ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Citizenship Amendment Act Archives » Dynamic Leader
October 31, 2024
Home Posts tagged Citizenship Amendment Act
ರಾಜಕೀಯ

ಡಿ.ಸಿ.ಪ್ರಕಾಶ್

‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸಂಸತ್ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಖಚಿತವಾಗಿ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮೋದಿ ನಾಯಕತ್ವದಲ್ಲಿ ಮೂರನೇ ಬಾರಿಗೆ ಗೆದ್ದು ಅಧಿಕಾರವನ್ನು ಉಳಿಸಿಕೊಳ್ಳಲು, ಕೇಂದ್ರ ಬಿಜೆಪಿ ಸರ್ಕಾರವು ಹಿಂದೂ ಮತಗಳನ್ನು ಗುರಿಯಾಗಿಟ್ಟುಕೊಂಡು, ಸಿಎಎ ವಿಷಯವನ್ನು ಮತ್ತೆ ಕೈಗೆತ್ತಿಕೊಳ್ಳುತ್ತಿದೆಯೇ ಎಂಬ ಪ್ರಶ್ನೆಯನ್ನು ಪ್ರತಿಪಕ್ಷಗಳು ಎತ್ತುತ್ತಿವೆ.

ಡಿಸೆಂಬರ್ 31, 2014 ಕ್ಕಿಂತ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಸೇರಿದಂತೆ ನೆರೆಯ ರಾಷ್ಟ್ರಗಳಿಂದ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದ ಹಿಂದೂಗಳು, ಪಾರ್ಸಿಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು ಮತ್ತು ಜೈನರಿಗೆ ಭಾರತೀಯ ಪೌರತ್ವ ನೀಡುವ ಮಸೂದೆಯನ್ನು 2019ರಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲಾಯಿತು.

ಅಂದಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ತಕ್ಷಣವೇ ಈ ಮಸೂದಗೆ ಅನುಮೋದನೆ ನೀಡಿದರು. ನಂತರ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿತು. ಇದಕ್ಕೆ ಸಂಬಂಧಿಸಿದ ಸಮೀಕ್ಷೆ ಮುಂದಿನ ಒಂದು ವರ್ಷ ನಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿತು.

ಅದೇ ಸಮಯದಲ್ಲಿ, ಕೇಂದ್ರ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತರಲು ಎಷ್ಟು ಗಂಭೀರವಾದ ಕ್ರಮಗಳನ್ನು ಕೈಗೊಂಡಿತೋ, ಅದಕ್ಕಿಂತ ಎರಡು ಪಟ್ಟು ಅಧಿಕವಾಗಿ ಸದರಿ ಕಾಯ್ದೆಗೆ ದೇಶಾದ್ಯಂತ ವಿರೋಧವೂ ಹುಟ್ಟಿಕೊಂಡಿತು.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಭಾರತದಲ್ಲಿ ನೆಲೆಸಿರುವ ಹಿಂದೂಗಳು, ಸಿಖ್ಖರು ಮತ್ತು ಇತರ ಧರ್ಮಗಳಿಗೆ ಭಾರತೀಯ ಪೌರತ್ವವನ್ನು ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ (CAA), ಆ ದೇಶಗಳಿಂದ ಬಂದು ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ಮಾತ್ರ ಪೌರತ್ವವನ್ನು ನೀಡಲಾಗುವುದಿಲ್ಲ ಎಂದು ಹೇಳುತ್ತದೆ.

ಈ ಕಾರಣಕ್ಕಾಗಿಯೇ ಆ ಕಾನೂನಿನ ವಿರುದ್ಧ ಭಾರತದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು. ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಂತಹ ರಾಜಧಾನಿಗಳಲ್ಲಿ ಪ್ರಮುಖ ಪ್ರತಿಭಟನೆಗಳು ನಡೆಯುತ್ತಿದ್ದರೆ, ಪ್ರತಿಭಟನೆಗಳು ಸಣ್ಣ ಪಟ್ಟಣಗಳಲ್ಲಿಯೂ ಹರಡಿತು. ಈ ಪ್ರತಿಭಟನೆ ಕೇಂದ್ರ ಬಿಜೆಪಿ ಸರ್ಕಾರಕ್ಕೂ ಬೆದರಿಕೆಯೊಡ್ಡಿತು. ಪ್ರತಿಭಟನೆಯನ್ನು ಎದುರಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ, ಹಠಾತ್ ಕೊರೋನ ವೈರಸ್‌ನ ಉಲ್ಬಣದಿಂದಾಗಿ, ಸಿಎಎ ವಿರುದ್ಧದ ಪ್ರತಿಭಟನೆ ಆ ಸಂದರ್ಭದಲ್ಲಿ ಅಂತ್ಯಗೊಂಡಿತು.

ಆ ಬಳಿಕ ಸಿಎಎ ವಿಚಾರದಲ್ಲಿ ಶಾಂತಿ ಕಾಪಾಡಿಕೊಂಡು ಬಂದಿದ್ದ ಕೇಂದ್ರ ಬಿಜೆಪಿ ಸರ್ಕಾರ, ಸಿಎಎ ಕಾಯ್ದೆಗೆ ನಿಯಮಗಳನ್ನು ರೂಪಿಸಿಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಕೇಂದ್ರ ಗೃಹ ಸಚಿವಾಲಯವು ಈ ನಿಯಮಗಳನ್ನು ರೂಪಿಸಲು ಹಲವು ಬಾರಿ ಕಾಲಾವಕಾಶ ಕೋರಿದೆ. ಈ ಹಿನ್ನಲೆಯಲ್ಲಿ, ಕೋಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ಖಂಡಿತವಾಗಿಯೂ ಸಿಎಎ ಕಾನೂನನ್ನು ತರಲಾಗುವುದು’ ಎಂದು ಹೇಳಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ‘ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯವನ್ನು ಹಾಳು ಮಾಡಿದ್ದಾರೆ. ಇಲ್ಲಿ 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಅದಕ್ಕೂ ಮುನ್ನ 2024ರ ಲೋಕಸಭೆ ಚುನಾವಣೆಯಲ್ಲಿ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು.

ಪೌರತ್ವ ತಿದ್ದುಪಡಿ ಕಾಯ್ದೆ ಈ ದೇಶದ ಕಾನೂನು; ಇದಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಹೇಳಿದರು.

ಇತ್ತೀಚೆಗೆ, ಪಶ್ಚಿಮ ಬಂಗಾಳದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಸಂಸದ ಅಜಯ್ ಮಿಶ್ರಾ, ‘ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಮಾರ್ಚ್ 30, 2024 ರೊಳಗೆ ಕೇಂದ್ರ ಸರ್ಕಾರವು ರೂಪಿಸಲಿದೆ’ ಎಂದು ಹೇಳಿದ್ದರು.

ಮೇ ತಿಂಗಳಿನಲ್ಲಿ ಸಂಸತ್ ಚುನಾವಣೆ ನಡೆಯಲಿರುವುದರಿಂದ ಅದಕ್ಕೂ ಮುನ್ನ ಸಿಎಎ ಕಾನೂನಿಗೆ ನಿಯಮ ರೂಪಿಸಿದರೆ ಹಿಂದೂಗಳನ್ನು ಒಗ್ಗೂಡಿಸಿ, ಗಣನೀಯ ಪ್ರಮಾಣದಲ್ಲಿ ಹಿಂದೂ ಮತಗಳನ್ನು ಗಿಟ್ಟಿಸಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ರಾಜಕೀಯ ವಿಮರ್ಶಕರು ಹೇಳುತ್ತಿದ್ದಾರೆ. ಇದು ಚುನಾವಣೆಯಲ್ಲಿ ಬಿಜೆಪಿಗೆ ನೆರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.