ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮಂಗಳೂರು ಪೊಲೀಸ್ Archives » Dynamic Leader
November 21, 2024
Home Posts tagged ಮಂಗಳೂರು ಪೊಲೀಸ್
ರಾಜಕೀಯ

ಮಂಗಳೂರು: ಮಂಗಳೂರು ಐಜಿಪಿ ಕಛೇರಿ ವ್ಯಾಪ್ತಿಯ ಹಾಗೂ ಇಲ್ಲಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಪರಮೇಶ್ವರ್ ಅವರು ಪಶ್ಚಿಮ ವಲಯ ಐಜಿಪಿ ಕಛೇರಿ ವ್ಯಾಪ್ತಿಯ ಹಾಗೂ ಇಲ್ಲಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಗೃಹ ಸಚಿವರು, ‘ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಇದು ನನಗೆ ಹೊಸ ಹುದ್ದೆ ಅಲ್ಲ. ಹೊಸ ಸವಾಲುಗಳು ಹುಟ್ಟಿಕೊಂಡಿವೆ ಮತ್ತು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ’ ಎಂದರು.

‘ನೈತಿಕ ಪೊಲೀಸ್​ಗಿರಿ ತಡೆಯಲು ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಎಂಬ ಹೊಸ ಘಟಕ ಸ್ಥಾಪಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ ಎಂದರು. ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಅಂತಾ ಜನ ಮಾತಾಡ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು.

ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು’ ಎಂದು ಪೊಲೀಸರಿಗೆ ಸೂಚನೆ ನೀಡಿದರು.