ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Junagadh Violence Archives » Dynamic Leader
November 21, 2024
Home Posts tagged Junagadh Violence
ದೇಶ ರಾಜಕೀಯ

ಜುನಾಗಢ್: ಗುಜರಾತ್‌ನ ಜುನಾಗಢ್‌ನಲ್ಲಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ, ಅಕ್ರಮವಾಗಿ ದರ್ಗಾವನ್ನು ನಿರ್ಮಿಸಲಾಗಿದೆ ಎಂದು ಹೇಳಿಕೊಂಡಿರುವ ಮುನ್ಸಿಪಲ್ ಕಾರ್ಪೊರೇಷನ್, ಅದನ್ನು ಕೆಡವಲು ಮುಂದಾಗಿ ನೋಟಿಸ್‌ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ, ಘರ್ಷಣೆಗಳು ಭುಗಿಲೆದ್ದ ನಂತರ ಒಬ್ಬರು ಸಾವನ್ನಪ್ಪಿದ್ದಾರೆ. ಮತ್ತು ಉಪ ಪೊಲೀಸ್ ಅಧೀಕ್ಷಕರು ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ಈ ಹಿನ್ನಲೆಯಲ್ಲಿ, ಗುಜರಾತ್‌ನ ಜುನಾಗಢದಲ್ಲಿ ನಡೆದ ಹಿಂಸಾಚಾರದ ವೇಳೆ ಕಲ್ಲು ತೂರಾಟ ನಡೆಸುತ್ತಿದ್ದ ಅಪ್ರಾಪ್ತ ವಯಸ್ಕರ ಮೇಲೆ, ಏಳು ದಿನಗಳೊಳಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಸೂಚಿಸಿದೆ. ಶುಕ್ರವಾರ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಅಪ್ರಾಪ್ತ ವಯಸ್ಕರು ಭಾಗವಹಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಭಾನುವಾರ ಜುನಾಗಢ್ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದೆ.

ಪೊಲೀಸ್ ವರಿಷ್ಠಾಧಿಕಾರಿಗೆ (SP) ಬರೆದ ಪತ್ರದಲ್ಲಿ ವೀಡಿಯೊವನ್ನು ಉಲ್ಲೇಖಿಸಲಾಗಿದೆ ಮತ್ತು ಹಿಂಸಾಚಾರದ ಸಂದರ್ಭದಲ್ಲಿ ಅನೇಕ ಅಪ್ರಾಪ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದನ್ನು ನೋಡಲಾಗಿದೆ ಎಂದು ಹೇಳಲಾಗಿದೆ. ದರ್ಗಾವನ್ನು ಧ್ವಂಸಗೊಳಿಸುವ ಸೂಚನೆಯನ್ನು ಹೊರ ಹಾಕಿದ ನಂತರ, ಕನಿಷ್ಠ 200-300 ಜನರು ದರ್ಗಾದ ಸುತ್ತಲೂ ಜಮಾಯಿಸಿದ್ದರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಿದರು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಗುಜರಾತ್ ಜುನಾಗಢ ಪ್ರದೇಶದಲ್ಲಿ ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ವಿಚಾರದಲ್ಲಿ ಗಲಭೆ: ಓರ್ವ ಸಾವು!

NCPCRನ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಎಸ್‌ಪಿಗೆ ಬರೆದ ಪತ್ರದಲ್ಲಿ ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿ ಏಳು ದಿನಗಳೊಳಗೆ ಪೊಲೀಸ್ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ನಿಬಂಧನೆಗಳ ಜೊತೆಗೆ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 83(2) ಮತ್ತು 75ರ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಬಾಲಾಪರಾಧಿ ಕಾಯಿದೆಯ ಸೆಕ್ಷನ್ 83(2) ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು, ಮಕ್ಕಳನ್ನು ಬಳಸಿಕೊಳ್ಳುವ ಯಾವುದೇ ವಯಸ್ಕರು ಅಥವಾ ವಯಸ್ಕ ಗುಂಪುಗಳಿಗೆ ಸುಮಾರು ಏಳು ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆಯನ್ನು ವಿಧಿಸುತ್ತದೆ. ಅದೇ ಕಾಯಿದೆಯ ಸೆಕ್ಷನ್ 75ರ ಅಡಿಯಲ್ಲಿ, ಒಬ್ಬ ವ್ಯಕ್ತಿಯು ಮಗುವಿನ ಮೇಲೆ ಆಕ್ರಮಣ, ಕೈಬಿಡುವುದು, ನಿಂದನೆ ಅಥವಾ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದಕ್ಕಾಗಿ ಶಿಕ್ಷಿಸಬಹುದು.

NCPCR ಎಸ್‌ಪಿಗೆ ತನಿಖೆಯನ್ನು ಪ್ರಾರಂಭಿಸಲು ಮತ್ತು ಸೆಕ್ಷನ್‌ಗಳನ್ನು ಉಲ್ಲಂಘಿಸುವ ಯಾರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೇಳಿದೆ ಮತ್ತು ಏಳು ದಿನಗಳಲ್ಲಿ ಕ್ರಮ-ತೆಗೆದುಕೊಂಡ ವರದಿಯನ್ನು ನೀಡುವಂತೆ ಸೂಚಿಸಿದೆ.

ಕ್ರೈಂ ರಿಪೋರ್ಟ್ಸ್ ದೇಶ

ಜುನಾಗಢ: ಜೂನ್ 14ರಂದು ಜುನಾಗಢ ಮುನ್ಸಿಪಲ್ ಕಾರ್ಪೊರೇಷನ್ ಮಜೆವಾಡಿ ದರ್ವಾಜಾ ಬಳಿಯ ಮಸೀದಿಯೊಂದಕ್ಕೆ ಜಮೀನಿನ ಮಾಲೀಕತ್ವದ ಬಗ್ಗೆ ದಾಖಲೆಗಳನ್ನು ನೀಡುವಂತೆ ನೋಟಿಸ್ ನೀಡಿತ್ತು. ನೋಟಿಸ್‌ನಿಂದ ಕ್ಷೋಭೆಗೊಳಗಾದ ಸುಮಾರು 500-600 ಜನರು ಶುಕ್ರವಾರ ರಾತ್ರಿ ಧಾರ್ಮಿಕ ಕಟ್ಟಡದ ಬಳಿ ಜಮಾಯಿಸಿ ರಸ್ತೆಗಳನ್ನು ತಡೆದರು ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ತಿಳಿಸಿದ್ದಾರೆ.

ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ಸಲುವಾಗಿ, ಜುನಾಗಢ ಮುನ್ಸಿಪಲ್ ಕಾರ್ಪೊರೇಷನ್ ನ ಕಾರ್ಯಚರಣೆಯನ್ನು ವಿರೋಧಿಸಿ, ಸ್ಥಳೀಯರ ಗುಂಪೊಂದು ಕಲ್ಲು ತೂರಾಟ ಮತ್ತು ವಾಹನಕ್ಕೆ ಬೆಂಕಿ ಹಚ್ಚಿದ ಕಾರಣ, ಉಂಟಾದ ಗಲಭೆಯಲ್ಲಿ ಗುಜರಾತಿನ ಜುನಾಗಢ ನಗರದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮತ್ತು ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರದ ಮಜೆವಾಡಿ ದರ್ವಾಜಾ ಬಳಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ. ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ನಂತರ ಅಲ್ಲಿದ್ದ 174 ಜನರನ್ನು ಸುತ್ತುವರೆದು ಗಲಭೆ ನಡೆಯದಂತೆ ಎಚ್ಚರಿಕೆಯ ಕ್ರಮವನ್ನು ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ನಾಗರಿಕನ ಸಾವಿನ ಹಿಂದಿನ ನಿಖರವಾದ ಕಾರಣ ತಿಳಿದುಬರುತ್ತದೆ. ಆದರೆ, ಗುಂಪು ಎಸೆದ ಕಲ್ಲಿನಿಂದಲೇ ಆತ ಗಾಯಗೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ಸ್ಥಳದಲ್ಲಿದ್ದ ಜುನಾಗಢದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರ ಸಿಬ್ಬಂದಿಗಳು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯ ಬಳಿಕ, ಶಾಂತಿಯುತವಾಗಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರತಿಭಟನಾಕಾರರ ರಸ್ತೆ ತಡೆಯನ್ನು ತೆರವುಗೊಳಿಸಲಾಯಿತು. ಆದರೆ, ರಾತ್ರಿ 10.15ರ ಸುಮಾರಿಗೆ ಏಕಾ ಏಕಿ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಲಾಯಿತು ಎಂದು ಪೊಲೀಸರು ಹೇಳುತ್ತಾರೆ.

ಘೋಷಣೆಗಳನ್ನು ಕೂಗುತ್ತಾ, ದರ್ಗಾಗೆ ನೋಟಿಸ್ ನೀಡಿದ್ದಕ್ಕೆ ಆಕ್ರೋಶಗೊಂಡ ಕೆಲವರು, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದರು. ಅಶಿಸ್ತಿನ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಮತ್ತು ಲಾಠಿ ಚಾರ್ಜ್ ಮಾಡಿದರು. ಘಟನೆಯಲ್ಲಿ ಜುನಾಗಢ ಡಿವೈಎಸ್ಪಿ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

“ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಯ ಸಾವಿನ ಬಗ್ಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಪೊಲೀಸ್ ತಂಡಗಳ ಕೂಂಬಿಂಗ್ ಕಾರ್ಯಾಚರಣೆಯಲ್ಲಿ 174 ಜನರನ್ನು ಸುತ್ತುವರೆದು ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಘರ್ಷಣೆಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿತೇಜ ವಾಸಮಶೆಟ್ಟಿ ಹೇಳಿದ್ದಾರೆ.