ರಾಯ್‌ಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾವಿನ ನಂತರವೂ ಜನರಿಂದ ತೆರಿಗೆ ಸಂಗ್ರಹಿಸಲು ಕಾಂಗ್ರೆಸ್ ಯೋಜಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಛತ್ತೀಸ್‌ಗಢದ ಸರ್ಗುಜಾದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಅಧಃಪತನಕ್ಕೆ ಕಾಂಗ್ರೆಸ್‌ನ ದುರಾಡಳಿತ ಮತ್ತು ನಿರಾಸಕ್ತಿಯೇ ಕಾರಣ. ಇಂದು ಬಿಜೆಪಿ, ಭಯೋತ್ಪಾದನೆ ಮತ್ತು ನಕ್ಸಲಿಸಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಹಿಂಸಾಚಾರವನ್ನು ಹರಡುವ ಜನರನ್ನು ಧೈರ್ಯಶಾಲಿ ಎಂದು ಕರೆಯುವ ಮೂಲಕ ಕಾಂಗ್ರೆಸ್ ಬೆಂಬಲಿಸುತ್ತದೆ. ಭಯೋತ್ಪಾದಕರು ಹತರಾದಾಗ ಕಣ್ಣೀರು ಸುರಿಸುತ್ತಿದ್ದು, ಇಂತಹ ಕೃತ್ಯಗಳಿಂದ ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ.
ಆಂಧ್ರಪ್ರದೇಶದಲ್ಲಿ ಧಾರ್ಮಿಕ ಮೀಸಲಾತಿ ಕಲ್ಪಿಸಲು ಕಾಂಗ್ರೆಸ್ ಹಲವು ವರ್ಷಗಳ ಹಿಂದೆಯೇ ಪ್ರಯತ್ನಿಸಿತ್ತು. ನಂತರ ಇದನ್ನು ದೇಶಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಯೋಜಿಸಿತ್ತು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿ ಅಪಾಯಕ್ಕೆ ಸಿಲುಕಲಿದೆ. ದೇಶದಲ್ಲಿ ಕೆಳವರ್ಗದವರಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ಕೊಡುತ್ತಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಧಾರ್ಮಿಕ ಮೀಸಲಾತಿಗೆ ಅವಕಾಶ ನೀಡುವುದಿಲ್ಲ.
ಸಾವಿನ ನಂತರವೂ ಜನರಿಂದ ತೆರಿಗೆ ಸಂಗ್ರಹಿಸಲು ಕಾಂಗ್ರೆಸ್ ಯೋಜಿಸಿದೆ. ಕಾಂಗ್ರೆಸ್ ಪಕ್ಷ ದೇಶದ ಜನರ ಆಸ್ತಿ ಕಿತ್ತುಕೊಳ್ಳಲು ಪ್ಲಾನ್ ಮಾಡಿದೆ. ಪಕ್ಷವು ದೇಶದ ಬಡವರ ಆಸ್ತಿ ಪಾಸ್ತಿಗಳ ಮೇಲೆ ಕಣ್ಣಿಟ್ಟಿದೆ. ಜನರ ಕಷ್ಟಪಟ್ಟು ಸಂಪಾದಿಸಿದ ಆಸ್ತಿ ಮತ್ತು ಹಣವನ್ನು ಕಸಿದುಕೊಳ್ಳಲು ಯೋಜಿಸಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.