ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಗೋಮಾಳ Archives » Dynamic Leader
December 4, 2024
Home Posts tagged ಗೋಮಾಳ
ರಾಜ್ಯ

ಬೆಂಗಳೂರು: ಸಂಚಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಜೊತೆಗಿನ ಸಭೆಯನ್ನು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆಯೋಜಿಸಲಾಗಿತ್ತು. ಸಭೆಯ ಬಳಿಕ ಅವರು ನೀಡಿದ ಪ್ರಮುಖ ಸೂಚನೆ ಹಾಗೂ ಮಾಹಿತಿ ಹೀಗಿವೆ:

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕುರಿಗಳ ಕಳ್ಳತನ ತಡೆಯಲು ಅಗತ್ಯವಿದ್ದರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸೂಚಿಸಲಾಗುವುದು. ಕುರಿ ಕಳ್ಳತನ ಪ್ರಕರಣಗಳ ಕುರಿತು ಯಾವುದೇ ಠಾಣೆಗೆ ದೂರು ಬಂದ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಯಿತು.

ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು.

ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು ವ್ಯವಸ್ಥೆ ಮಾಡಲಾಗುವುದು. ಈ ಗುರುತಿನ ಚೀಟಿ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು.

ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ಮೇರೆಗೆ ಪ್ರವೇಶ ನೀಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು ಇವುಗಳಿಗೆ ಸರ್ಕಾರಿ ಆದೇಶ ನೀಡುವಂತೆ ಸೂಚಿಸಲಾಯಿತು.

ಪಶುಸಂಗೋಪನಾ ಇಲಾಖೆಯಲ್ಲಿ 1300 ವೈದ್ಯರ ಹುದ್ದೆ ಖಾಲಿ ಇದ್ದು, ಪ್ರಸ್ತುತ 400 ವೈದ್ಯರನ್ನು ನೇಮಕ ಮಾಡಲಾಗುತ್ತಿದೆ. ಮುಂದಿನ ವರ್ಷ ಬಾಕಿ ವೈದ್ಯರ ನೇಮಕಾತಿ ಮಾಡಲಾಗುವುದು.

ಕುರಿಗಾರರು ಕ್ಯಾಂಪ್ ಮಾಡಿರುವ ಕಡೆಗಳಲ್ಲೇ ವೈದ್ಯರು ಬಂದು ಚಿಕಿತ್ಸೆ ನೀಡಬೇಕು ಎಂದು ಸೂಚಿಸಲಾಗುವುದು.

ಹಿಂದಿನ ಸರ್ಕಾರ ಸತ್ತ ಕುರಿಗಳಿಗೆ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ನಿಲ್ಲಿಸಿದ್ದು, ಈ ಕುರಿತು ಪರಿಹಾರ ನೀಡುವ ಬಗ್ಗೆ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಲಾಗುವುದು. ಅನುಗ್ರಹ ಯೋಜನೆಯಡಿ ಒಂದು ಕುರಿ ಆಕಸ್ಮಿಕವಾಗಿ ಮರಣ ಹೊಂದಿದರೆ 5 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು.

ಗೋಮಾಳಗಳನ್ನು ಯಾರಿಗೂ ಪರಭಾರೆ ಮಾಡಬಾರದೆಂದು ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶ ಹೊರಡಿಸಲಾಗಿತ್ತು. ಗೋಮಾಳಗಳ ರಕ್ಷಣೆ ಮಾಡಲಾಗುವುದು. ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು.

ಕುರಿಗಳ ಅಭಿವೃದ್ಧಿ, ಕುರಿಗಾಹಿಗಳ ಭದ್ರತೆ, ಕುರಿ ವ್ಯಾಪಾರಕ್ಕೆ ನೆರವು, ಮಾರುಕಟ್ಟೆ ವಿಸ್ತರಣೆಗೆ ನೆರವು ನೀಡಲಾಗುವುದು ಎಂಬ ಸೂಚನೆಗಳನ್ನು ನೀಡಿದ್ದಾರೆ.