ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
SC/ST Reservation Archives » Dynamic Leader
November 24, 2024
Home Posts tagged SC/ST Reservation
ರಾಜಕೀಯ

ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದು, ಈ ಮೂಲಕ ಒಳಮೀಸಲಾತಿಗೆ ಡಬಲ್ ಎಂಜಿನ್ ಸರ್ಕಾರ ಬದ್ಧವಾಗಿದೆ ಎಂಬ ಬಿಜೆಪಿ ಪಕ್ಷದ ಹಿಪಾಕ್ರಟಿಕ್ ನಡವಳಿಕೆ ಬಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಒಳಮೀಸಲಾತಿ ವಿಷಯದ ಕಟ್ಲೆ ಸುಪ್ರಿಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಸುಪ್ರೀಂಕೋರ್ಟ್ ನ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿ ವಿಷಯವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ಮುಖ್ಯನ್ಯಾಯಮೂರ್ತಿಯನ್ನು ಕೋರಿದ್ದಾರೆ. ಇದರಿಂದಾಗಿ ಇದಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ‘ಸಬ್ ಜುಡೀಸ್’ ಆಗುತ್ತದೆ” ಎಂದು ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹರಾವ್ ಅವರ ಪ್ರಶ್ನೆಗೆ ನೀಡಿರುವ ಉತ್ತರದಲ್ಲಿ ಸಚಿವ ನಾರಾಯಣ ಸ್ವಾಮಿ ಜಾರಿಕೊಂಡಿದ್ದಾರೆ.

“ಒಳಒಳಮೀಸಲಾತಿಗಾಗಿ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ ಎಂದು ಈ ಉದ್ದೇಶಕ್ಕಾಗಿಯೇ ರಚಿಸಲಾಗಿರುವ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿತ್ತು. ಈ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡಲು ಕೋರಲಾಗಿತ್ತು. ಆದರೆ ಇಲ್ಲಿಯವರೆಗೆ 20 ರಾಜ್ಯ ಸರ್ಕಾರಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಮಾತ್ರ ತಮ್ಮ ಅಭಿಪ್ರಾಯವನ್ನು ತಿಳಿಸಿದೆ” ಎಂದು ಹೇಳಿದ್ದಾರೆ.

“ಈ 20 ರಾಜ್ಯಗಳಲ್ಲಿ ಏಳು ರಾಜ್ಯಗಳು ಮಾತ್ರ ಒಳಮೀಸಲಾತಿಗೆ ಒಪ್ಪಿಗೆ ಸೂಚಿಸಿದ್ದು ಉಳಿದ 13 ರಾಜ್ಯಗಳು ವಿರೋಧಿಸಿವೆ” ಎಂದು ಹೇಳುವ ಮೂಲಕ ಬಹುಸಂಖ್ಯಾತ ರಾಜ್ಯಗಳು ಒಳಮೀಸಲಾತಿಗೆ ವಿರುದ್ಧವಾಗಿವೆ ಎಂಬ ಸೂಚನೆಯನ್ನೂ ಸಚಿವ ನಾರಾಯಣಸ್ವಾಮಿ ನೀಡಿದ್ದಾರೆ. ಒಳಮೀಸಲಾತಿ ಜಾರಿಗೆ ತಮ್ಮ ಪಕ್ಷ ಬದ್ಧವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರವಸೆ ನೀಡಿದ್ದ ಬಿಜೆಪಿ ನಾಯಕರು ಆ ಸಮಯದಲ್ಲಿ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದಾಗಲಿ, ಈ ಬಗ್ಗೆ ಕೈಗೊಳ್ಳುವ ನಿರ್ಧಾರ ಸಬ್ ಜುಡಿಸ್ ಆಗುತ್ತದೆ ಎಂದಾಗಲಿ ಯಾಕೆ ಹೇಳಿಲ್ಲ?

2020ರ ಆಗಸ್ಟ್ ತಿಂಗಳಲ್ಲಿಯೇ ಐವರು ನ್ಯಾಯಾಧೀಶರ ಪೀಠವು ಏಳು ನ್ಯಾಯಾಧೀಶರ ಪೀಠ ರಚಿಸುವಂತೆ ಕೋರಿಕೆ ಸಲ್ಲಿಸಿದ್ದರೂ ಇಲ್ಲಿಯ ವರೆಗೆ ಯಾಕೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿಲ್ಲ? ಇದೇ ವಿಷಯವನ್ನು ನಾವು ಪ್ರಶ್ನಿಸಿದಾಗ ಸಂವಿಧಾನಕ್ಕೆ ತಿದ್ದುಪಡಿ ಮಾಡದೆಯೇ ಒಳಮೀಸಲಾತಿ ಜಾರಿಗೊಳಿಸುವುದಾಗಿ ಸುಳ್ಳು ಭರವಸೆ ನೀಡಿದ್ದು ಯಾಕೆ? ಬಹಿರಂಗವಾಗಿ ದಲಿತ ಸಮುದಾಯದ ಬಗ್ಗೆ ಹುಸಿಪ್ರೀತಿ-ಕಾಳಜಿ ವ್ಯಕ್ತಪಡಿಸುವ ಬಿಜೆಪಿ ಮತ್ತು ಸಂಘ ಪರಿವಾರ, ಅಂತರಂಗದಲ್ಲಿ ಮೀಸಲಾತಿಯೂ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಉಪಕ್ರಮಗಳಿಗೆ ವಿರುದ್ಧವಾಗಿದೆ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಎಂದು ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

“ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು. ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ.

ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು. ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ.

ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ” ಎಂದರು.