ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Drought Archives » Dynamic Leader
October 16, 2024
Home Posts tagged Drought
ರಾಜ್ಯ

ಬೆಂಗಳೂರು: ಬರಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ  ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ ಎಂದು ಹೇಳಿದ್ದಾರೆ.

“ಬರ ಪರಿಹಾರಕ್ಕಾಗಿ ಅವರು (ಕರ್ನಾಟಕ) ನಮ್ಮನ್ನು (ಕೇಂದ್ರ ಸರ್ಕಾರ)ವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟೀಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ” ಎಂದು ಅಡ್ವೋಕೇಟ್ ಜನರಲ್ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ.

ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು. ನಮ್ಮ ಉಪಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದರು ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಬಿಜೆಪಿ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ.

ಬರಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಬಿಜೆಪಿ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ಹೇಳಿದ್ದಾರೆ.

ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಬಿಜೆಪಿ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಕಿಡಿಕಾರಿದ್ದಾರೆ.

ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.

ರಾಜಕೀಯ

ನವದೆಹಲಿ: ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು ಎಂದು ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ನಡೆಯುತ್ತಿರುವ ಕೇಂದ್ರ ಸಚಿವರು, ಸರ್ವ ಪಕ್ಷದ ಸಂಸತ್ ಸದಸ್ಯರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

“ಸಂಕಷ್ಟ ಸೂತ್ರ ಸಿದ್ಧವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ. ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ. ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯವಾಗಿ ಬೇಕಿದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ. ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ ಬಳಿಕ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ.

ಇದನ್ನೂ ಓದಿ: ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳಯರಿಗೆ ಶೇ.33 ಮೀಸಲಾತಿ: 7 ವರ್ಷ ಕಾಯಬೇಕು?

ವಾಸ್ತವ ಪರಿಸ್ಥಿತಿಯನ್ನು ನಮ್ಮ ಕಾನೂನು ತಂಡ ಮತ್ತು ತಜ್ಞರು ಹಾಗೂ ಅಧಿಕಾರಿಗಳ ತಂಡ CWMC ಎದುರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ 108.4 ಟಿಎಂಸಿ ನೀರನ್ನು ನಾವು ಬಿಡಬೇಕಿತ್ತು. ಆದರೆ ನಾವು ಬಿಟ್ಟಿರುವುದು 39.8 ಟಿಎಂಸಿ ನೀರು ಮಾತ್ರ. ಇಂಥಾ ಪರಿಸ್ಥಿತಿ ಎದುರಾದಾಗ ಸಮರ್ಥವಾಗಿ ಜನರ ಹಿತ ಕಾಪಾಡಲು ಮೇಕೆದಾಟು ನಮಗೆ ಅನಿವಾರ್ಯ.

ಆದ್ದರಿಂದ ನಮ್ಮ ನೀರನ್ನು, ನಮ್ಮ ಜಾಗದಲ್ಲಿ ಬಳಸಿಕೊಳ್ಳಲು, ಸಂಗ್ರಹಿಸಿಕೊಳ್ಳಲು, ವಿದ್ಯುತ್ ಉತ್ಪಾದಿಸಿಕೊಳ್ಳಲು ಮೇಕೆದಾಟು ನಮಗೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಂಥಾ ಪರಿಸ್ಥಿತಿಗೆ ಮೇಕೆದಾಟು ಪರಿಹಾರ ಆಗುತ್ತದೆ. ಈಗಾಗಲೇ ನಾವು ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದು ಪರಿಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದೇವೆ. ಸರ್ವಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಕೇಂದ್ರದ ಜಲ ಶಕ್ತಿ ಸಚಿವರು ಹಾಗೂ ಪ್ರಧಾನಿ ಅವರ ಸಮಯ ಕೇಳಿದ್ದೇವೆ. ಹೀಗಾಗಿ ಮುಂದೆ ನಾವು ಇಡಬೇಕಾದ ಹೆಜ್ಜೆಗಳ ಕುರಿತು ವೈಜ್ಞಾನಿಕ ಸಂಗತಿಗಳ ಆಧಾರದಲ್ಲಿ ಚರ್ಚಿಸಬೇಕು” ಎಂದು ಹೇಳಿದ್ದಾರೆ.