ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Fishing Archives » Dynamic Leader
November 22, 2024
Home Posts tagged Fishing
ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮೀನುಗಾರ ಸಮುದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ. ಮೀನುಗಾರಿಕೆ ವಿಶ್ವ ವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು. ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ ಆಹಾರ. ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ನಮ್ಮ ಸರ್ಕಾರ ಅಗತ್ಯ ಎಲ್ಲಾ ನೆರವನ್ನೂ ನೀಡುತ್ತದೆ ಎಂದು ಹೇಳಿದರು.

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯ್ತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ ಎಂಬ ಭರವಸೆಯನ್ನು ನೀಡಿದ ಮುಖ್ಯಮಂತ್ರಿಗಳು, 1977ರಲ್ಲಿ ದೆಹಲಿಯಲ್ಲಿ ಹತ್ತಾರು ದೇಶಗಳ ಮೀನುಗಾರ ಸಮುದಾಯದ ಪ್ರತಿನಿಧಿಗಳು ಸಮುದಾಯದ ಹಿತಕ್ಕಾಗಿ ಮೊದಲ ಸಭೆ ನಡೆಸಿದರು. ಅಲ್ಲಿಂದ ಪ್ರತಿವರ್ಷ ವಿಶ್ವ ಮೀನುಗಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ನೆನಪಿಸಿದರು.

ಮೀನುಗಾರ ಸಮುದಾಯದ ಜತೆ ನೇರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳನ್ನು ಆಲಿಸಿ ಎಲ್ಲಾ ಸಮಸ್ಯೆಗಳಿಗೂ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಂಕಾಳ ಎಸ್ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.