ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಹೆಚ್.ಡಿ.ದೇವೇಗೌಡ Archives » Dynamic Leader
November 23, 2024
Home Posts tagged ಹೆಚ್.ಡಿ.ದೇವೇಗೌಡ
ರಾಜಕೀಯ

ಬೆಂಗಳೂರು: 2024ರ ಸಂಸತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸಿ ಗೆದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾಸ್ವಾಮಿ, 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಸಿಕೊಂಡ ನರೇಂದ್ರ ಮೋದಿ ಸರ್ಕಾರದಲ್ಲಿ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಅವರನ್ನು ಜೆಡಿಎಸ್ ಕಾರ್ಯಕರ್ತರು, ವಿಮಾನ ನಿಲ್ದಾಣದ ಬಳಿ ಅತ್ಯಂತ ಪ್ರೀತಿಯಿಂದ ಬರ ಮಾಡಿಕೊಂಡರು.

ಅದೇ ರೀತಿ ಕೇಂದ್ರ ಸರಕಾರದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನಕ್ಕೆ ಭೇಟಿ ನೀಡಿದ ಕುಮಾರಸ್ವಾಮಿಯನ್ನು ಪಕ್ಷದ ನಾಯಕರು, ಕಾರ್ಯಕರ್ತರು ವಿಶೇಷ ಅದರಾಭಿಮಾನದಿಂದ ಬರಮಾಡಿಕೊಂಡರು.

ಈ ಬಗ್ಗೆ ತಮ್ಮ ಎಕ್ಸ್ ಜಾಲತಾಣದಲ್ಲಿ, “ಎಲ್ಲರ ವಿಶ್ವಾಸ, ಅಭಿಮಾನಕ್ಕೆ ನಾನು ಋಣಿ. ಮುಖ್ಯವಾಗಿ ಈ ಅವಿಸ್ಮರಣೀಯ ಕ್ಷಣಗಳಿಗೆ ನೇರ ಕಾರಣರಾದ ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ, ಸಮಸ್ತ ಕನ್ನಡಿಗರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.

ಕೇಂದ್ರ ಸರಕಾರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ರಾಜಭವನಕ್ಕೆ ತೆರಳಿ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದರು.

ಕೇಂದ್ರ ಸಚಿವರಾದ ಮೇಲೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿಯಾದ ತಂದೆ ಹೆಚ್.ಡಿ.ದೇವೇಗೌಡರನ್ನು ಮತ್ತು ತಾಯಿಯನ್ನು ಅವರ ಸ್ವಗೃಹದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ರಾಜಕೀಯ

ಬೆಂಗಳೂರು: ಹಾಸನದ  ಸಂಸದ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಿಂದ ರಾಜ್ಯವು ದೇಶದ ಮುಂದೆ ತಲೆತಗ್ಗಿಸುವಂತೆ ಮಾಡಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯ ಅಧ್ಯಕ್ಷ ಅಡ್ವೊಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಇಂತಹ ವಿಕೃತಿ ಹೊಂದಿರುವವ ಜನ ಪ್ರತಿನಿಧಿಯಾಗಿರುವುದು ಸಂಸತ್ತಿನ ಇತಿಹಾಸಕ್ಕೆ ಕಪ್ಪು ಚುಕ್ಕೆ. ನೈತಿಕ ಅ ಅಧಃಪತನದ ಪರಮಾವಧಿಯಿದು. ಇಂತಹ ಜನಪ್ರತಿನಿಧಿಯಿಂದ ಸಮಾಜ ದೇಶ ಹೇಗೆ ಉದ್ದಾರವಾದೀತು?

ಹಿಂದೂ ಹೆಣ್ಣು ಮಕ್ಕಳ ವಕ್ತಾರರಂತೆ ಪೋಸು ಕೊಟ್ಟು ಮಾಧ್ಯಮಗಳ ಮುಂದೆ ನಾಲಗೆ ಹರಿಯ ಬಿಡುವ ಬಿಜೆಪಿಯ ವಾಕ್ಚತುರ ಹೋರಾಟಗಾರರು ಏಕೆ ಮೌನವಾಗಿದ್ದಾರೆ? ಅಲ್ಪಸಂಖ್ಯಾತ ವರ್ಗದ ಯುವಕರಿಂದ ಲೈಂಗಿಕ ಅಪರಾಧ ನಡೆದರೆ ಮಾತ್ರ ಹೋರಾಟವೇ? ಈ ಸಂತ್ರಸ್ತ ಹೆಣ್ಮಕ್ಕಳ ಪರ ಹೋರಾಡದೆ ಏಕೆ ಇವರೆಲ್ಲ ತೆಪ್ಪಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಂತ್ರಸ್ತ ಮಹಿಳೆಯರು ಪ್ರಜ್ವಲ್ ಜೊತೆಗೆ ಅವರ ತಂದೆ ಮಾಜಿ ಸಚಿವ ಹೆಚ್.ಡಿ.ರೇವಣ್ಣನವರ ಮೇಲೆಯೂ ಆರೋಪ ಹೊರಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಬುಗಿಲೆದ್ದ ಪ್ರತಿಭಟನೆಗಳಿಂದ ಪಾರಾಗಲು ಕಾಟಾಚಾರದ ತನಿಖೆ ಆಗಬಾರದು. ಯಾಕೆಂದರೆ ಇಂತಹ ತನಿಖೆಗಳು ದಡ ಸೇರಿದ್ದು ವಿರಳ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಹಣದಿಂದ ಗ್ರಾಮೀಣ ಹೆಣ್ಣು ಮಕ್ಕಳು ಅಡ್ಡ ದಾರಿ ಹಿಡಿಯುತ್ತಾರೆಂಬ ಅರ್ಥದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೊದಲು ತಮ್ಮ ಪರಿವಾರದ ಕಡೆಗೆ ತಿರುಗಿ ನೋಡಲಿ. ನಂತರ  ಬಡ ಹೆಣ್ಣುಮಕ್ಕಳ ಬಗ್ಗೆ ಮಾತನಾಡಲಿ ಎಂದು ವ್ಯಂಗ್ಯವಾಡಿದ್ದಾರೆ.

ಹೆಣ್ಮಕ್ಕಳ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸತ್ಯಾಸತ್ಯತೆ ಹೊರ ಬರಲೇಬೇಕು. ತಪ್ಪು ಮಾಡಿ ದೇಶ ಬಿಟ್ಟು ವಿದೇಶಕ್ಕೆ ಪಲಾಯನ ಮಾಡುವುದು ಇಂದು ಸಾಮಾನ್ಯವಾಗಿದೆ. ಈ ವಿದೇಶ ಪಲಾಯನದಲ್ಲಿ ಯಾರದ್ದಾದರೂ ಪ್ರಭಾವ ಇದೆಯೇ ಎಂಬ ಕುರಿತೂ ತನಿಖೆ ಆಗಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ದೇಶ

ನವದೆಹಲಿ: ದೇವೇಗೌಡರ ಪುತ್ರನ ಅಶ್ಲೀಲ ವಿಡಿಯೋ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಗಾಂಧಿ ಪ್ರಶ್ನೆ ಎತ್ತಿದ್ದಾರೆ.

ಜಾತ್ಯತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ದೇವೇಗೌಡರ ಹಿರಿಯ ಮಗ ರೇವಣ್ಣ, ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವೀಡಿಯೋ ಪ್ರಕರಣ ರೂಪ ಪಡೆದುಕೊಂಡಿದೆ. ವಿಚಾರಣೆಗೆ ಹೆದರಿ ಅವರು ಜರ್ಮನಿಗೆ ಪಲಾಯನ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಕರ್ನಾಟಕ ಸರ್ಕಾರ ವಿಶೇಷ ತನಿಖಾ ಸಮಿತಿ (SIT) ಯನ್ನು ರಚಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಿಯಾಂಕಾ ಪ್ರಕಟಿಸಿರುವ ಪೋಸ್ಟ್‌ನಲ್ಲಿ, “10 ದಿನಗಳ ಹಿಂದೆ ಪ್ರಧಾನಿ ಕೈಕುಲುಕಿ, ಭುಜ ತಟ್ಟಿ ಕರ್ನಾಟಕ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಈಗ ದೇಶ ಬಿಟ್ಟು ತಲೆಮರೆಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಬದುಕನ್ನು ಹಾಳು ಮಾಡಿದ್ದಾರೆ.

ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಮಾಡಿದ ಅಪರಾಧಗಳನ್ನು ಕೇಳಿದರೆ ಹೃದಯ ಕಂಪಿಸುತ್ತದೆ. ಈ ಬಗ್ಗೆ ಪ್ರಧಾನಿ ಮೋದಿ ಬಾಯಿ ತೆರೆಯುತ್ತಾರಾ? ಪ್ರಧಾನಿ ಮೋದಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿರುವುದು ಏಕೆ? ಎಂದು ಪ್ರಧಾನಿ ಮೋದಿಯನ್ನು ಪ್ರಿಯಾಂಕಾ ವಾದ್ರಾ ಗಾಂಧಿ ಪ್ರಶ್ನಿಸಿದ್ದಾರೆ.

ರಾಜಕೀಯ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಸಂಸತ್ತಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಹೇಳಿದರು.

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು, ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ, ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ನಮ್ಮ ನಾಡಿಗೆ ಪ್ರವಾಹ ಬಂದಾಗ ನರೇಂದ್ರ ಮೋದಿ ಬರಲಿಲ್ಲ; ಬರಗಾಲ ಬಂದಾಗಲೂ ಮೋದಿ ಬರಲಿಲ್ಲ. ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ; ಚುನಾವಣೆ ಬಂತು ನೋಡಿ – ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ ಎಂದು ವ್ಯಂಗ್ಯವಾಡಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ.

ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ. ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್ ನವರು, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದು ಪುನರುಚ್ಚಿಸಿದರು.

ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಬೇಕು. ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ ಎಂದು ಸವಾಲೆಸದರು.

ಪಶು ಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್,‌ ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಮತ್ತು ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರುಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರು ಹಾಗೂ ಬ್ಲಾಕ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಾರೋಗ್ಯದ ಕಾರಣದಿಂದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಜರಾಗುತ್ತಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದರ ಬಗ್ಗೆ ಜೆಡಿಎಸ್ ಕಛೇರಿಯಿಂದ ಹೊರಡಿಸಲಾಗಿರುವ ಮಾನ್ಯ ಮಾಜಿ ಪ್ರಧಾನಮಂತ್ರಿಗಳ ಮಾಧ್ಯಮ ಹೇಳಿಕೆಯಲ್ಲಿ,  “ಕನ್ನಡನಾಡಿನ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ ನನಗಾಗಿ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಾರೋಗ್ಯದ ಕಾರಣಕ್ಕೆ ಹಾಜರಾಗುತ್ತಿಲ್ಲದಿರುವುದಕ್ಕೆ ವೈಯಕ್ತಿಕವಾಗಿ ನನಗೆ ಬಹಳ ನೋವಿದೆ.

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ಕೊಂಚ ಮಟ್ಟಿಗೆ ಅನಾರೋಗ್ಯ ಉಂಟಾಗಿ ದೇಹದಲ್ಲಿ ತುಸು ನಿತ್ರಾಣವಿದೆ. ವೈದ್ಯರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ಸಲಹೆ ಮಾಡಿದ್ದಾರೆ.

ಆದರೆ, ಈ ಕಾರ್ಯಕ್ರಮ ಪೂರ್ವ ನಿಗದಿಯಾಗಿರುವ ಕಾರಣಕ್ಕೆ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಂ.ಎನ್.ವೆಂಕಟಾಚಲಯ್ಯ ರವರು ಹಾಗೂ ಪರಿಷತ್ ಅಧ್ಯಕ್ಷರು, ನಾಡೋಜ ಡಾ.ಮಹೇಶ್ ಜೋಶಿ ಅವರು ನನ್ನ ಸ್ವಗೃಹಕ್ಕೆ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ಇವರ ಪ್ರೀತಿ, ವಿಶ್ವಾಸಕ್ಕೆ ನಾನು ಕೃತಜ್ಞನಾಗಿದ್ದೇನೆ.

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸುವುದು ಮಹಾನ್ ಭಾಗ್ಯ ಎಂದೇ ನಾನು ಭಾವಿಸಿದ್ದೇನೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ‘ರೈತ ಸಾಂತ್ವನ ಯಾತ್ರೆ’ಯನ್ನು ವ್ಯಂಗ್ಯವಾಗಿ ಸ್ವಾಗತ ಮಾಡಿದ ಸಿದ್ದರಾಮಯ್ಯಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ!   

ರಾಜಕೀಯ

ಬೆಂಗಳೂರು: ತಮ್ಮ ಪಕ್ಷದ ಕೇರಳ ಘಟಕಕ್ಕೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರ್ಕಾರದ ಭಾಗವಾಗಿ ಉಳಿಯಲು ಅವಕಾಶ ನೀಡಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಶ್ಲಾಘಿಸಿದ್ದಾರೆ.

ಭಾರತೀಯ ಜನತಾ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿಯನ್ನು ಪಿಣರಾಯಿ ವಿಜಯನ್ ಬೆಂಬಲಿಸಿದ್ದಾರೆ ಎಂಬ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ಹೇಳಿಕೆಯನ್ನು ವಿಜಯನ್ ನಿರಾಕರಿಸಿದ ಒಂದು ದಿನದ ನಂತರ ಇದು ನಡೆದಿದೆ.

ಜೆಡಿ(ಎಸ್)ನ ಕೇರಳ ಘಟಕವು ಎಲ್‌ಡಿಎಫ್‌ನ ಅವಿಭಾಜ್ಯ ಅಂಗವಾಗಿ ಮುಂದುವರಿದಿದೆ ಎಂದು ಕುಮಾರಸ್ವಾಮಿ ಹೇಳಿದರು. “ಕೇರಳದ ಪರಿಸ್ಥಿತಿ ಕರ್ನಾಟಕಕ್ಕಿಂತ ಭಿನ್ನವಾಗಿದೆ. ನಮ್ಮಲ್ಲಿರುವ ಸಮಸ್ಯೆ ನಮ್ಮ ಪಕ್ಷಕ್ಕೆ ಸೀಮಿತವಾಗಿದೆ. ಇದರ ಬಗ್ಗೆ ನಾವು ಕೇರಳ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲು ಬಯಸುವುದಿಲ್ಲ.” ಎಂದರು.

ಎಲ್‌ಡಿಎಫ್‌ನಲ್ಲಿ ಜೆಡಿಎಸ್‌ನ ನಿರಂತರ ಭಾಗವಹಿಸುವಿಕೆಗಾಗಿ ವಿಜಯನ್‌ಗೆ ಕೃತಜ್ಞತೆ ಸಲ್ಲಿಸಿದ ಕುಮಾರಸ್ವಾಮಿ, ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸಿದ್ದಕ್ಕಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕ್ಯಾಬಿನೆಟ್ ಮಂತ್ರಿಗಳನ್ನು ಟೀಕಿಸಿದರು.

ಪಾಕಿಸ್ತಾನವನ್ನು ಬೆಂಬಲಿಸಲು ರಾಜ್ಯ ಸಚಿವ ಸಂಪುಟವು ಪಂದ್ಯಕ್ಕೆ ಹಾಜರಾಗಿ ಅವರ ಆದ್ಯತೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. “ಇದು ಭಾರತ ಮತ್ತು ಪಾಕಿಸ್ತಾನದ ಪಂದ್ಯವಾಗಿದ್ದರೆ, ಅದು ಉತ್ತಮವಾಗಿತ್ತು. ಆದರೆ ಪಂದ್ಯ ನಡೆದಿದ್ದು ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವೆ. ಅವರು ಪಾಕಿಸ್ತಾನಕ್ಕೆ ಅಥವಾ ಆಸ್ಟ್ರೇಲಿಯಾಕ್ಕೆ ಬೆಂಬಲ ನೀಡಿದ್ದಾರೆಯೇ? ರಾಜ್ಯ ಸಂಕಷ್ಟದಲ್ಲಿದೆ, ಸರ್ಕಾರ ಕ್ರಿಕೆಟ್ ಪಂದ್ಯವನ್ನು ನೋಡುತ್ತಿದೆ” ಎಂದು ಕುಮಾರಸ್ವಾಮಿ ಹೇಳಿದರು.

“ಅವರು ಭರವಸೆ ನೀಡಿದ್ದನ್ನು ಮಾಡಿದ್ದೇವೆ ಎಂದು ಹೇಳುತ್ತಾರೆ, ಆದರೆ ರೈತರು ಸಂಕಷ್ಟದಲ್ಲಿದ್ದಾರೆ. ಸರಕಾರ ಕೇಂದ್ರ ಸರಕಾರದಿಂದ ಹಣ ಕೇಳುತ್ತಿದೆ. ಕೇಂದ್ರ ಸರ್ಕಾರಕ್ಕೆ ಸರ್ಕಾರ ಪತ್ರ ಬರೆದಿದೆ. ಈಗ ಸರ್ಕಾರ ಕೇಂದ್ರದ ಮೊರೆ ಹೋಗಬೇಕು,’’ ಎಂದು ಹೇಳಿದ ಅವರು, ರೂ.4,860 ಕೋಟಿ ಬೆಳೆ ನಷ್ಟ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ಉಲ್ಲೇಖಿಸಿದರು. ಇನ್ನು ಕೆಲವು ಜಿಲ್ಲೆಗಳಲ್ಲಿ ರಾಜ್ಯದ ರೈತರು ನೀರಿನ ಕೊರತೆ ಎದುರಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡರು ಆರೋಪಿಸಿದ್ದಾರೆ.

ಈ ವಾರದ ಆರಂಭದಲ್ಲಿ ಸಿದ್ದರಾಮಯ್ಯ ಅವರು ಬರಗಾಲದಿಂದ ರಾಜ್ಯದ ರೈತರು ರೂ.30,000 ಕೋಟಿ ನಷ್ಟ ಅನುಭವಿಸಿದ್ದಾರೆ ಎಂದು ಹೇಳಿದ್ದರು. 42 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ ನಿಯಮಗಳ ಪ್ರಕಾರ, ನಾವು ಕೇಂದ್ರ ಸರ್ಕಾರದಿಂದ ರೂ.4,860 ಕೋಟಿ ಕೇಳಿದ್ದೇವೆ ಮತ್ತು ಕೇಂದ್ರ ತಂಡವು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ

ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನುಕೈ ಹಿಡಿದಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ?

ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ! ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ! ಎಂದು ಕಾಂಗ್ರೆಸ್ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಿಡಿಕಾರಿದೆ.

ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು.

ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ! ಎಂದು ಹೇಳಿದೆ.

ಕುಮಾರಸ್ವಾಮಿಯವರೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ ಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ… ನಿಮಗೇನಾದರೂ ಆತ್ಮಗೌರವ ಇದೆಯೇ?

ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ.

ಅದು ಒತ್ತಟ್ಟಿಗಿರಲಿ, ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಶ್ರೀ.ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು..?!

ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ..?! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕುಮಾರಸ್ವಾಮಿಯವರೇ, ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ? ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!

ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೆಂಗೆ ಒದ್ದಾಡುತ್ತೀರಿ ಅಂತಾ!

ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ..!

ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು! ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು “ಕೈ ಹಿಡಿದ” ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ? ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ!

ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ… ಅಲ್ ದ ಬೆಸ್ಟ್! ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ.

ರಾಜಕೀಯ

ಬೆಂಗಳೂರು: ‘ಬಾಳೆಗೊಂದು ಏಟು, ಬಾಳಿಗೊಂದು ಮಾತು’ ಎನ್ನುವ ಮಾತಿದೆ. ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ಕಾಂಗ್ರೆಸ್ ಪಕ್ಷಕ್ಕೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!! ಮೂರ್ಖರಿಗೆ ಎಷ್ಟು ಹೇಳಿದರೂ ಅಷ್ಟೇ, ಅರ್ಥವೇ ಆಗುವುದಿಲ್ಲ ಎಂದು ಜೆಡಿಎಸ್ ಪಕ್ಷ ಕಾಂಗ್ರೆಸನ್ನು ತರಾಟೆಗೆ ತೆಗೆದುಕೊಂಡಿದೆ.

ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆಯಲ್ಲಿ ಪಕ್ಷ ವಿಸರ್ಜನೆ ಮಾತು ಹೇಳಿದ್ದು ನಿಜ. “ನನಗೆ ಬಹುಮತದ ಸರಕಾರ ಕೊಟ್ಟರೆ 5 ವರ್ಷದಲ್ಲಿ ಪಂಚರತ್ನಗಳನ್ನು ಜಾರಿ ಮಾಡುವೆ. ಮಾತು ತಪ್ಪಿದರೆ ಮತ್ತೆಂದೂ ಬಾರಿ ಮತ ಕೇಳಲು ಬರುವುದಿಲ್ಲ, ಪಕ್ಷವನ್ನೇ ವಿಸರ್ಜಿಸುತ್ತೇನೆ” ಎಂದಿದ್ದರು. ಈ ಹೇಳಿಕೆಯ ವಿಡಿಯೋ, ಸುದ್ದಿಗಳಿವೆ ಗಮನಿಸಬಹುದು.

ಕಾಂಗ್ರೆಸ್ ಪಕ್ಷಕ್ಕೆ ಈ ಪರಿಯ ಅಜ್ಞಾನವೇ? ಪರಮಾಶ್ಚರ್ಯ!! ವರ್ಷದ ಕೂಳಿನ ಪಂಚರತ್ನಗಳಿಗೂ, ಒಪ್ಪೊತ್ತಿನ ಹರುಷದ ನಕಲಿ ಗ್ಯಾರಂಟಿಗಳಿಗೂ ಹೋಲಿಕೆಯೇ? ಎಲ್ಲರಿಗೂ ಫ್ರೀ ಫ್ರೀ ಎಂದು ಹೇಳಿ ಪಂಗನಾಮ ಹಾಕಿದ್ದು ಗೊತ್ತಿಲ್ಲದ ಸಂಗತಿಯೇ? ಎಲ್ಲಾ ಕಾಲದಲ್ಲಿಯೂ ಟೋಪಿ ಹಾಕಬಹುದು ಎನ್ನುವ ಅಹಂಕಾರವೇ?

ಇದನ್ನೂ ಓದಿ: ದೀಪಾವಳಿಯಂದು 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸಬಹುದು: ಸುಪ್ರೀಂ ಕೋರ್ಟ್

ಕೆಟ್ಟ ದಾರಿಯಲ್ಲಿ ಅಧಿಕಾರ ಹಿಡಿಯುವುದು ಕಾಂಗ್ರೆಸ್ ಚಾಳಿ. ಶೆಟ್ಟರ್, ಸವದಿಯಂಥ ಬಿಜೆಪಿಗರನ್ನು ಬಲೆಬೀಸಿ ಬಿಗಿದಪ್ಪಿಕೊಂಡ ಹಸ್ತಪಕ್ಷಕ್ಕೆ, ಮೈಯ್ಯೆಲ್ಲಾ ಉರಿ ಹತ್ತಿಕೊಂಡಿದೆ. ಸ್ವಇಚ್ಛೆಯಿಂದಲೇ ಉರಿ ಇಟ್ಟುಕೊಂಡರೆ ಹೊಣೆ ಯಾರು? ಬಹುಶಃ,ಅಂಗೈಲಿ ಕೇಶವೇಕೆ ಬೆಳೆಯುತ್ತಿಲ್ಲವೆಂದು ಕೈಕೈ ಉಜ್ಜಿಕೊಳ್ಳುತ್ತಿದೆಯಾ ಕಾಂಗ್ರೆಸ್?

ಜೆಡಿಎಸ್‌ ಬಿಜೆಪಿ ಬಾಗಿಲಿಗೆ ಪದೇಪದೆ ಹೋಗುತ್ತದೆಂದು ಹಲ್ಲು ಗಿಂಜುವ ಕಾಂಗ್ರೆಸ್ಸಿಗರಿಗೆ; ಅದೇ ಬಿಜೆಪಿ ಜತೆ ಅಧಿಕಾರ ಅನುಭವಿಸಿದ ನಿತೀಶ್‌ ಕುಮಾರ್‌, ಮಮತಾ ಬ್ಯಾನರ್ಜಿ, ಸ್ಟಾಲಿನ್, ಉದ್ಧವಠಾಕ್ರೆ ಮನೆಗಳ ಸುತ್ತ ಗಿರಕಿ ಹೊಡೆಯಲು ಸಂಕೋಚವಿಲ್ಲ! ಗಂಗೆಯಲ್ಲಿ ಮಿಂದರೆ ಕಾಗೆ ಕೋಗಿಲೆ ಆಗುತ್ತದೆಯೇ ಕಾಮಾಲೆ ಕಣ್ಣಿನ ಕಾಂಗ್ರೆಸ್ಸಿಗರೇ?

ಪ್ರಜಾಪ್ರಭುತ್ವದಲ್ಲಿ ಮೈತ್ರಿ, ಹೊಂದಾಣಿಕೆ ಸಾಮಾನ್ಯ. ಆಯಾ ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತದೆ. ದೇಶ ವಿದೇಶದಲ್ಲೂ ಇದ್ದದ್ದೇ. ಆದರೆ, ನಮ್ಮ ಪಕ್ಷವನ್ನು ಬಿಜೆಪಿ ಬೀ ಟೀಂ ಎಂದು ಮೂದಲಿಸುವ ಕಾಂಗ್ರೆಸ್ಸಿಗೆ, ಸ್ವತಃ ತಾನೇ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎನ್ನುವುದು ಮರೆತಿದೆ. ದುರದೃಷ್ಟಕ್ಕೆ ಇಂಥ ಜಾಣರೋಗಕ್ಕೆ ಮದ್ದಿಲ್ಲ!! ಎಂದು ಹೇಳಿದೆ.

ಸಿನಿಮಾ

ಭಾರತದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡೆಕ್ಷನ್ಸ್ ನಿರ್ಮಿಸುತ್ತಿರುವ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ನಾಯಕ ನಟನಾಗಿ ನಟಿಸುತ್ತಿರುವ ನೂತನ ಚಲನಚಿತ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿ ಚಿತ್ರತಂಡವನ್ನು ಹರಸಿದರು.

ಚಲನಚಿತ್ರ ನಿರ್ಮಾಣ ಕ್ಷೇತ್ರದಲ್ಲಿ ಅನೇಕ ಮೈಲುಗಲ್ಲುಗಳನ್ನು ಸ್ಥಾಪನೆ ಮಾಡಿರುವ ಲೈಕಾ ಸಂಸ್ಥೆಯ ಅಧ್ಯಕ್ಷ ಎ.ಸುಭಾಸ್ಕರನ್ ಸೇರಿದಂತೆ ಅವರ ಕುಟುಂಬ ಸದಸ್ಯರು, ಸಂಸ್ಥೆಯ ಅನೇಕ ಪ್ರಮುಖರು, ಚಿತ್ರತಂಡದವರು ಈ ಸಂತೋಷದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬುಧವಾರ ಈ ಕಾರ್ಯಕ್ರಮ ನಡೆಯಿತು.

ರಾಜಕೀಯ

ನೈಸ್ ಯೋಜನೆಗೆ ಹೆಚ್.ಡಿ.ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು. ಆದರೆ, ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ!! ಯಾಕೆ?? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನೈಸ್ ರಸ್ತೆಯ ‘ತಿರುಚಿದ ಒಪ್ಪಂದ’ದ ಬಗ್ಗೆಯೂ ಅವರು ಹೇಳಬೇಕಿತ್ತಲ್ಲವೇ? ಬ್ರ್ಯಾಂಡ್ ಬೆಂಗಳೂರು ಟೀಮಿನ ಮುಖ್ಯಸ್ಥರ ಕರಾಮತ್ತಿನ ಬಗ್ಗೆಯೂ ಬೆಳಕು ಚೆಲ್ಲಬೇಕಲ್ಲವೇ? ಅದು ಬಿಟ್ಟು, ಸತ್ಯ ಮರೆಮಾಚಿ ಬರೀ ‘ಸಹಿ’ಯ ಬಗ್ಗೆ ನೀವು ಗೊಣಗಿದ್ದು ಯಾಕೆ? ಸದನ ಸಮಿತಿ ವರದಿಯ ಬಗ್ಗೆಯೂ ಚಕಾರ ಎತ್ತದಿರುವುದು ಯಾಕೋ? ಏನಿದು ಈ ನಿಗೂಢ ಸೋಜಿಗ??

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಉರುಫ್ ನೈಸ್ ರಸ್ತೆ ಯೋಜನೆಗೆ ರಾಜ್ಯ ಸರಕಾರದಿಂದ ನಯಾಪೈಸೆ ಕೊಡುವುದಿಲ್ಲ, ಪೂರ್ಣ ಹೂಡಿಕೆ ಹಣವನ್ನು ಕಂಪನಿಯೇ ಭರಿಸಬೇಕು, ಭೂಸ್ವಾಧೀನವೂ ಸೇರಿ ಸರಕಾರದ ಮೇಲೆ ಯಾವುದೇ ಹೊರೆ ಇರುವಂತಿಲ್ಲ. ಇದು ದೇವೇಗೌಡರ ಕಾಲದಲ್ಲಿ ಆದ ಮೂಲ ಒಪ್ಪಂದದ ಸಾರಾಂಶ. ಹಾಗಾದರೆ, ಈ ಯೋಜನೆ ‘ಸಾರ’ವಾಗಿದ್ದು ಯಾರಿಗೆ?

ಬ್ರ್ಯಾಂಡ್ ಬೆಂಗಳೂರು ಹರಿಕಾರಾಗಲು ಹೊರಟಿರುವ ನೀವು, ‘ತಿರುಚಿದ ಒಪ್ಪಂದ’ದ ಸೂತ್ರಧಾರರನ್ನೇ ಪಕ್ಕದಲ್ಲಿ ಇಟ್ಟುಕೊಂಡಿದ್ದೀರಿ. ತಿರುಚಿದ ಪರಿಣಾಮ ರಾಜ್ಯವು ಕೋರ್ಟ್ ಕಟಕಟೆಯಲ್ಲಿ ನಿಲ್ಲಬೇಕಾಯಿತು. ಸಾವಿರಾರು ಕೋಟಿ ಲೂಟಿಯಾಯಿತು. ಸರಕಾರ & ಜನರ ಸಾವಿರಾರು ಎಕರೆ ಭೂಮಿ ಭೂಗಳ್ಳರ ಪಾಲಾಯಿತು.

ಬ್ರ್ಯಾಂಡ್ ಬೆಂಗಳೂರು ಎಂದರೆ ಬುಲ್ಡೋಜ್ ಬೆಂಗಳೂರಾ? ಇಡೀ ಬೆಂಗಳೂರು ನಗರವನ್ನು ಛಿದ್ರಛಿದ್ರ ಮಾಡಿ ಪೋಗದಸ್ತಾಗಿ ಬುಲ್ಡೋಜ್ ಮಾಡಿ ಕಿಸೆ ತುಂಬಿಸಿಕೊಳ್ಳುವುದಾ? ಕರ್ನಾಟಕವನ್ನು ಕಡಲೇಪುರಿಯಂತೆ ಮುಕ್ಕಿ ತಿನ್ನುವುದಾ?

2014-2 016ರಲ್ಲಿನ ಸದನ ಸಮಿತಿ ವರದಿಯನ್ನು ತಾವು ಓದಿಲ್ಲವೇ? ಅಥವಾ ಅದನ್ನು ಕಸದ ಬುಟ್ಟಿಗೆ ಎಸೆದಿದ್ದೀರಾ? ಕೊಳ್ಳೆ ಹೊಡೆದ ಈಸ್ಟ್ ಇಂಡಿಯಾದಂಥ ಕಂಪನಿ ಜತೆ ಕೈ ಜೋಡಿಸಿದ ನಿಮಗೆ, ದೇವೇಗೌಡರ ಹೆಸರು ಹೇಳುವ ಅರ್ಹತೆ ಇದೆಯಾ? ರಾಜ್ಯದ ಅಭ್ಯುದಯಕ್ಕೆ ಬದುಕನ್ನೇ ಮೀಸಲಿಟ್ಟ ಆ ಹಿರಿಯ ಜೀವದ ಬಗ್ಗೆ ನಾಲಿಗೆ ಜಾರಿ ಬಿಡಲು ನಾಚಿಕೆ ಆಗುವುದಿಲ್ಲವೇ?

ನೈಸ್ ಕರ್ಮವನ್ನೆಲ್ಲ ಒಮ್ಮೆ ಕಣ್ಮುಚ್ಚಿ ನೆನಪು ಮಾಡಿಕೊಳ್ಳಿ. ಅಲ್ಲಿ ನೀವೆಲ್ಲಿ ನಿಲ್ಲುತ್ತಿರಿ ಎಂದು ಊಹಿಸಿಕೊಳ್ಳಿ, ಮಾಡಿದ ಪಾಪಗಳೆಲ್ಲವೂ ಸ್ಲೈಡುಗಳಂತೆ ಪ್ರತ್ಯಕ್ಷವಾಗುತ್ತವೆ. ಗಂಗೆಯಲ್ಲಿ ಸಾವಿರ ಸಲ ಮುಳುಗಿದರೂ ಅಳಿಯದ ಪಾಪವದು.ರಾಜ್ಯವನ್ನೇ ದೋಚಿದ ಖಾಸಗಿ ಕಂಪನಿಗೆ ‘ಪೊಲಿಟಿಕಲ್ ಏಜೆಂಟ್’ ಆಗುವುದಕ್ಕೆ ಅಸಹ್ಯ ಅನಿಸುವುದಿಲ್ಲವೇ?

ನೈಸ್ ಯೋಜನೆ ಯಾರಿಗೆಲ್ಲಾ ಕಾಮಧೇನು, ಕಲ್ಪವೃಕ್ಷವಾಗಿದೆ ನನಗಿಂತ ನಿಮಗೆ ಚೆನ್ನಾಗಿ ಗೊತ್ತು. ಧನಪಿಶಾಚಿ ರಾಜಕಾರಣಿಗಳು, ಮುಖ್ಯ ಕಾರ್ಯದರ್ಶಿ ಮಟ್ಟದವರೂ ಸೇರಿ ಅನೇಕ ಅಧಿಕಾರಿಗಳ ‘ಅನೈತಿಕ ಭ್ರಷ್ಟವ್ಯೂಹ’ ಕರ್ನಾಟಕವನ್ನು ಕಂಡರಿಯದ ರೀತಿಯಲ್ಲಿ ಲೂಟಿ ಮಾಡಿದೆ. ಈ ಲೂಟಿಯ ಕಥೆಯಲ್ಲಿ ನಿಮ್ಮ ಪಾತ್ರವೇನು?

ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು.ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ?

ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರಕಾರ ನಿಮ್ಮದಲ್ಲವೇ?? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ? ಎಂದು ಕಿಡಿಕಾರಿದ್ದಾರೆ.