. ಮೊಘಲ್ ಚಕ್ರವರ್ತಿ ಷಹಜಹಾನ್ ಅವರ ಮಗ ದಾರಾ ಶಿಖೋ, ಸಂಸ್ಕೃತದಿಂದ 50ಕ್ಕೂ ಹೆಚ್ಚು ಉಪನಿಷತ್ತುಗಳನ್ನು ಪರ್ಷಿಯನ್ ಭಾಷೆಗೆ ಅನುವಾದಿಸಿದರು. ಅವರು ಭಾರತೀಯ ಕೃತಿಗಳು ಪ್ರಪಂಚದ ಅನೇಕ ಭಾಗಗಳನ್ನು ತಲುಪಲು ಸಹಾಯ ಮಾಡಿದರು.

ಭಾರತದಲ್ಲಿರುವ ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕೆಂದು ಹೇಳುವ ಸಂಘಪರಿವಾರದ ನಾಯಕರು ಇಂತಹ ಇತಿಹಾಸಗಳನ್ನು ತಿಳಿದುಕೊಳ್ಳಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ಮುಸ್ಲಿಮರು ದೊಡ್ಡ ಪಾತ್ರವನ್ನು ವಹಿಸಿದ್ದಾರೆ” ಎಂದು ಪಿಣರಾಯಿ ವಿಜಯನ್ ಹೇಳಿದರು.

ರಾಜ್ಯ

ಬೆಂಗಳೂರು: ಚುನಾವಣಾ ಬಾಂಡ್ ಪ್ರಕರಣವು ಕೇಂದ್ರ ಸರ್ಕಾರವನ್ನು ತೀವ್ರ ಸ್ವರೂಪದಲ್ಲಿ ಕಾಡುತ್ತಿದೆ. ತನ್ನ ರಕ್ಷಣೆಗಾಗಿ ತರಾತುರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇಂದ್ರ ಸರಕಾರ ಜಾರಿಗೆ ತಂದಿದೆ. ಸರಕಾರದ ಈ ನಡೆಯು ಜನರ ಗಮನ ಬೇರೆಡೆಗೆ ಸೆಳೆಯುವ ಹುನ್ನಾರವಾಗಿದೆ ಎಂದು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ತಾಹೇರ್ ಹುಸೇನ್, “ಈಗಿರುವ ಕೇಂದ್ರ ಸರ್ಕಾರಕ್ಕೆ ಈ ದೇಶದ ಜನರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ ಎಂಬುದಕ್ಕೆ ಹಲವಾರು ನಿದರ್ಶನಗಳಿವೆ. ಸಿಎಎ ಜಾರಿಗೆ ತರುವ ಮೂಲಕ ಹೊರದೇಶದವರನ್ನು ನಮ್ಮ ದೇಶದಲ್ಲಿ ತುಂಬಿಸಲು ಪ್ರಯತ್ನಿಸುತ್ತಿದ್ದಾರೆ.

ಇಲ್ಲಿನ ಜನಸಾಮಾನ್ಯರ ನೈಜ ಸಮಸ್ಯೆಗಳ ಕಡೆ ಗಮನ ಹರಿಸುತ್ತಿಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ. ಕೃಷಿ ಕಾಯ್ದೆ ಹೇರಿ ಅವರನ್ನೂ ಕಾಡಲಾಗುತ್ತಿದೆ. ರೈತರು ಬೀದಿಗಿಳಿದಿದ್ದಾರೆ. ನಿರುದ್ಯೋಗಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ‌. ಗ್ರಹಬಳಕೆಯ ಆಹಾರ ವಸ್ತುಗಳ ದರಗಳ ಏರಿಕೆಯಿಂದ ಜನರು ತತ್ತರಿಸುತ್ತಿದ್ದಾರೆ. ಈ ಪ್ರಮುಖ ಸಮಸ್ಯೆಗಳ ಕಡೆಗೆ ಗಮನ ಹರಿಸುತ್ತಿಲ್ಲ.

ಕೇಂದ್ರದ ವೈಫಲ್ಯದ ವಿರುದ್ಧ ಜನ ರೋಸಿ ಹೋಗಿದ್ದಾರೆ. ಜೊತೆಗೆ ಬಿಜೆಪಿ ಚುನಾವಣಾ ಬಾಂಡ್ ಪ್ರಕರಣದಿಂದ ಸಂಕಷ್ಟದಲ್ಲಿದೆ.  ಹೀಗಿರುವಾಗ ಚುನಾವಣೆ ಆಸನ್ನವಾಗಿರುವ ಈ ಹೊತ್ತಿಗೆ ಸರಕಾರದ ನಡೆಯು ಬಹಳಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ದೇಶ

ಕೊಲ್ಕತ್ತಾ: ಉತ್ತರ 24 ಪರಗಣ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪೌರತ್ವ ತಿದ್ದುಪಡಿ ಕಾಯ್ದೆಯು ಜನರ ಹಕ್ಕುಗಳನ್ನು ಕಸಿದುಕೊಳ್ಳುವ “ಗೇಮ್” ಆಗಿದೆ ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಮಮತಾ ಬ್ಯಾನರ್ಜಿ, ‘ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನನಗೆ ಅನುಮಾನವಿದೆ. ನಿಯಮಗಳಲ್ಲಿ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸರ್ಕಾರ ಸ್ಪಷ್ಟ ಉತ್ತರವನ್ನೂ ನೀಡಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಎಂಬುದು ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಆಟವಾಗಿದೆ. 2019ರಲ್ಲಿ, 13 ಲಕ್ಷ ಹಿಂದೂ ಬಂಗಾಳಿಗಳ ಹೆಸರುಗಳನ್ನು ಪ್ರಕಟಿಸಲಾಯಿತು. ಅಸ್ಸಾಂನಲ್ಲಿ ಕೆಲವು ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಹೆಸರುಗಳು ತೆಗೆದುಹಾಕಲ್ಪಟ್ಟವರು ಪ್ರಸ್ತುತ ಪೌರತ್ವ ಕೋರಿ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದರೆ ನೀಡಲಾಗುವುದೇ? ಅವರ ಮಕ್ಕಳ ಭವಿಷ್ಯ ಏನಾಗಲಿದೆ? ಅವರ ಆಸ್ತಿಗಳನ್ನು ಏನು ಮಾಡುತ್ತಾರೆ? ಅವರನ್ನು ಶಿಬಿರಕ್ಕೆ ಕರೆದೊಯ್ಯಲಾಗುತ್ತದೆ. ಪಶ್ಚಿಮ ಬಂಗಾಳದಿಂದ ಯಾರನ್ನೂ ಕರೆದುಕೊಂಡು ಹೋಗಲು ನಾನು ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್

‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸಂಸತ್ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಖಚಿತವಾಗಿ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮೋದಿ ನಾಯಕತ್ವದಲ್ಲಿ ಮೂರನೇ ಬಾರಿಗೆ ಗೆದ್ದು ಅಧಿಕಾರವನ್ನು ಉಳಿಸಿಕೊಳ್ಳಲು, ಕೇಂದ್ರ ಬಿಜೆಪಿ ಸರ್ಕಾರವು ಹಿಂದೂ ಮತಗಳನ್ನು ಗುರಿಯಾಗಿಟ್ಟುಕೊಂಡು, ಸಿಎಎ ವಿಷಯವನ್ನು ಮತ್ತೆ ಕೈಗೆತ್ತಿಕೊಳ್ಳುತ್ತಿದೆಯೇ ಎಂಬ ಪ್ರಶ್ನೆಯನ್ನು ಪ್ರತಿಪಕ್ಷಗಳು ಎತ್ತುತ್ತಿವೆ.

ಡಿಸೆಂಬರ್ 31, 2014 ಕ್ಕಿಂತ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಸೇರಿದಂತೆ ನೆರೆಯ ರಾಷ್ಟ್ರಗಳಿಂದ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದ ಹಿಂದೂಗಳು, ಪಾರ್ಸಿಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು ಮತ್ತು ಜೈನರಿಗೆ ಭಾರತೀಯ ಪೌರತ್ವ ನೀಡುವ ಮಸೂದೆಯನ್ನು 2019ರಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲಾಯಿತು.

ಅಂದಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ತಕ್ಷಣವೇ ಈ ಮಸೂದಗೆ ಅನುಮೋದನೆ ನೀಡಿದರು. ನಂತರ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿತು. ಇದಕ್ಕೆ ಸಂಬಂಧಿಸಿದ ಸಮೀಕ್ಷೆ ಮುಂದಿನ ಒಂದು ವರ್ಷ ನಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿತು.

ಅದೇ ಸಮಯದಲ್ಲಿ, ಕೇಂದ್ರ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತರಲು ಎಷ್ಟು ಗಂಭೀರವಾದ ಕ್ರಮಗಳನ್ನು ಕೈಗೊಂಡಿತೋ, ಅದಕ್ಕಿಂತ ಎರಡು ಪಟ್ಟು ಅಧಿಕವಾಗಿ ಸದರಿ ಕಾಯ್ದೆಗೆ ದೇಶಾದ್ಯಂತ ವಿರೋಧವೂ ಹುಟ್ಟಿಕೊಂಡಿತು.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಭಾರತದಲ್ಲಿ ನೆಲೆಸಿರುವ ಹಿಂದೂಗಳು, ಸಿಖ್ಖರು ಮತ್ತು ಇತರ ಧರ್ಮಗಳಿಗೆ ಭಾರತೀಯ ಪೌರತ್ವವನ್ನು ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ (CAA), ಆ ದೇಶಗಳಿಂದ ಬಂದು ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ಮಾತ್ರ ಪೌರತ್ವವನ್ನು ನೀಡಲಾಗುವುದಿಲ್ಲ ಎಂದು ಹೇಳುತ್ತದೆ.

ಈ ಕಾರಣಕ್ಕಾಗಿಯೇ ಆ ಕಾನೂನಿನ ವಿರುದ್ಧ ಭಾರತದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು. ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಂತಹ ರಾಜಧಾನಿಗಳಲ್ಲಿ ಪ್ರಮುಖ ಪ್ರತಿಭಟನೆಗಳು ನಡೆಯುತ್ತಿದ್ದರೆ, ಪ್ರತಿಭಟನೆಗಳು ಸಣ್ಣ ಪಟ್ಟಣಗಳಲ್ಲಿಯೂ ಹರಡಿತು. ಈ ಪ್ರತಿಭಟನೆ ಕೇಂದ್ರ ಬಿಜೆಪಿ ಸರ್ಕಾರಕ್ಕೂ ಬೆದರಿಕೆಯೊಡ್ಡಿತು. ಪ್ರತಿಭಟನೆಯನ್ನು ಎದುರಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ, ಹಠಾತ್ ಕೊರೋನ ವೈರಸ್‌ನ ಉಲ್ಬಣದಿಂದಾಗಿ, ಸಿಎಎ ವಿರುದ್ಧದ ಪ್ರತಿಭಟನೆ ಆ ಸಂದರ್ಭದಲ್ಲಿ ಅಂತ್ಯಗೊಂಡಿತು.

ಆ ಬಳಿಕ ಸಿಎಎ ವಿಚಾರದಲ್ಲಿ ಶಾಂತಿ ಕಾಪಾಡಿಕೊಂಡು ಬಂದಿದ್ದ ಕೇಂದ್ರ ಬಿಜೆಪಿ ಸರ್ಕಾರ, ಸಿಎಎ ಕಾಯ್ದೆಗೆ ನಿಯಮಗಳನ್ನು ರೂಪಿಸಿಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಕೇಂದ್ರ ಗೃಹ ಸಚಿವಾಲಯವು ಈ ನಿಯಮಗಳನ್ನು ರೂಪಿಸಲು ಹಲವು ಬಾರಿ ಕಾಲಾವಕಾಶ ಕೋರಿದೆ. ಈ ಹಿನ್ನಲೆಯಲ್ಲಿ, ಕೋಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ಖಂಡಿತವಾಗಿಯೂ ಸಿಎಎ ಕಾನೂನನ್ನು ತರಲಾಗುವುದು’ ಎಂದು ಹೇಳಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ‘ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯವನ್ನು ಹಾಳು ಮಾಡಿದ್ದಾರೆ. ಇಲ್ಲಿ 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಅದಕ್ಕೂ ಮುನ್ನ 2024ರ ಲೋಕಸಭೆ ಚುನಾವಣೆಯಲ್ಲಿ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು.

ಪೌರತ್ವ ತಿದ್ದುಪಡಿ ಕಾಯ್ದೆ ಈ ದೇಶದ ಕಾನೂನು; ಇದಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಹೇಳಿದರು.

ಇತ್ತೀಚೆಗೆ, ಪಶ್ಚಿಮ ಬಂಗಾಳದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಸಂಸದ ಅಜಯ್ ಮಿಶ್ರಾ, ‘ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಮಾರ್ಚ್ 30, 2024 ರೊಳಗೆ ಕೇಂದ್ರ ಸರ್ಕಾರವು ರೂಪಿಸಲಿದೆ’ ಎಂದು ಹೇಳಿದ್ದರು.

ಮೇ ತಿಂಗಳಿನಲ್ಲಿ ಸಂಸತ್ ಚುನಾವಣೆ ನಡೆಯಲಿರುವುದರಿಂದ ಅದಕ್ಕೂ ಮುನ್ನ ಸಿಎಎ ಕಾನೂನಿಗೆ ನಿಯಮ ರೂಪಿಸಿದರೆ ಹಿಂದೂಗಳನ್ನು ಒಗ್ಗೂಡಿಸಿ, ಗಣನೀಯ ಪ್ರಮಾಣದಲ್ಲಿ ಹಿಂದೂ ಮತಗಳನ್ನು ಗಿಟ್ಟಿಸಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ರಾಜಕೀಯ ವಿಮರ್ಶಕರು ಹೇಳುತ್ತಿದ್ದಾರೆ. ಇದು ಚುನಾವಣೆಯಲ್ಲಿ ಬಿಜೆಪಿಗೆ ನೆರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.