ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಿದ್ದರಾಮಯ್ಯ Archives » Page 4 of 13 » Dynamic Leader
November 22, 2024
Home Posts tagged ಸಿದ್ದರಾಮಯ್ಯ (Page 4)
ರಾಜ್ಯ

ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ): ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರ್ಷ ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ. ಜನರ ಕಷ್ಟ – ನಷ್ಟಗಳೆಲ್ಲವೂ ದೂರಾಗಿ ಸುಖ, ಶಾಂತಿ, ಸಮೃದ್ಧಿ ಎಲ್ಲರ ಬದುಕಲ್ಲಿ ನೆಲೆಸಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿನೀಡಿದ ಸಂದರ್ಭದಲ್ಲಿ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಆದ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ, ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಉಪಸ್ಥಿತರಿದ್ದರು.

“ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ತೆರಳುವ ಸಂದರ್ಭದಲ್ಲಿ ಕೆಲವು ಮಹಿಳೆಯರು ನಗುಮೊಗದಲ್ಲಿ ನನ್ನ ಬಳಿ ಬಂದು ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿಯಿಂದ ನಾವು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ, ನೀವು ಶಕ್ತಿ ಯೋಜನೆ ಜಾರಿ ಮಾಡಿದ್ದರಿಂದ ಇಂದು ನಾವು ದೂರದ ಊರಿನಿಂದ ದೇವರ ದರ್ಶನಕ್ಕೆ ಬರಲು ಅನುಕೂಲ ಆಗಿದೆ, ನಿಮಗೆ ಮಂಜುನಾಥ ಸ್ವಾಮಿ ದೀರ್ಘ ಆಯಸ್ಸು, ಆರೋಗ್ಯ ನೀಡಲಿ, ಬಡವರಿಗೆ ಇನ್ನಷ್ಟು ಅನುಕೂಲ ಆಗುವಂತಹ ಕಾರ್ಯಕ್ರಮಗಳು ನಿಮ್ಮಿಂದ ಜಾರಿಯಾಗಲಿ ಎಂದು ಆಶೀರ್ವದಿಸಿದರು” ಎಂದು ಮುಖ್ಯಮಂತ್ರಿಗಳು ಹೇಳಿಕೊಂಡಿದ್ದಾರೆ.

“ಈ ದಿನ ದೇವರ ದರ್ಶನ ಭಾಗ್ಯದ ಜೊತೆಗೆ ಹತ್ತಾರು ತಾಯಂದಿರ ಆಶೀರ್ವಾದ ಪಡೆದ ಧನ್ಯತಾಭಾವ ನನ್ನದು” ಎಂದು ಹೇಳಿದ್ದಾರೆ.

ರಾಜ್ಯ

ಬೆಂಗಳೂರು: ಹೆಗಡೆ ನಗರದ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯಾತ್ರಾರ್ಥಿಗಳನ್ನು ಬೀಳ್ಕೊಟ್ಟ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ.

ಈ ಸಂದರ್ಭದಲ್ಲಿ, ಹಜ್ ಸಚಿವರಾದ ರಹೀಂ ಖಾನ್, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಮುಖಂಡರು ಹಾಗೂ ಶಾಸಕರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಹಜ್ ಇಸ್ಲಾಂ ಧರ್ಮದ ಐದು ಪವಿತ್ರ ಆಚರಣೆಗಳಲ್ಲಿ ಮೆಕ್ಕಾವೂ ಒಂದಾಗಿದೆ. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ. ಯಾತ್ರಾರ್ಥಿಗಳಿಗೆ ಇದು ಅಧ್ಯಾತ್ಮಿಕ ಅನುಭವವಾಗಿದ್ದು, ಇಲ್ಲಿಗೆ ಭೇಟಿ ನೀಡಿದರೆ ಪಾಪಗಳು ಕಳೆದು ಹೋಗಲಿವೆ ಎಂಬ ನಂಬಿಕೆಯನ್ನು ಹೊಂದಿದ್ದಾರೆ. ಮೆಕ್ಕಾಗೆ ಭೇಟಿ ನೀಡುವುದರಿಂದ ದೇವರಿಗೆ ನಾವು ಮತ್ತಷ್ಟು ಹತ್ತಿರ ಆಗುತ್ತೇವೆ ಎಂಬ ಭಾವನೆ ಮುಸ್ಲಿಂ ಶ್ರದ್ಧಾಳುಗಳದ್ದಾಗಿದೆ.

ಹಜ್​​ ಯಾತ್ರೆಯು ಪ್ರಪಂಚದಾದ್ಯಂತದ ಮುಸ್ಲಿಮರನ್ನು ಸೌದಿ ಅರೇಬಿಯಾದ ಮೆಕ್ಕಾಕ್ಕೆ ಭೇಟಿ ನೀಡುವಂತೆ ಮಾಡುತ್ತದೆ. ಮೆಕ್ಕಾಕ್ಕೆ ಭೇಟಿ ನೀಡುವ ಮೂಲಕ ಮುಸ್ಲಿಮರು ಪ್ರವಾದಿ ಮುಹಮ್ಮದ್ ಅವರ ಹೆಜ್ಜೆಗಳನ್ನು ಕಾಣಲು ಬಯಸುತ್ತಾರೆ. ಇಬ್ರಾಹಿಂ ಮತ್ತು ಇಸ್ಮಾಯಿಲ್ ಅಥವಾ ಅಬ್ರಹಾಂ ಮತ್ತು ಇಸ್ಮಾಯಿಲ್ ಅವರ ಪ್ರಯಾಣವನ್ನು ಕಣ್ತುಂಬಿಕೊಳ್ಳಲು ಬಯಸುತ್ತಾರೆ.

ರಾಜ್ಯ

ಬೆಳ್ತಂಗಡಿ (ದಕ್ಷಿಣ ಕನ್ನಡ): ಹಿರಿಯ ನಾಯಕರು, ಮಾಜಿ ಮುಖ್ಯ ಸಚೇತಕರೂ ಆದ ವಸಂತ ಬಂಗೇರ ಅವರ ಉತ್ತರಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮಾತನಾಡಿದರು.

“ನೇರ-ನಿಷ್ಠುರ ನಡೆ ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ. ಸತ್ಯ, ಬಡವರ ಪರ ಕಾಳಜಿ, ರಾಜಿರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡ ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ.” ಎಂದು ಹೇಳಿದರು.

“ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ವಿಶ್ವಮಾನವ ಮೌಲ್ಯವನ್ನು ಪಾಲಿಸಿದರು. ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು. 2023ರ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ.

ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು. ಅವರು ಇಂದು ನಮ್ಮೊಂದಿಗಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿ. ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ ರಾಜಕಾರಣ ಬಡವಾಗಿದೆ. ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ, ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿದ್ದಾರೆ, ಒಬ್ಬ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡ ದುಃಖ ನನ್ನದು.” ಎಂದರು.

ವಸಂತ ಬಂಗೇರ ಅವರು ಮರೆಯಾದರೂ ಅವರು ತಮ್ಮ ಕೆಲಸ ಕಾರ್ಯಗಳ ಮೂಲಕ ಜನಮಾನಸದಲ್ಲಿದ್ದಾರೆ. ಸದಾಕಾಲ ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿ, ಜನರ ಹಿತದ ಬಗ್ಗೆಯೇ ಯೋಚಿಸುತ್ತಿದ್ದ ಬಂಗೇರ ಅವರದು ಅಪರೂಪದ ವ್ಯಕ್ತಿತ್ವ. ನಿಸ್ವಾರ್ಥ ನಾಯಕ ಬಂಗೇರ ಅವರ ನೆನಪಿಗಾಗಿ ಬೆಳ್ತಂಗಡಿ ಬಸ್ಟಾಂಡ್‌ಗೆ ಅವರ ಹೆಸರಿಡಲು ಸರ್ಕಾರ ಸಿದ್ಧವಿದೆ. ಜೊತೆಗೆ ಸರ್ಕಲ್‌ನಲ್ಲಿ ಅವರ ಪ್ರತಿಮೆ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ನಾನು ಮುಕ್ತವಾಗಿದ್ದೇನೆ. ಇದು ಬಂಗೇರ ಅವರ ಜೀವನ ಸಾಧನೆಯನ್ನು ಗೌರವಿಸಲು ನನಗೆ ದೊರೆತ ಅವಕಾಶ ಎಂದು ಭಾವಿಸಿದ್ದೇನೆ.” ಎಂದು ಹೇಳಿದರು.

ರಾಜ್ಯ

ಬೆಂಗಳೂರು: ಸರ್ಕಾರವು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರೊಂದಿಗೆ ಸಂವಾದ ನಡೆಸಿದರು. ಈ ಸಂವಾದದ ಕೆಲವು ಪ್ರಮುಖ ಪ್ರಶ್ನೆಗಳಿಗೆ ಅವರು ನೀಡಿದ ಉತ್ತರವನ್ನು ಮುಖ್ಯಮಂತ್ರಿಗಳು ಪೋಸ್ಟರ್ ಆಗಿ ಬಿಡುಗಡೆ ಮಾಡಿದ್ದಾರೆ. 

ನೇಹಾ ಪ್ರಕರಣದ ಸ್ಥಿತಿಗತಿ?

ಪೆನ್ ಡ್ರೈವ್ ಪ್ರಕರಣದ ಬಗ್ಗೆ ಏನ್ ಹೇಳ್ತೀರಾ?

ಜಾತಿ ಗಣತಿ ಜಾರಿ ಮಾಡುತ್ತೀರಾ?

ಬರ ಪರಿಹಾರಕ್ಕೆ ಕೇಂದ್ರದ ಸ್ಪಂದನೆ ಹೇಗಿತ್ತು?

ಲೋಕಸಭಾ ಚುನಾವಣೆ ಫಲಿತಾಂಶ ಏನಾಗುತ್ತದೆ?

ಪ್ರಧಾನ ಮಂತ್ರಿ ಯಾರಾಗ್ತಾರೆ?

ಎನ್.ಡಿ.ಎ ಮೈತ್ರಿಕೂಟವಲ್ಲವೆ?

ಅಂತೆಯೇ, ನಾಡಿನ ಏಳು ಕೋಟಿ ಕನ್ನಡಿಗರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ ತುಂಬಿದೆ. ಈ ಒಂದು ವರ್ಷದ ಅವಧಿಯಲ್ಲಿ ಪಾರದರ್ಶಕ, ಭ್ರಷ್ಟಾಚಾರ ರಹಿತವಾದ ಜನಪರ ಆಡಳಿತ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡಬೇಕೆಂಬ ಆಶಯ ನಮ್ಮದು, ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲ ಇರಲಿ. ಕಳೆದೊಂದು ವರ್ಷದಿಂದ ನಮ್ಮ ಸರ್ಕಾರಕ್ಕೆ ತಾವು ನೀಡುತ್ತಿರುವ ಸಹಕಾರ, ನಮ್ಮ ಮೇಲಿಟ್ಟಿರುವ ವಿಶ್ವಾಸಕ್ಕೆ ಅನಂತ ಧನ್ಯವಾದಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ

ಬೆಳಗಾವಿ: ಬೆಳಗಾವಿಯಲ್ಲಿ ಇಂದು ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್.ಎಸ್.ಎಸ್ ಹೇಳುತ್ತಿದ್ದು, ಇವರಿಂದ ಸಂವಿಧಾನ ಉಳಿಸಬೇಕಾದ ಅನಿವಾರ್ಯ ಸ್ಥಿತಿ ಇದೆ. ಹಾಗಾಗಿ ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಹೇಳಿದರು.

ಅಂಬೇಡ್ಕರ್ ಅವರು ನೀಡಿರುವ ಭಾರತೀಯ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶ, ಸಮ ಸಮಾಜದ ಗ್ಯಾರಂಟಿ ನೀಡುತ್ತದೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ, ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು.

ರಾಜ್ಯದ ಬಡ ಜನರ ತುತ್ತಿನ ಚೀಲ ತುಂಬಿಸುವ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಪೂರೈಸಲು ಕೋರಿದಾಗ, ಅಕ್ಕಿ ದಾಸ್ತಾನಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಅಕ್ಕಿ ನೀಡಲು ಒಪ್ಪಲಿಲ್ಲ. ಆದ್ದರಿಂದ ನಮ್ಮ ಸರ್ಕಾರ ಅಕ್ಕಿ ಬದಲು ಕೆಜಿಗೆ 34 ರೂ.ನಂತೆ 5 ಕೆ.ಜಿಗೆ 170 ರೂ. ಹಾಗೆ ಜುಲೈ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತಿದೆ ಎಂದು ಹೇಳಿದರು.

ಗೃಹಜ್ಯೋತಿಯನ್ನು ಜುಲೈ ತಿಂಗಳಲ್ಲಿ ಜಾರಿ ಮಾಡಲಾಯಿತು. 1.60 ಕೋಟಿ ಫಲಾನುಭವಿಗಳಿಗೆ ಅಂದರೆ ರಾಜ್ಯದ ಸುಮಾರು 92% ಜನರಿಗೆ ಇದರಿಂದ ಲಾಭವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಮನೆ ಯಜಮಾನಿಯರಿಗೆ ತಲಾ 2,000 ರೂ.ನಂತೆ ಆಗಸ್ಟ್ ತಿಂಗಳಿನಿಂದ ಜಾರಿ ಮಾಡಲಾಯಿತು.

ನಿರುದ್ಯೋಗಿ ಪದವೀಧರರಿಗೆ 2 ವರ್ಷಗಳವರೆಗೆ ತಿಂಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದವರಿಗೆ ತಲಾ 2000 ರೂ. ನೀಡುವ ಯುವನಿಧಿ ಯೋಜನೆಯನ್ನು ವಿವೇಕಾನಂದರ ಜನ್ಮದಿನಾಚರಣೆಯಂದು ಜಾರಿ ಮಾಡಲಾಯಿತು. ಈ ಅವಧಿಯಲ್ಲಿ ಬೇಡಿಕೆಯಿರುವ ತರಬೇತಿಯನ್ನು ಯುವಜನರಿಗೆ ನೀಡಿ, ಅವರಿಗೆ ಉದ್ಯೋಗ ದೊರೆಯಲು ಶಕ್ತಿ ತುಂಬಲಾಗುವುದು.

ಹಿಂದೆಯೂ ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೆವು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ನೀಡಿದ್ದು ಜನರಿಗೆ ವಿಶ್ವಾಸ ಬಂದಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಎಂದು ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು.

ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು. ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಎಂದರು, ಲೋಕಸಭಾ ಚುನಾವಣೆ ತನಕ ಮಾತ್ರ ನೀಡಿ, ನಂತರ ನಿಲ್ಲಿಸುತ್ತಾರೆ ಎಂಬ ಸುಳ್ಳುಗಳನ್ನು ಸೃಷ್ಟಿಸಿದ್ದಾರೆ. ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52,009 ಕೋಟಿ ರೂ.ಗನ್ನು ಇಟ್ಟಿದ್ದೇವೆ. ಅಭಿವೃದ್ಧಿ ಕೆಲಸಗಳಿಗೆ 68 ಸಾವಿರ ಕೋಟಿಗಳನ್ನೂ ಸೇರಿದಂತೆ 2024-25 ರಲ್ಲಿ ಒಟ್ಟು 1.20 ಲಕ್ಷ ಕೋಟಿ ಇಟ್ಟಿದ್ದೇವೆ.

ನಮ್ಮ ಸರ್ಕಾರದ ಬಜೆಟ್ ಗಾತ್ರ 3.71 ಲಕ್ಷ ಕೋಟಿ, ಬೊಮ್ಮಾಯಿಯವರ ಬಜೆಟ್ 23-24ರಲ್ಲಿ 3.09 ಲಕ್ಷ ಕೋಟಿ. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಜನರಿಗೆ ಕಾಂಗ್ರೆಸ್ ನ ಮೇಲೆ ವಿಶ್ವಾಸ ಕಡಿಮೆಯಾಗಲಿ ಎಂದು ಹುನ್ನಾರ ಮಾಡುತ್ತಿದ್ದಾರೆ. ಬಿಜೆಪಿ ಅವರಿಗೆ ಗ್ಯಾರಂಟಿ ಯೋಜನೆಗಳನ್ನು ಕಂಡರೆ ಆಗುವುದಿಲ್ಲ. ಅದನ್ನು ನಿಲ್ಲಿಸಬೇಕೆಂಬುದು ಅವರ ಪಿತೂರಿಯಾಗಿದೆ. ಬಡವರು, ರೈತರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರ ಏಳಿಗೆ ಅವರಿಗೆ ಮುಖ್ಯವಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿ ಅವರು ದೇಶದ ಉದ್ದಗಲಕ್ಕೂ ಪಾದಯಾತ್ರೆ ಹಾಗೂ ನ್ಯಾಯ ಯಾತ್ರೆ ಮಾಡಿದರು. ದೇಶ ವಿಭಜನೆ ಮಾಡಲು ಮೋದಿಯವರು ಮಾಡಿರುವ ಪ್ರಯತ್ನಗಳಿಂದ ಬೇಸತ್ತಿದ್ದ ಜನರ ಒಡೆದ ಮನಸ್ಸನ್ನು ಒಗ್ಗೂಡಿಸಲು ಯಾತ್ರೆ ಕೈಗೊಂಡು ಯಶಸ್ವಿಯಾದರು ಎಂದು ಭಾರತ್ ಜೋಡೋ ಯಾತ್ರೆಗಳನ್ನು ಸಮರ್ಥಿಸಿಕೊಂಡರು.

ಕಾಂಗ್ರೆಸ್ ಪಕ್ಷ ನೀಡಿರುವ 25 ಗ್ಯಾರಂಟಿಗಳಿಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಯವರು ಸಹಿ ಮಾಡಿ ಹಂಚಿದ್ದಾರೆ. ಬಡಕುಟುಂಬದ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಯುವನ್ಯಾಯದಡಿ ಮೊದಲ ಉದ್ಯೋಗದ ಜೊತೆಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಯೋಜನೆ, ರೈತರ ಬೆಳೆಗೆ ನ್ಯಾಯಯುತ ಬೆಲೆ, ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿ ಬೇಡಿಕೆಗಳನ್ನು ಈಡೇರಿಸುವ ‘ರೈತ ನ್ಯಾಯ’ ಯೋಜನೆಗಳ ಭರವಸೆ ನೀಡಿದರು.

ನರೇಂದ್ರ ಮೋದಿ ಅವರು ರೈತರ ಸಾಲ ಮನ್ನಾ ಮಾಡಲಿಲ್ಲ. ಸ್ವಾಮಿನಾಥನ್ ವರದಿ ಜಾರಿ ಮಾಡಲಿಲ್ಲ. ಆದರೆ ಅಂಬಾನಿ, ಅದಾನಿಗಳಿಗೆ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ರೈತರ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮಿಷನ್ ಇಲ್ಲ ಎಂದು ಬಿಜೆಪಿಯವರು ಹೇಳುತ್ತಾರೆ. ಸಂಸದ ತೇಜಸ್ವಿ ಸೂರ್ಯ, ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ಒಳಿತಲ್ಲ ಎಂದಿದ್ದಾರೆ. ರೈತರ ಸಾಲ ಮನ್ನಾ ಮಾಡಬಾರದೆಂಬುದು ಬಿಜೆಪಿ ಅವರ ಹಿಡೆನ್ ಅಜೆಂಡಾ ಎಂದು ಕಿಡಿಕಾರಿದರು.

ಅವಕಾಶ ವಂಚಿತರಿಗೆ ನ್ಯಾಯ ನೀಡಲು, ಸರ್ಕಾರದ ಅನುಕೂಲ ದೊರಕಿಸಿಕೊಡಲು ಜಾತಿಗಣತಿ ಅತಿ ಮುಖ್ಯ. ಪಾಲುದಾರಿಕೆ ನ್ಯಾಯ, ಶ್ರಮಿಕ ನ್ಯಾಯ ಯೋಜನೆ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ. ಹೀಗೆ ದೇಶಾದ್ಯಂತ ಜಾರಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತದೆ. ಆದರೆ ರಾಜ್ಯಕ್ಕೆ 100 ರೂ.ಗೆ ಕೇವಲ 13 ರೂ. ಮರಳಿ ಬರುತ್ತಿದೆ. 11,495 ಕೋಟಿ ರೂ.ಗಳನ್ನು 15ನೇ ಹಣಕಾಸು ಆಯೋಗ ನಿರ್ಧರಿಸಿತ್ತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಲು ತಿಳಿಸಿದ್ದರೂ ಅವರು ಮಾಡಲಿಲ್ಲ. ರಾಜ್ಯಕ್ಕಾಗಿರುವ ಇಷ್ಟೆಲ್ಲಾ ಅನ್ಯಾಯವನ್ನು ರಾಜ್ಯದ 25 ಸಂಸದರಲ್ಲಿ ಯಾರೊಬ್ಬರೂ ಧ್ವನಿ ಎತ್ತಲಿಲ್ಲ. ಮೋದಿಯವರ ಎದುರು ನಿಂತು ಮಾತನಾಡಲು ಹೆದರುತ್ತಾರೆ. ಆದರೆ ಡಿ.ಕೆ.ಸುರೇಶ್ ಮಾತ್ರ ಪ್ರಶ್ನಿಸಿದ್ದರು.

ರಾಜ್ಯದ ಬಹುತೇಕ ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 23 ರಂದು ಬರಪರಿಹಾರಕ್ಕೆ ಮನವಿ ಮಾಡಲಾಗಿದೆ. ರೂ.18,172 ಕೋಟಿ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಕೇಳಿದೆವು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಾಶವಾಗಿದೆ. ಕೇಂದ್ರ ತಂಡ ಬರಪರಿಹಾರ ಅಧ್ಯಯನ ಮಾಡಿದ್ದಾರೆ. ರಾಜ್ಯದ ಮಂತ್ರಿಗಳು, ನಾನು ಕೇಂದ್ರ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕೋರಿದರೂ ಮನ್ನಣೆ ಸಿಗಲಿಲ್ಲ. ಆದ್ದರಿಂದ ಮನವಿ ಸಲ್ಲಿಸಿದ 7 ತಿಂಗಳ ನಂತರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆವು. ಸುಪ್ರೀಂ ಕೋರ್ಟ್ ಚಾಟಿ ಬೀಸುವ ತನಕ ಒಂದು ರೂ. ಕೊಡಲಿಲ್ಲ. ರೂ.3,454 ಕೋಟಿ ನಂತರ ಕೊಟ್ಟರು.

ರಾಜ್ಯದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಬದಲಿಸಲು ಅವಕಾಶ ಸಿಕ್ಕಿದೆ. ಕರ್ನಾಟಕಕ್ಕೆ ಮೋದಿಯವರು ಕೇವಲ ಚೊಂಬು ನೀಡಿದ್ದಾರೆ. ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜನರು ತಮ್ಮ ಮತಗಳ ಮೂಲಕ ಛಾಟಿ ಬೀಸುತ್ತಾರೆ. ಈ ಬಾರಿ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಿಂದ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕ ಪಾಠ ಕಲಿಸಬೇಕು ಎಂದು ರಾಜ್ಯದ ಜನರಿಗೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ರಾಜಕೀಯ

ಬೆಳಗಾವಿ: ಗೋಕಾಕ್ ಪಟ್ಟಣದಲ್ಲಿಂದು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್ ಪರ ನಿರೀಕ್ಷೆಗೂ ಮೀರಿ ಜನಬೆಂಬಲ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ಪ್ರತಿ ಮನೆಯನ್ನು ತಲುಪಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014 ಹಾಗೂ 2019ರಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಇದು ಈ ಚುನಾವಣೆಯ ಟ್ರಂಪ್ ಕಾರ್ಡ್ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರ ಹಿಂಸಾಚಾರದ ಬಗ್ಗೆ ತುಟಿ ಬಿಚ್ಚಿದ್ದಾರ? ಕೇಂದ್ರ ಬಿಜೆಪಿ ಸರ್ಕಾರ ಏನು ಕ್ರಮ ಕೈಗೊಂಡಿದೆ? ಅಮಿತ್ ಶಾ ಗೃಹ ಸಚಿವರಾಗಿ ವಿಫಲವಾದಂತೆ ಅಲ್ವಾ? ಮಣಿಪುರ ಹಿಂಸಾಚಾರಕ್ಕೆ ಮೋದಿ ಹೊಣೆಯಲ್ಲವೇ? ಎಂದು ಪ್ರಶ್ನಿಸಿದರು.

30 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ಮುಸ್ಲಿಮರ 4% ಮೀಸಲಾತಿಯನ್ನು ರದ್ದು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯ ಸುಪ್ರೀಂ ಕೋರ್ಟ್ ಗೆ ಹೋದಾಗ, 4% ಮೀಸಲಾತಿಯನ್ನು ಮುಂದುವರೆಸುವುದಾಗಿ ಅವರೇ ಮುಚ್ಚಳಿಕೆಯನ್ನು ಬರೆದುಕೊಟ್ಟಿದ್ದಾರೆ ಎಂದು ಹೇಳಿದರು.  

ಕೇವಲ ರಾಜಕಾರಣಕ್ಕಾಗಿ ಹಾಗೂ ಮತಗಳಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾವನಾತ್ಮಕ ವಿಚಾರಗಳಿಗೆ ಸಂಬಂಧಿಸಿದ ಸುಳ್ಳು ಹೇಳುತ್ತಾರೆ. ಕಾಂಗ್ರೆಸ್ ಪಕ್ಷ ಕಳೆದ ಐದು ದಶಕಗಳಿಂದ ದೇಶದಲ್ಲಿ ಅಧಿಕಾರದಲ್ಲಿತ್ತು, ಎಂದಾದರೂ ಮಹಿಳೆಯರ ತಾಳಿಗಳನ್ನು ಕಸಿದುಕೊಂಡಿದ್ದಾರಾ? ದೇಶದ ಜವಾಬ್ದಾರಿಯುತ ಪ್ರಧಾನಿಯಾಗಿ ಇಂತಹ ಹೇಳಿಕೆಗಳನ್ನು ನೀಡಲು ಕಾರಣ ಅವರ ಸಾಧನೆಶೂನ್ಯ ಆಡಳಿತ. ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ ಎಂದರೆ ನೀವೇ ಯೋಚಿಸಿ ಎಂದು ಕಿಡಿಕಾರಿದರು.

Uncategorized

ಬೆಳಗಾವಿ: ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯೇತರ ಪಕ್ಷಗಳು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಎಂದಿಗೂ ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡದೇ, ಸಾಮಾಜಿಕ ನ್ಯಾಯದ ಪರವಾಗಿದೆ ಎನ್ನುವುದು ಇಡೀ ವಿಶ್ವಕ್ಕೆ ಗೊತ್ತಿದೆ. ಮೋದಿಯವರ ಮಾತು ನಂಬಲು ಜನ ಮೂರ್ಖರಲ್ಲ ಎಂದು ಹೇಳಿದರು.

ನಾವು ಸರ್ಕಾರಿ ನೌಕರರ ಸಂಬಳವನ್ನು ಎಂದಿಗೂ ನಿಲ್ಲಿಸಿಲ್ಲ. ಅಭಿವೃದ್ಧಿ ಜೊತೆಗೆ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿಗಳಿಗೆ ರೂ.52,009 ಕೋಟಿ, ರೂ.1,20,000 ಕೋಟಿ ಅಭಿವೃದ್ಧಿಗೆ ನೀಡಲಾಗಿದೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಗ್ಯಾರಂಟಿಗಳನ್ನು ಜನರಿಗೆ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಸಂಬಳ ಕೊಡಲು ದುಡ್ಡಿಲ್ಲ. ಕರ್ನಾಟಕ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದು ಅಪ್ಪಟ ಸುಳ್ಳು ಎಂದು ಹೇಳಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಗಳನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು. 25 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಸಾಮಾಜಿಕ ನ್ಯಾಯ ತರಲು ದೇಶದಾದ್ಯಂತ ಜಾತಿ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು. ಆದ್ದರಿಂದ ಜನರಿಗೆ ಅನುಕೂಲ ಮಾಡಿಕೊಡುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೇ? ಅಥವಾ ಸುಳ್ಳು ಹೇಳುವ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರಬೇಕೇ? ಎಂಬುದನ್ನು ಯೋಚಿಸಿ ನಿರ್ಧರಿಸಿ ಎಂದು ಹೇಳಿದರು.

ಚುನಾವಣೆಯ ಮೂಲಕ ಜನತೆ ಕೊಡುವ ತೀರ್ಪು ದೇಶದ ಭವಿಷ್ಯವನ್ನು ರೂಪಿಸಲಿದೆ. ಯಾವ ಪಕ್ಷ ಅಧಿಕಾರದಲಿದ್ದರೆ ಈ ದೇಶದ ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ಅಭಿವೃದ್ಧಿಯಾಗುತ್ತದೆ? ದೇಶದ ಸರ್ವತೋಮುಖ ಅಭಿವೃದ್ಧಿಗೆ ಯಾರು ಅಧಿಕಾರದಲ್ಲಿರಬೇಕೆಂದು ಜನರು ತೀರ್ಮಾನ ಮಾಡಬೇಕಾಗುತ್ತದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡಿ ದೇಶದ ರೈತರ ಸಾಲ ಮನ್ನಾ ಮಾಡಿದ್ದರು. ಅವರು ಈ ದೇಶದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆಯನ್ನು, ಉದ್ಯೋಗ ಖಾತ್ರಿ ಅಧಿನಿಯಮ, ಮಾಹಿತಿ ಹಕ್ಕು ಅಧಿನಿಯಮ, ಶಿಕ್ಷಣದ ಹಕ್ಕು ಇವುಗಳನ್ನು ಜಾರಿಗೆ ತಂದವರು ಮನಮೋಹನ್ ಸಿಂಗ್ ಅವರು. ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸುವ ಕಾನೂನುಗಳು ಇವು ಎಂದು ಅರ್ಥ ಮಡಿಕೊಳ್ಳಬೇಕು. ಆಹಾರ ಭದ್ರತಾ ಕಾಯ್ದೆ ಇಲ್ಲದೇ ಹೋಗಿದ್ದರೆ ಬಡವರಿಗೆ ಉಚಿತ ಅಕ್ಕಿ ಕೊಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಜಾರಿ ಮಾಡಿದ್ದು ನರೇಂದ್ರ ಮೋದಿ ಅಲ್ಲ. ಅದರ ಶ್ರೇಯಸನ್ನು ಪಡೆಯಲು ಮೋದಿ ಅವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯ

ಬೆಂಗಳೂರು: ಬರಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ  ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ ಎಂದು ಹೇಳಿದ್ದಾರೆ.

“ಬರ ಪರಿಹಾರಕ್ಕಾಗಿ ಅವರು (ಕರ್ನಾಟಕ) ನಮ್ಮನ್ನು (ಕೇಂದ್ರ ಸರ್ಕಾರ)ವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟೀಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ” ಎಂದು ಅಡ್ವೋಕೇಟ್ ಜನರಲ್ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ.

ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು. ನಮ್ಮ ಉಪಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದರು ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಬಿಜೆಪಿ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ.

ಬರಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ಜನರ ಬದುಕಿಗೆ ಸಂಬಂಧಿಸಿದ ನಿರುದ್ಯೋಗ, ಬಡತನ, ಬೆಲೆಯೇರಿಕೆ, ಬರಪೀಡಿತರಿಗೆ ನೆರವು ಈ ಯಾವ ಪ್ರಶ್ನೆಗಳಿಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಉತ್ತರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಒಂದಷ್ಟು ಹೊಸ ಸುಳ್ಳುಗಳು ಮತ್ತು ಭಾವನಾತ್ಮಕ ವಿಚಾರಗಳು ಬಿಟ್ಟರೆ ಮೋದಿಯವರ ಬತ್ತಳಿಕೆಯಲ್ಲಿ ಯಾವ ಬಾಣಗಳೂ ಉಳಿದಿಲ್ಲ, ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿ ಎಂಬುದು ಮೋದಿಯವರ ಆಡಳಿತದ ಹತ್ತಿರವೂ ಸುಳಿದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಕಾಲದ ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಿದ್ದು, ಭಾರತದ ಭೂಭಾಗವನ್ನು ಚೀನಾಗೆ ಬಿಟ್ಟುಕೊಟ್ಟು ತಣ್ಣಗೆ ಕೂತಿದ್ದು, ಐಟಿ, ಇಡಿ ಮೂಲಕ ಬೆದರಿಸಿ ಉದ್ಯಮಿಗಳು, ಭ್ರಷ್ಟರಿಂದ ಸುಲಿಗೆ ಮಾಡಿದ್ದು, ನಾಲ್ಕಾರು ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿ ಸರ್ಕಾರ ಬೀಳಿಸಿದ್ದು ಹೀಗೆ ಮೋದಿಯವರ ದುರಾಡಳಿತದ ಪಟ್ಟಿ ಮಾಡುತ್ತಾ ಹೋದರೆ ಅದಕ್ಕೆ ಕೊನೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಬಿಜೆಪಿ ಗೆಲ್ಲಬಹುದಾದ ಸ್ಥಾನಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಲಿದೆ; ಹಾಗಾಗಿ “ಇಂಡಿಯಾ” ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಇದೆ. ಆದರೆ, ಯಾರೇ ಅಧಿಕಾರಕ್ಕೆ ಬಂದರೂ ಕೊಟ್ಟ ಭರವಸೆಗಳನ್ನು ಈಡೇರಿಸಬೇಕು; ಮರೆಯಬಾರದು.

ಅಖಿಲ ಕಾಂಗ್ರೆಸ್ ಸಮಿತಿಯು ಚುನಾವಣಾ ಭರವಸೆಗಳನ್ನು ಸಿದ್ಧಪಡಿಸಲು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ದೇಶದೆಲ್ಲೆಡೆ ಸಂಚರಿಸಿ ಹಲವರಿಂದ ಸಲಹೆ ಪಡೆಯಲಾಯಿತು. ವೆಬ್‌ಸೈಟ್ ಮೂಲಕವೂ ಪ್ರತಿಕ್ರಿಯೆಗಳನ್ನು ಪಡೆಯಲಾಯಿತು. ಅದರ ಆಧಾರದ ಮೇಲೆ ಭರವಸೆಗಳನ್ನು ಸಿದ್ಧಪಡಿಸಿ ಮೊನ್ನೆ ಪ್ರಕಟಿಸಲಾಯಿತು.

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಆಗ ಮಾತನಾಡಿದ ಪಿ.ಚಿದಂಬರಂ, “ಕಳೆದ 10 ವರ್ಷಗಳಲ್ಲಿ ಯಾರನೆಲ್ಲ ಹೊರಗಿಡಲಾಯಿತೋ ಅಂತಹವರಿಗೆಲ್ಲ ನ್ಯಾಯ ಕೊಡಿಸಲು ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ” ಎಂದರು.

ಪ್ರಣಾಳಿಕೆಯಲ್ಲಿ, ದೇಶಾದ್ಯಂತ ಸಾಮಾಜಿಕ-ಆರ್ಥಿಕ ಮತ್ತು ಜಾತಿವಾರು ಸಮೀಕ್ಷೆ ನಡೆಸಲಾಗುವುದು. ರಾಜ್ಯ ಸರ್ಕಾರಗಳು ಬಯಸಿದಲ್ಲಿ NEET, CUET ನಂತಹ ಪರೀಕ್ಷೆಗಳನ್ನು ನಡೆಸಿಕೊಳ್ಳಬಹುದು. ಪ್ರತಿ ಕುಟುಂಬದಲ್ಲಿ ಒಬ್ಬ ಮಹಿಳೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ ನೀಡಲಾಗುವುದು. ಎಲ್ಲ ಜಾತಿಗಳಿಗೂ ಶೇ.10ರಷ್ಟು ಮೀಸಲಾತಿಯನ್ನು ವಿಸ್ತರಿಸಲಾಗುವುದು. ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರಲಾಗುವುದು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಿದ ನಂತರವೇ ಜಾರಿಗೆ ತರಲಾಗುವುದು. 12ನೇ ತರಗತಿವರೆಗೆ ಕಡ್ಡಾಯ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು. ಒಂದು ದೇಶ, ಒಂದು ಚುನಾವಣಾ ವ್ಯವಸ್ಥೆಯನ್ನು ತರುವುದಿಲ್ಲ. ಚುನಾವಣಾ ಪತ್ರಗಳ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು. ಎಂ.ಎಸ್.ಸ್ವಾಮಿನಾಥನ್ ಅವರ ಶಿಫಾರಸ್ಸು ಜಾರಿಗೆ ತರಲಾಗುವುದು. ಸರ್ಕಾರಿ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಮನ್ನಾ ಮಾಡಲಾಗುವುದು.

ಪಾಂಡಿಚೇರಿಗೆ ರಾಜ್ಯ ಸ್ಥಾನಮಾನ ನೀಡಲಾಗುವುದು. ಮಾಧ್ಯಮ ಸ್ವಾತಂತ್ರ್ಯವನ್ನು ಮರುಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. 10 ವರ್ಷಗಳಲ್ಲಿ ಯಾವುದೇ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಬಿಜೆಪಿ ಜಾರಿಗೊಳಿಸಿದ ಕಾನೂನುಗಳನ್ನು ವಿಶ್ಲೇಷಿಸಿ ಬದಲಾವಣೆಗಳನ್ನು ಮಾಡಲಾಗುವುದು. ನೋಟು ಅಮಾನ್ಯೀಕರಣ, ರಫೇಲ್ ಡೀಲ್, ಪೆಗಾಸಸ್ ಬೇಹುಗಾರಿಕೆ, ಚುನಾವಣಾ ಬಾಂಡ್ ಯೋಜನೆ ಕುರಿತು ತನಿಖೆ ನಡೆಸಲಾಗುವುದು. ಬಿಜೆಪಿ ಸೇರುವ ಮೂಲಕ ಕ್ರಿಮಿನಲ್ ಪ್ರಕರಣಗಳಿಂದ ಪಾರಾದವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲಾಗುವುದು.

ಜನರ ಆಹಾರ, ಉಡುಗೆ, ಪ್ರೇಮ ವಿವಾಹ ಮತ್ತು ಭಾರತದ ಯಾವುದೇ ಭಾಗದಲ್ಲಿ ಪ್ರಯಾಣ ಬೆಳಸಿ ವಾಸಿಸುವಂತಹ ಜನರ ವೈಯಕ್ತಿಕ ಸ್ವಾತಂತ್ರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಸೇನಾ ನೇಮಕಾತಿಗಾಗಿ ‘ಅಗ್ನಿಪತ್’ ಯೋಜನೆಯನ್ನು ರದ್ದುಗೊಳಿಸಲಾಗುವುದು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ನೀಡಲಾಗುವ ವೇತನವನ್ನು ರೂ.400ಕ್ಕೆ ಹೆಚ್ಚಿಸಲಾಗುವುದು. ಚೀನಾ ಆಕ್ರಮಿಸಿಕೊಂಡಿರುವ ನಮ್ಮ ನೆಲದ ಭಾಗವನ್ನು ಪುನಃಸ್ಥಾಪಿಸಲು ಕ್ರಮ. ಜಮ್ಮು ಮತ್ತು ಕಾಶ್ಮೀರಕ್ಕೆ ತಕ್ಷಣವೇ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡಲಾಗುವುದು. ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು.

ಕಳೆದೆರಡು ಚುನಾವಣೆಗಳಲ್ಲಿ ಸೋತಿರುವ ಕಾಂಗ್ರೆಸ್‌ಗೆ ಈ ಭರವಸೆಗಳು ಫಲ ನೀಡುತ್ತವೆಯೇ?
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಬಯಸಿರುವ ರಾಜ್ಯಗಳಲ್ಲಿ ಮಾತ್ರ ನೀಟ್ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದೆ. ಇದು ದೇಶಾದ್ಯಂತ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ದಕ್ಷಿಣದ ರಾಜ್ಯಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಉತ್ತರ ಭಾರತದಲ್ಲಿ ಹಾಗಲ್ಲ; ಶಾಲೆಗಳಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಕೂಡ ಅಕ್ರಮ ನಡೆಸಲಾಗುತ್ತದೆ. ಇದನ್ನು ಸಾಕ್ಷರ ಕುಟುಂಬಗಳು ಸ್ವಾಗತಿಸಿವೆ. ಜನರ ಆಹಾರ, ಉಡುಗೆ, ಪ್ರೇಮ ವಿವಾಹ ಮತ್ತು ಭಾರತದ ಯಾವುದೇ ಭಾಗದಲ್ಲಿ ಪ್ರಯಾಣ ಬೆಳಸಿ ವಾಸಿಸುವಂತಹ ಜನರ ವೈಯಕ್ತಿಕ ಸ್ವಾತಂತ್ರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಹಾಗಾಗಿ ಇದು ಎಲ್ಲಾ ವರ್ಗದ ಜನರನ್ನು ಆಕರ್ಷಿಸಲಿದೆ. ಅದೇ ರೀತಿ ಒಂದು ಭಾಷಾ ನೀತಿಯನ್ನು ಜಾರಿಗೆ ತರಲು ಬಿಜೆಪಿ ಯೋಜಿಸಿದೆ. ಅದನ್ನು ತಡೆಯಲಿಕ್ಕಾಗಿ ಒಂದು ದೇಶ ಒಂದು ಚುನಾವಣೆಯನ್ನು ತರುವುದಿಲ್ಲ ಎಂದು ಹೇಳಲಾಗಿದೆ. ಕರ್ನಾಟಕದಂತಹ ರಾಜ್ಯಗಳಿಂದ ಹೆಚ್ಚಿನ ಯುವಕರು ಸೇನೆಗೆ ಸೇರುತ್ತಿದ್ದರು. ಅವರನ್ನು ತಡೆಯಲಿಕ್ಕಾಗಿಯೇ ‘ಅಗ್ನಿಪತ್’ ಯೋಜನೆಯನ್ನು ಜಾರಿಗೆ ತರಲಾಯಿತು.

ಅದನ್ನು ರದ್ದುಪಡಿಸುವುದಾಗಿ ಹೇಳಿರುವುದು ಸ್ವಾಗತಾರ್ಹ. ಒಂದು ತಿಂಗಳ ಹಿಂದೆ ಪ್ರಕಟವಾದ ಸಮೀಕ್ಷೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ಹೇಳಲಾಗಿತ್ತು. ಆಗ ಕಾಂಗ್ರೆಸ್ ಬ್ಯಾಂಕ್ ಖಾತೆ ಸ್ಥಗಿತ, ಕೇಜ್ರಿವಾಲ್ ಬಂಧನದಂತಹ ಸಮಸ್ಯೆಗಳಿರಲಿಲ್ಲ. ಹಾಗಾಗಿ ಈಗ ಬಿಜೆಪಿ ಗೆಲ್ಲಬಹುದಾದ ಸ್ಥಾನಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಲಿದೆ; ಹಾಗಾಗಿ “ಇಂಡಿಯಾ” ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಇದೆ. ಆದರೆ ಯಾರೇ ಅಧಿಕಾರಕ್ಕೆ ಬಂದರೂ ಕೊಟ್ಟ ಭರವಸೆಗಳನ್ನು ಈಡೇರಿಸಬೇಕು; ಮರೆಯಬಾರದು.